6 ವರ್ಷದೊಳಗಿನ ಮಕ್ಕಳಿಗೆ ಆಧಾರ್ ನೋಂದಣಿ ಮಾಡಿಸಿ :ಡಿಸಿ ಡಾ.ಕುಮಾರ ಸೂಚನೆ

ಮಂಡ್ಯ,ನವೆಂಬರ್,17,2025 (www.justkannada.in): ಜಿಲ್ಲೆಯಲ್ಲಿ 4 ಸಾವಿರಕ್ಕೂ ಅಧಿಕ 6 ವರ್ಷದೊಳಗಿನ ಮಕ್ಕಳು ಆಧಾರ್ ನಲ್ಲಿ ನೋಂದಣಿ ಮಾಡಿಸಿಕೊಂಡಿಲ್ಲ ಸದರಿ ಮಕ್ಕಳಿಗೆ ಆಧಾರ್ ನೋಂದಣಿ ಮಾಡಿಸಿ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ಹೇಳಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಪೋಷಣ್ ಅಭಿಯಾನ ಯೋಜನೆಯಡಿ ಒಗ್ಗೂಡಿಸುವಿಕೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,  3-6 ವರ್ಷದೊಳಗಿನ 4 ಸಾವಿರಕ್ಕೂ ಹೆಚ್ಚಿನ ಮಕ್ಕಳು ಆಧಾರ್ ನಲ್ಲಿ ನೋಂದಣಿ ಮಾಡಿಸಿಕೊಂಡಿಲ್ಲ ಅವರೆಲ್ಲರಿಗೂ ಒಂದು ತಿಂಗಳೊಳಗಾಗಿ ಆಧಾರ್ ಮಾಡಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಇರುವ ಅಂಗನವಾಡಿಗಳಿಗೆ ಆಧಾರ್ ಸೇವಕರನ್ನು ಕರೆಸಿ ಅಲ್ಲಿಯೇ ಮಕ್ಕಳಿಗೆ ಆಧಾರ್ ಕಾರ್ಡ್ ಮಾಡಿಸಿ. ಮಕ್ಕಳು ಶಾಲೆಗೆ ಸೇರಿಸಲು ಆಧಾರ್ ಕಾರ್ಡ್ ಕಡ್ಡಾಯ ಹೀಗಾಗಿ ಅಧಿಕಾರಿಗಳು ವಿಶೇಷ ಆಸಕ್ತಿ ವಹಿಸಿ ಆಧಾರ್ ಕಾರ್ಡ್ ಮಾಡಿಸಿ ಎಂದು ಹೇಳಿದರು.

ಎಲ್ಲಾ ಅಂಗನವಾಡಿಗಳಿಗೆ ಪೌಷ್ಟಿಕ ಆಹಾರಗಳು ಸರಿಯಾಗಿ ಪೂರೈಕೆ ಮಾಡಲಾಗುತ್ತಿದೆಯೇ ಪರಿಶೀಲಿಸಿ. ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ಹೊಸ ಮೊಬೈಲ್ ಆಪ್ (Application) ಸಿದ್ದಪಡಿಸಲಾಗಿದೆ. ಅದರಲ್ಲಿ ಮಕ್ಕಳ ಹಾಜರಾತಿ ಹಾಗೂ ಮಕ್ಕಳಿಗೆ ನೀಡಿರುವ ಪೌಷ್ಟಿಕ ಆಹಾರ ಪದಾರ್ಥಗಳನ್ನು ಫೋಟೋ ಮೂಲಕ ಅಪ್ಲೋಡ್ ಮಾಡಬೇಕು ಎಂದು ಹೇಳಿದರು.

ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ಹಾಗೂ  ಅಂಗನವಾಡಿ ಸಹಾಯಕಿಯರ ಹುದ್ದೆಗೆ ಖಾಲಿ ಇದೆ. ಶ್ರೀಘ್ರವಾಗಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ಮಕ್ಕಳಿಗೆ ನೀಡಲಾಗುವ ಪೌಷ್ಟಿಕ ಆಹಾರಗಳನ್ನು ಸರಿಯಾಗಿ ಪೂರೈಕೆ ಮಾಡಿ ಅವಧಿ ಮುಗಿದ ಪದಾರ್ಥಗಳನ್ನು ನೀಡಬೇಡಿ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ಧನುಷ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಆಶಾ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಲೊಕೇಶ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶ್ರೀನಿವಾಸ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Aadhaar, registration, children, 6 years age, Mandya DC, Dr. Kumar