Tuesday, August 11, 2026

BDA Apartments

Home Front Page ಕಾಂಗ್ರೆಸ್ ಪಕ್ಷದಲ್ಲಿ ತಾವು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆಯೇ ? – ಡಿಸಿಎಂ ಡಿಕೆಶಿ ಕುರಿತು ಆರ್.ಅಶೋಕ್...

ಕಾಂಗ್ರೆಸ್ ಪಕ್ಷದಲ್ಲಿ ತಾವು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆಯೇ ? – ಡಿಸಿಎಂ ಡಿಕೆಶಿ ಕುರಿತು ಆರ್.ಅಶೋಕ್ ಲೇವಡಿ

ಬೆಂಗಳೂರು, ಜನವರಿ 3,2025 (www.justkannada.in): ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ಏಳು ಮಂದಿ ಸಚಿವರು ಮತ್ತು 35 ಮಂದಿ ಶಾಸಕರು ಗುರುವಾರ ರಾತ್ರಿ ಔತಣಕೂಟ ಮಾಡಿರುವ ಕುರಿತು ಉಲ್ಲೇಖಿಸಿ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ವಿಪಕ್ಷ ನಾಯಕ ಆರ್ ಅಶೋಕ್ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶೋಕ್, ಕಾಂಗ್ರೆಸ್​ನಲ್ಲಿ ನಿಮ್ಮ (ಡಿಕೆ ಶಿವಕುಮಾರ್) ಸ್ಥಿತಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ. ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎಂಬ ತಮ್ಮ ಮಾತನ್ನು ಕಾರ್ಯಗತ ಮಾಡುವ ಸಮಯ ಬಂದಿದೆ ಎಂದು ಲೇವಡಿ ಮಾಡಿದ್ದಾರೆ.

ಅತ್ತ ಡಿಸಿಎಂ ಡಿಕೆ ಶಿವಕುಮಾರ್ ವಿದೇಶ ಪ್ರವಾಸಕ್ಕೆ ಹೋಗುವುದನ್ನೇ ಕಾಯುತ್ತಿದ್ದ ಸಿಎಂ ಸಿದ್ದರಾಮಯ್ಯ ಬಣ, ಇತ್ತ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ 35 ಶಾಸಕರ ಡಿನ್ನರ್ ಮೀಟಿಂಗ್ ನಡೆಸಿ ಶಕ್ತಿ ಪ್ರದರ್ಶನ ಮಾಡಿದೆ. ಸ್ವಾಮಿ ಡಿಕೆ ಶಿವಕುಮಾರ್ ಅವರೇ, ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎಂದು ಸದನದಲ್ಲಿ ತಾವು ಅಬ್ಬರಿಸದ್ದನ್ನು ಕಾರ್ಯಗತ ಮಾಡುವ ಸಮಯ ಬಂದಿದೆ ಎಂದು ಅಶೋಕ್ ಉಲ್ಲೇಖಿಸಿದ್ದಾರೆ.

ತಮ್ಮ ಅನುಪಸ್ಥಿತಿಯಲ್ಲಿ ಸಂಪುಟ ಸಭೆ ನಡೆಯುತ್ತದೆ. ಬಸ್ ಟಿಕೆಟ್ ದರ ಶೇ 15 ರಷ್ಟು ಹೆಚ್ಚಿಸುವಂತಹ ಪ್ರಮುಖ ನಿರ್ಧಾರ ಆಗುತ್ತದೆ. ಒಬ್ಬ ಉಪಮುಖ್ಯಮಂತ್ರಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷರ ಅನುಪಸ್ಥಿತಿಯಲ್ಲಿ ಇಂತಹ ನಿರ್ಧಾರಗಳು ಆಗುತ್ತೆ ಅಂದರೆ ಏನರ್ಥ? ಕಾಂಗ್ರೆಸ್ ಪಕ್ಷದಲ್ಲಿ ತಾವು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆಯೇ ಅಥವಾ ತಮ್ಮ ಅಬ್ಬರ ಏನಿದ್ದರೂ ಮಾಧ್ಯಮಗಳ ಮುಂದೆ ಮಾತ್ರವೇ? ಹೀಗೆ ಮುಂದುವರೆದರೆ ತಮ್ಮ ಕನಸು ಕನಸಾಗಿಯೇ ಉಳಿಯುವುದು ಮಾತ್ರ ಗ್ಯಾರೆಂಟಿ’ ಎಂದು ಅಶೋಕ್ ಟೀಕಿಸಿದ್ದಾರೆ.

Key words: Congress, DCM DK Shivakumar, R. Ashok