ರಾಜ್ಯದಲ್ಲಿ ವರುಣನ ಆರ್ಭಟ: ಈ ಭಾಗದಲ್ಲಿ ಶಾಲಾ ಕಾಲೇಜುಗಳಿಗೆ ರಜೆ

ಬೆಂಗಳೂರು, ಜುಲೈ 26,2025 (www.justkannada.in) : ರಾಜ್ಯದಲ್ಲಿ ಮುಂಗಾರು ಜೋರಾಗಿದ್ದು, ಹಲವೆಡೆ ವರುಣನ ಆರ್ಭಟ ಮುಂದುವರಿದಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಹ ಮಳೆಯಾಗಲಿದೆ. ರಾಜ್ಯಾದ್ಯಂತ ಜುಲೈ 31ರವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ ಜಿಲ್ಲೆಯಾದ್ಯಾಂತ ಇಂದು ಮತ್ತು ನಾಳೆ ರೆಡ್ ಅಲರ್ಟ್‌ ನೀಡಲಾಗಿದ್ದು, ಜುಲೈ 30ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಮುಂದಿನ ಐದಾರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಕನ್ನಡ ಜಿಲ್ಲೆಯ ಕುಮಟಾ, ಹೊನ್ನಾವರ ಭಾಗದಲ್ಲಿ ಹೆಚ್ಚು ಮಳೆ ಸುರಿದಿದೆ. ಶರಾವತಿ, ಅಘನಾಶಿನಿ, ಗುಂಡ್ಲಬಾಳ ನದಿಗಳು ಅಪಾಯ ಮಟ್ಟ ಮೀರಿ ಹರಿದು ನದಿ ಪಾತ್ರದ ಗ್ರಾಮಗಳು ಜಲಾವೃತವಾಗಿವೆ.

ಭಾರಿ ಮಳೆ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ 7 ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ದಾಂಡೇಲಿ, ಜೋಯಿಡಾ ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆಯಾಗಿದ್ದರೆ, ಶಿವಮೊಗ್ಗ ಜಿಲ್ಲೆಯ ಹೊಸನಗರ, ತೀರ್ಥಹಳ್ಳಿ ತಾಲೂಕಿನ ಶಾಲಾ ಕಾಲೇಜಿಗೆ ರಜೆ ನೀಡಲಾಗಿದೆ. ಈ ರಜಾ ಅವಧಿಯ ಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜೆಯ ದಿನಗಳಲ್ಲಿ ಸರಿ ಹೊಂದಿಸಿಕೊಳ್ಳಲು ಸಂಬಂಧಿತ ಶಾಲಾ ಮುಖ್ಯಸ್ಥರುಗಳಿಗೆ ಸೂಚಿಸಲಾಗಿದೆ.

ಹಾಸನ ಜಿಲ್ಲೆಯ ಸಕಲೇಶಪುರ, ಬೇಲೂರು ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್ ಆರ್ ಪುರ ತಾಲೂಕಿನ ಶಾಲೆಗಳಿಗೂ ರಜೆ ಘೋಷಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.vtu

Key words: Rain, state,  Holiday, schools, Colleges