ಮೈಸೂರು,ಸೆಪ್ಟಂಬರ್,20,2025 (www.justkannada.in): ನಾಳೆಯಿಂದ ಸಿಎಂ ಸಿದ್ದರಾಮಯ್ಯ ಎರಡು ದಿನಗಳ ಕಾಲ ಮೈಸೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು ಸೆಪ್ಟಂಬರ್ 22 ರಂದು ನಡೆಯಲಿರುವ ಮೈಸೂರು ದಸರಾ ಉದ್ಘಾಟನೆ ಸೇರಿ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ನಾಳೆ ಸಂಜೆ 4.25ಕ್ಕೆ ಬೆಂಗಳೂರಿನಿಂದ ಮೈಸೂರಿಗೆ ವಿಶೇಷ ವಿಮಾನದ ಮೂಲಕ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ರಾತ್ರಿ ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಬಳಿಕ ಸೆಪ್ಟಂಬರ್ 22ರ ಸೋಮವಾರ ಬೆಳಿಗ್ಗೆ 10.10 ರಿಂದ 10.40ರವರೆಗೆ ಚಾಮುಂಡಿ ಬೆಟ್ಟದಲ್ಲಿ ನಡೆಯಲಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆ 2025ರ ದಸರಾ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ನಂತರ ಮಧ್ಯಾಹ್ನ 12.30ಕ್ಕೆ ಕುಪ್ಪಣ್ಣ ಪಾರ್ಕ್ ನಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನವನ್ನ ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಸಂಜೆ 4 ಗಂಟೆಗೆ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ನಡೆಯಲಿರುವ ದಸರಾ ಕುಸ್ತಿ ಪಂದ್ಯಾವಳಿಯನ್ನು ಉದ್ಘಾಟಿಸಲಿದ್ದಾರೆ.
ಸಂಜೆ 5 ಗಂಟೆಗೆ ಅರಮನೆ ಆವರಣದಲ್ಲಿ ಜರುಗಲಿರುವ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಸಂಜೆ 5.30ಕ್ಕೆ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ.
ರಾತ್ರಿ 7.30ಕ್ಕೆ ಕರ್ನಾಟಕ ವಸ್ತು ಪ್ರದರ್ಶನ ಆವರಣದಲ್ಲಿ ಆಯೋಜಿಸಿರುವ ವಸ್ತುಪ್ರದರ್ಶನವನ್ನ ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.
Key words: Mysore tour, CM, Siddaramaiah, dasara, programs