ಕೃಷ್ಣ ವಿರುದ್ಧದ ತನಿಖೆಗೆ ಸುಪ್ರೀಂ ತಡೆ
ನವದೆಹಲಿ: ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಅರಣ್ಯಪ್ರದೇಶದಲ್ಲಿ ಅಕ್ರಮವಾಗಿ ಗಣಿಗಾರಿಕೆಗೆ ಅನುಮತಿ ನೀಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಲೋಕಾಯುಕ್ತ ಪೊಲೀಸರಿಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಕೇಂದ್ರದ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಸುಪ್ರೀಂಕೋರ್ಟ್‌ನಲ್ಲಿ ದಾಖಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ತನಿಖೆಗೆ ತಡೆಯಾಜ್ಞೆ ನೀಡಿದೆ.
ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಅಲ್ತಮಾಸ್ ಕಬೀರ್, ಸುರೀಂದರ್ ಸಿಂಗ್ ನಿಜ್ಜರ್ ಮತ್ತು ಗ್ಯಾನ್ ಸುಧಾ ಮಿಶ್ರಾ ದೂರಿನ ವಿಚಾರಣೆ ನಡೆಸಿ, ಲೋಕಾಯುಕ್ತ ಪೊಲೀಸರು ದಾಖಲಿಸಿದ ಎಫ್‌ಐಆರ್ ಅವಸರವಾದಿತನದಿಂದ ಕೂಡಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕಳೆದ ಡಿಸೆಂಬರ್ ತಿಂಗಳ ಅವಧಿಯಲ್ಲಿ ಲೋಕಾಯುಕ್ತ ಪೊಲೀಸರ ದಾಖಲಿಸಿದ ಎಫ್‌ಐಆರ್ ರದ್ದುಗೊಳಿಸುವಂತೆ ಎಸ್.ಎಂ.ಕೃಷ್ಣ ಕೋರಿದ ಮನವಿಯನ್ನು ಜನವರಿ 20 ರಂದು ಹೈಕೋರ್ಟ್ ತಿರಸ್ಕರಿಸಿತ್ತು.
ಸರಕಾರದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳನ್ನು ನ್ಯಾಯಾಲಯಗಳಲ್ಲಿ ಪ್ರಶ್ನಿಸಲಾಗದು. ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳಿಗೆ ಯಾವುದೇ ವ್ಯಕ್ತಿಯ ಮೇಲೆ ಆಪಾದನೆ ಹೊರಿಸಲು ಸಾಧ್ಯವಾಗದು ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅರ್ಜಿಯಲ್ಲಿ ದಾಖಲಿಸಿದ್ದರು.
ಬೆಂಗಳೂರು ಮೂಲದ ಉದ್ಯೋಗಿಯಾದ ಟಿ.ಜೆ.ಆಬ್ರಾಹಂ ಲೋಕಾಯುಕ್ತ ಇಲಾಖೆಯಲ್ಲಿ ಖಾಸಗಿ ದೂರು ದಾಖಲಿಸಿ ಮಾಜಿ ಮುಖ್ಯಮಂತ್ರಿಗಳಾದ ಧರ್ಮಸಿಂಗ್, ಎಚ್.ಡಿ.ಕುಮಾರಸ್ವಾಮಿ ಮತ್ತು ಎಸ್.ಎಂ.ಕೃಷ್ಣ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು 6832 ಎಕರೆ ಅರಣ್ಯ ಪ್ರದೇಶವನ್ನು 84 ಕಂಪೆನಿಗಳ ಗಣಿಗಾರಿಕೆಗೆ ಕಾನೂನುಬಾಹಿರವಾಗಿ ಅನುಮತಿ ನೀಡಿದ್ದಾರೆ ಎಂದು ಆರೋಪಿಸಿದ್ದರು.
ಲೋಕಾಯುಕ್ತ ನ್ಯಾಯಮೂರ್ತಿ ಎನ್.ಕೆ.ಸುದೀಂಧ್ರ ಅವರ ಆದೇಶದ ಮೇರೆಗೆ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.



0 Comments
You can be the first one to leave a comment.