ಕಬ್ಬಿಗೆ ದರ ನಿಗದಿ: ಕೇಂದ್ರದ ಮೇಲೆ ಗೂಬೆ ಕೂರಿಸುವುದನ್ನ ಬಿಟ್ಟು ರೈತರ ಮನವಿಗೆ ಸ್ಪಂದಿಸಲಿ- ಸಂಸದ  ಯದುವೀರ್

ಮೈಸೂರು,ನವೆಂಬರ್,5,2025 (www.justkannada.in): ಕಬ್ಬಿನ ಬೆಲೆ ನಿಗದಿಗಾಗಿ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಕೇಂದ್ರದ ಮೇಲೆ ಗೂಬೆ ಕೂರಿಸುವುದನ್ನ ಬಿಟ್ಟು ರೈತರ ಮನವಿಗೆ ಸ್ಪಂದಿಸಲಿ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗ್ರಹಿಸಿದರು.

ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಬೆಳಗಾವಿಯಲ್ಲಿ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಕಬ್ಬಿನ ಬೆಲೆ ನಿಗದಿ ಮಾಡಬೇಕು. ರೈತರ ಮನವಿಗೆ ರಾಜ್ಯ ಸರ್ಕಾರ ಸ್ಪಂದಿಸಬೇಕು. ಅದು ಸರ್ಕಾರದ ಕರ್ತವ್ಯ. ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಈ ಹಿಂದಿನಿಂದಲೂ ಸಿದ್ದರಾಮಯ್ಯ ಏನಾದರೂ ಕೇಂದ್ರ ಸರ್ಕಾರದ ಮೇಲೆಯೇ ಆರೋಪ ಮಾಡೋದು. ಅದನ್ನು ಬಿಟ್ಟು ರೈತರ ಸಮಸ್ಯೆ ಬಗೆಹರಿಸಲಿ ಎಂದು ಹೇಳಿದರು.

ಮೈಸೂರಿನಲ್ಲಿ ಹುಲಿಗಳ ದಾಳಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಂಸದ ಯದುವೀರ್, ಅರಣ್ಯ ಇಲಾಖೆ ಸರಿಯಾದ ರೀತಿಯಲ್ಲಿ ಸ್ಪಂದಿಸಬೇಕು. ದತ್ತಾಂಶಗಳನ್ನು ನೋಡಬೇಕು. ಅರಣ್ಯದಲ್ಲಿ ಹುಲಿಗಳ ಸಂಖ್ಯೆ ಎಷ್ಟಿದೆ ಎಲ್ಲವನ್ನೂ ನೋಡಬೇಕು. ಪ್ರಕೃತಿ ಪ್ರಕೃತಿಯನ್ನು ಕಾಪಾಡಿಕೊಳ್ಳುತ್ತದೆ. ಮನುಷ್ಯ ಪ್ರಕೃತಿಗೆ ಕೈ ಹಾಕೋದು ಬೇಡ. ಹುಲಿಗಳ ಸಂಖ್ಯೆ ಹೆಚ್ಚಾಗಿದೆ. ಇದಕ್ಕೆ ಶಾಶ್ವತ ಪರಿಹಾರ ಬೇಕು. ಒಳ್ಳೆಯ ಯೋಜನೆ ರೂಪಿಸಬೇಕು. ಜನರಿಗೆ ತೊಂದರೆಯಾಗದಂತೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

Key words: Sugarcane, price fixing, State government, MP Yaduveer