Friday, August 21, 2026

BDA Apartments

Home Front Page ‘ಕಾಸಿಗಾಗಿ ಪೋಸ್ಟಿಂಗ್‌’ : 4 ಶಿಫಾರಸುಗಳ ಹಿಂದಿರುವ ಆ ʼಅತೀಂದ್ರʼ ಶಕ್ತಿ ಯಾವುದು? ಸರ್ಕಾರಕ್ಕೆ ಮಾಜಿ...

‘ಕಾಸಿಗಾಗಿ ಪೋಸ್ಟಿಂಗ್‌’ : 4 ಶಿಫಾರಸುಗಳ ಹಿಂದಿರುವ ಆ ʼಅತೀಂದ್ರʼ ಶಕ್ತಿ ಯಾವುದು? ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿಕೆ ಚಾಟಿ.

ಬೆಂಗಳೂರು,ಜೂನ್,28,2023(www.justkannada.in):  ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವರ್ಗಾವಣೆ ದಂಧೆ ಆರೋಪ ಮಾಡಿದ್ದು ‘ಕಾಸಿಗಾಗಿ ಪೋಸ್ಟಿಂಗ್‌’ ದಂಧೆ ಎಂದು ಟ್ವಿಟ್ಟರ್ ನಲ್ಲಿ ಕುಟುಕಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಪಂಚಗ್ಯಾರಂಟಿಗಳ ರಾಜ್ಯ ಕಾಂಗ್ರೆಸ್ ಸರಕಾರ, ಈಗ 6ನೇ ಗ್ಯಾರಂಟಿಯನ್ನೂ ಖಾತ್ರಿಗೊಳಿಸಿದೆ. ಅದು; ʼಕಾಸಿಗಾಗಿ ಪೋಸ್ಟಿಂಗ್!!ʼ ಅಧಿಕಾರಕ್ಕೆ ಬಂದು ತಿಂಗಳು ಮುಗಿಯುತ್ತಿದ್ದಂತೆಯೇ ವರ್ಗಾವಣೆ ದಂಧೆಯ ಕೊಚ್ಚೆಯಲ್ಲಿ ಈ ಸರಕಾರ ಎಗ್ಗಿಲ್ಲದೆ ಉರುಳಾಡುತ್ತಿದೆ ಎನ್ನುವುದಕ್ಕೆ ಈ ವರದಿಯೇ ಸಾಕ್ಷಿ ಎಂದು ಕಿಡಿಕಾರಿದ್ದಾರೆ.

ಸ್ವತಃ ಮುಖ್ಯಮಂತ್ರಿ ಕಚೇರಿಯಲ್ಲೇ ವರ್ಗಾವರ್ಗಿ ದಂಧೆಗೆ ʼಹುಂಡಿʼ ಇದೆ ಎನ್ನುವುದು ಇಲ್ಲಿ ದಾಖಲೆ ಸಮೇತ ಬಟಾಬಯಲಾಗಿದೆ. ಒಂದೇ ಹುದ್ದೆಗೆ ಸ್ವತಃ ಮುಖ್ಯಮಂತ್ರಿ ಅವರೇ ನಾಲ್ವರಿಗೆ ಶಿಫಾರಸು ಪತ್ರ ಕೊಟ್ಟಿದ್ದಾರೆ! ಸಿಎಂ ಕಚೇರಿಯಲ್ಲಿ ಏನೇನು ನಡೆಯುತ್ತಿದೆ? CMO ಅಂದರೆ @CMofKarnataka ವೋ ಅಥವಾ Corruption of Karnataka ವೋ?? ಎಂದು ಸರ್ಕಾರಕ್ಕೆ ಹೆಚ್.ಡಿಕೆ ಚಾಟಿ ಬೀಸಿದ್ದಾರೆ.

4 ಶಿಫಾರಸುಗಳ ಹಿಂದಿರುವ ಆ ʼಅತೀಂದ್ರʼ ಶಕ್ತಿ (!?) ಯಾವುದು? ಮೂರೊಪ್ಪತ್ತೂ ಶಿಫಾರಸು ಪತ್ರಗಳನ್ನು ಟೈಪಿಸಿ, ಸಿಎಂ ಸಾಹೇಬರ ಸಹಿ ಮಾಡಿಸುವುದರಲ್ಲಿಯೇ ಅಧಿಕಾರಿಗಳು ತಲ್ಲೀನರಾಗಿದ್ದಾರೆನ್ನುವುದು ಖಾತ್ರಿ. ವರ್ಗಾವರ್ಗಿಯ ಪೇಮೆಂಟ್‌ ಕೋಟಾ ನಿಯಂತ್ರಣ ಮಾಡುತ್ತಿರುವ ಆ ʼರಿಮೋಟ್‌ ಕಂಟ್ರೋಲ್‌ʼ ಬಗ್ಗೆ ಜನಕ್ಕೆ ಅರ್ಥವಾಗುತ್ತಿದೆ.

ಈ   ಕಾಂಗ್ರೆಸ್ ಸರಕಾರ ಬಂದ ಮೊದಲ ದಿನದಿಂದಲೇ ʼಕಾಸಿಗಾಗಿ ಪೋಸ್ಟಿಂಗ್‌ʼ ದಂಧೆ ಶುರುವಾಗಿದೆ. ʼಸರಕಾರದ ಕೆಲಸ ದೇವರ ಕೆಲಸʼ ಎನ್ನುವುದರ ಬದಲು ʼಬಂದಿದ್ದನ್ನು ಬಿಡದೇ ಬಾಚಿಕೋ..ʼ ಎಂಬುದು ಈ ಸರಕಾರದ ಧ್ಯೇಯನೀತಿ ಆಗಿದೆ. ಜನರ ಹಣೆಗೆ ಗ್ಯಾರಂಟಿ ತುಪ್ಪ ಸವರಿ, ಬಿಟ್ಟಿಭಾಗ್ಯದ ಬೆಲ್ಲದ ಆಮಿಷವೊಡ್ಡಿ ʼಲೂಟಿಪರ್ವʼಕ್ಕೆ ʼಹುಂಡಿʼ ಇಡಲಾಗಿದೆ ಎಂದು ಹೆಚ್.ಡಿಕೆ ಆರೋಪ ಮಾಡಿದ್ದಾರೆ.

Key words: Transfer -scam-Congress Govt-Former CM-HD kumaraswamy