ನೇರ ನೇಮಕಾತಿಯಲ್ಲಿ 3 ವರ್ಷ ವಯೋಮಿತಿ ಸಡಿಲಿಕೆ: ಸಂಪುಟ ಸಭೆಯಲ್ಲಿ ಅನುಮೋದನೆ

ಬೆಂಗಳೂರು,ಅಕ್ಟೋಬರ್,9,2025 (www.justkannada.in): ರಾಜ್ಯ ಸಿವಿಲ್ ಸೇವೆ ಹುದ್ದೆಗಳ ನೇರ ನೇಮಕಾತಿಯಲ್ಲಿ3 ವರ್ಷ ವಯೋಮಿತಿ ಸಡಿಲಿಕೆಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ.

ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸಿವಿಲ್ ಸೇವೆ ಹುದ್ದೆಗಳ ನೇರ ನೇಮಕಾತಿಯಲ್ಲಿ ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳನ್ನು ಸಡಿಲಿಸಿ ದಿನಾಂಕ: 29.09.2025 ರಂದು ಹೊರಡಿಸಿರುವ ಆದೇಶಕ್ಕೆ ಘಟನೋತ್ತರ ಅನುಮೋದನೆ ದೊರೆತಿದೆ.

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಎರಡನೇ ಹಂತದಲ್ಲಿ 11 ಶ್ರಮಿಕ ವಸತಿ ಶಾಲೆಗಳನ್ನು ರೂ.405.55 ಕೋಟಿ ಅಂದಾಜು ಮೊತ್ತದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ (ತಿದ್ದುಪಡಿ) ವಿಧೇಯಕ, 2025 ಅನುಮೋದನೆ ನೀಡಲಾಗಿದೆ. 5ನೇ ರಾಜ್ಯ ಹಣಕಾಸು ಆಯೋಗದ ಅವಧಿಯನ್ನು ವಿಸ್ತರಿಸುವ ಬಗ್ಗೆ ಸಂಪುಟ ಸಭೆಯಲ್ಲಿ ಅನುಮೋದನೆ ನವೆಂಬರ್ ತನಕ ಅವಧಿ ವಿಸ್ತರಣೆ ಮಾಡಲಾಗಿದೆ.

2025-26ನೇ ಸಾಲಿನ ರಸಗೊಬ್ಬರ ದಾಸ್ತಾನಿಗೆ 200 ಕೋಟಿ ರೂ. ಸಾಲಕ್ಕೆ ಬಂಡವಾಳ ಖಾತ್ರಿ ನೀಡುವುದಕ್ಕೆ ಒಪ್ಪಿಗೆ ನೀಡಲಾಗಿದೆ. ಜಲಾನಯನ ಅಭಿವೃದ್ಧಿ ಘಟಕ, ಪ್ರಧಾನಮಂತ್ರಿ ಕೃಷಿ ಸಿಂಚಯಿ ಹೆಚ್ಚುವರಿ 15 ಯೋಜನೆಗಳು 15 ತಾಲೂಕುಗಳಲ್ಲಿ 90 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನ ಮಾಡಲು ಸಂಪುಟ ಒಪ್ಪಿಗೆ ನೀಡಿದೆ.

Key words:  age relaxation, recruitment, Cabinet Meeting, approves