ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜೊತೆ ಸಭೆ: ಬೇಡಿಕೆಗಳ ಬಗ್ಗೆ ಚರ್ಚೆ ಭರವಸೆ ನೀಡಿದ ಸಚಿವ ಮಧು ಬಂಗಾರಪ್ಪ

ಬೆಂಗಳೂರು, ಆಗಸ್ಟ್, 29,2025 (www.justkannada.in):  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದೊಂದಿಗೆ ಇಂದು ಬೆಂಗಳೂರಿನ ಮಲ್ಲೇಶ್ವರದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಕಚೇರಿಯಲ್ಲಿ ಸಭೆ ನಡೆಸಿದರು.

ಸಂಘದ ಅಧ್ಯಕ್ಷ ಚಂದ್ರಶೇಖರ ನುಗ್ಲಿ ಅವರ ನೇತೃತ್ವದಲ್ಲಿ ಹಲವು ಪ್ರತಿನಿಧಿಗಳು ಸಚಿವರನ್ನು ಭೇಟಿ ಮಾಡಿ ತಮ್ಮ ಬೇಡಿಕೆಗಳನ್ನು ಮಂಡಿಸಿದರು.

ಶಿಕ್ಷಕರ ಬೇಡಿಕೆಗಳಿಗೆ ಪ್ರತಿಕ್ರಿಯಿಸಿದ ಸಚಿವ ಮಧು ಬಂಗಾರಪ್ಪ, ಶಾಲಾ ಶಿಕ್ಷಣ ಇಲಾಖೆ ಸದಾ ಶಿಕ್ಷಕರ ಜೊತೆಗೆ ನಿಲ್ಲುವುದು ಎಂದು ಭರವಸೆ ನೀಡಿದರು. ಅಲ್ಲದೇ, ಈ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ತರುತ್ತೇವೆ ಎಂದು ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆಯಲ್ಲಿ ಸಕಾರಾತ್ಮಕ ನಿರ್ಧಾರದ ನಿರೀಕ್ಷೆಯಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಸಚಿವ ಮಧು ಬಂಗಾರಪ್ಪ, ಶಿಕ್ಷಕರ ಸಂಘವನ್ನು ಮುಷ್ಕರಕ್ಕೆ ಹೋಗಬಾರದೆಂದು ತಿಳಿಸಿದರು.

ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ. ಕೆ. ವಿ. ತ್ರಿಲೋಕ್ ಚಂದ್ರ ಉಪಸ್ಥಿತರಿದ್ದರು.

Key words: Primary School Teachers’ Association, Meeting,  Minister, Madhu Bangarappa