ಇಂಫಾಲ:ಮಾ-20:(www.justkannada.in) ಮಣಿಪುರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರ ಬಹುಮತ ಸಾಬೀತುಪಡಿಸಿದ್ದು, ಕಾಂಗ್ರೆಸ್ ಗೆ ತೀವ್ರ ಮುಖಭಂಗವಾದಂತಾಗಿದೆ.

ಮಾ.15 ರಂದು ಮಣಿಪುರದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಬಿರೇನ್ ಸಿಂಗ್ ಅವರಿಗೆ ಮಾ.20 ರಂದು ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲರು ಸೂಚಿಸಿದ್ದರು. ಈ ಹಿನ್ನಲೆಯಲ್ಲಿ
ವಿಧಾನಸಭೆಯಲ್ಲಿ ನಡೆದ ವಿಶ್ವಾಸಮತ ಯಾಚನೆಯಲ್ಲಿ 32 ಮತಗಳನ್ನು ಪಡೆಯುವ ಮೂಲಕ ಬಿಜೆಪಿ ಗೆಲುವು ಸಾಧಿಸಿದೆ.

60 ಸದಸ್ಯ ಬಲದ ಮಣಿಪುರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 21 ಸ್ಥಾನ ಗಳಿಸಿದ್ದು 2ನೇ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಬಹುಮತ ಸಾಬೀತಿಗೆ ಇನ್ನೂ 10 ಸದಸ್ಯರ ಬೆಂಬಲದ ಅಗತ್ಯವಿತ್ತು. ಕಾಂಗ್ರೆಸ್ ಪಕ್ಷ 28 ಸ್ಥಾನಗಳಿಸುವ ಮೂಲಕ ಅತಿ ದೊಡ್ಡ ಪಕ್ಷವಾಗಿತ್ತು. ಆದರೆ ಬಹುಮತಕ್ಕೆ ಬೇಕಾಗಿದ್ದ 3 ಸದಸ್ಯರ ಬೆಂಬಲ ಪಡೆಯುವಲ್ಲಿ ವಿಫಲವಾಗುವ ಮೂಲಕ ಅಧಿಕಾರದ ಗದ್ದುಗೆ ಏರುವ ಕನಸು ಭಗ್ನಗೊಂಡಂತಾಗಿದೆ.

21 ಸ್ಥಾನ ಪಡೆದಿದ್ದ ಭಾರತೀಯ ಜನತಾ ಪಕ್ಷಕ್ಕೆ ಸ್ಥಳೀಯ ಪಕ್ಷವಾದ ನಾಗಾ ಪೀಪಲ್ಸ್ ಫ್ರಂಟ್, ನ್ಯಾಷನಲ್ ಪೀಪಲ್ಸ್ ಪಾರ್ಟಿ, ರಾಮ್ ವಿಲಾಸ್ ಪಾಸ್ವಾನ್ ನೇತೃತ್ವದ ಲೋಕ್ ಜನಶಕ್ತಿ ಪಕ್ಷದ ಶಾಸಕರು ಬೆಂಬಲ ನೀಡಿದ್ದಾರೆ. ಅಲ್ಲದೇ ಪಕ್ಷಾಂತರಗೊಂಡಿದ್ದ ಕಾಂಗ್ರೆಸ್ ನ ಇಬ್ಬರು ಶಾಸಕರು ಹಾಗೂ ತೃಣಮೂಲ ಕಾಂಗ್ರೆಸ್ ನ ಶಾಸಕರೂ ಸಹ ಬಿಜೆಪಿ ಸರ್ಕಾರಕ್ಕೆ ಬೆಂಬಲ ಸೂಚಿಸಿದ್ದರು. ಇದರಿಂದ ಮಣಿಪುರದಲ್ಲೂ ಬಿಜೆಪಿ ಸರ್ಕಾರ ಅಧಿಕಾರದ ಗದ್ದುಗೆ ಏರಿದೆ.

Manipur Assembly,BJP,N Biren Singh,Wins Floor Test