ಪೋಕ್ಸೋ ಕೇಸ್: ಮಾಜಿ ಸಿಎಂ ಬಿಎಸ್ ವೈಗೆ ತಾತ್ಕಾಲಿಕ ರಿಲೀಫ್ ನೀಡಿದ ಸುಪ್ರೀಂಕೋರ್ಟ್

ನವದೆಹಲಿ,ಡಿಸೆಂಬರ್,2,2025 (www.justkannada.in):    ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು ಪ್ರಕರಣದ ವಿಚಾರಣೆಗೆ ಸುಪ್ರೀಂಕೋರ್ಟ್ ಮಧ್ಯಂತರ ತಡೆ ನೀಡಿದೆ.

ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪಗೆ ಸಮನ್ಸ್ ನೀಡಲಾಗಿತ್ತು. ಸಮನ್ಸ್ ಪ್ರಶ್ನಿಸಿ ಬಿಎಸ್ ಯಡಿಯೂರಪ್ಪ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.  ಇದೀಗ ಈ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್  ಮುಖ್ಯ ನ್ಯಾಯಮೂರ್ತಿಗಳ ಪೀಠವು ವಿಚಾರಣೆಗೆ ಮಧ್ಯಂತರ ತಡೆ ನೀಡಿದೆ.

ಬಿ.ಎಸ್ ಯಡಿಯೂರಪ್ಪ ಪರ ವಾದ ಮಂಡಿಸಿದ ಹಿರಿಯ ವಕೀಲರು ಹೈಕೋರ್ಟ್ ನ 2025 ಫೆಬ್ರವರಿ 7ರ ತೀರ್ಪುನ್ನು ತಪ್ಪಾಗಿ ಅರ್ಥೈಸಲಾಗಿದೆ. ಹಿಂದಿನ ಸುತ್ತಿನ ತೀರ್ಪಿನ ಕಾರಣ ನೀಡಿ ಹೈಕೋರ್ಟ್ ಪರಿಗಣಿಸಿಲ್ಲ. ಬಿ.ಎಸ್ ಯಡಿಯೂರಪ್ಪ ಅರ್ಜಿಯನ್ನು ಅರ್ಹತೆ ಆಧಾರದಲ್ಲಿ ಪರಿಗಣಿಸಿಲ್ಲ ಎಂದರು.

ಹೈಕೋರ್ಟ್ ನಲ್ಲಿ ಹೊಸದಾಗಿ ತೀರ್ಮಾನಿಸಲು ಏಕೆ ಸೂಚಿಸಬಾರದು ಎಂದು ಪ್ರತಿವಾದಿಗಳಿಗೆ ಸುಪ್ರೀಂ ಕೋರ್ಟ್ ಪ್ರಶ್ನಿಸಿತು. ಬಳಿಕ ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಿತು.

ಪ್ರಕರಣ ಸಂಬಂಧ ಕೆಳಹಂತದ ನ್ಯಾಯಾಲಯ ಆರೋಪ ನಿಗದಿಗೆ ಸಂಬಂಧಿಸಿದಂತೆ ಯಡಿಯೂರಪ್ಪ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಸಮನ್ಸ್ ಜಾರಿ ಪ್ರಶ್ನಿಸಿ ಬಿಎಸ್‌ ವೈ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿ, ಟ್ರಯಲ್‌ ಗೆ ಅನುಮತಿ ನೀಡಿತ್ತು. ಬಳಿಕ 1ನೇ ಫಾಸ್ಟ್ ಟ್ರ‍್ಯಾಕ್ ಕೋರ್ಟ್ ಬಿ.ಎಸ್ ಯಡಿಯೂರಪ್ಪ ಸೇರಿದಂತೆ 4 ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಗೆ ಸಮನ್ಸ್ ಜಾರಿ ಮಾಡಿತ್ತು.

Key words: POCSO case, Supreme Court, temporary relief, former CM, BSY