ಮಂಡ್ಯಕ್ಕೆ ನಿಮ್ಮ ಕೊಡುಗೆ ಏನು ಎಂದು ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ HDK ಸವಾಲು

ನವದೆಹಲಿ,ಡಿಸೆಂಬರ್,8,2025 (www.justkannada.in):  ಕುಮಾರಸ್ವಾಮಿ ಮಂಡ್ಯಕ್ಕೆ ಏನು  ಕೊಡುಗೆ ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ  ಕೇಂದ್ರ ಸಚಿವ ಹೆಚ್ ಡಿ   ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ನಾನು ಕೊಟ್ಟಿದ್ದನ್ನು ಪಟ್ಟಿ ಮಾಡಿ ಹೇಳುತ್ತೇನೆ, ಮೊದಲು ಐದು ವರ್ಷ ಮುಖ್ಯಮಂತ್ರಿ ಆಗಿದ್ದಾಗ, ಈಗ ಏನೇನು ಕೊಟ್ಟಿದ್ದೀರಿ ಎಂಬುದನ್ನು ಹೇಳಿ ಎಂದು ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ನವದೆಹಲಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಹೆಚ್ ಡಿಕೆ, ನಾನು ಕೊಟ್ಟಿದ್ದನ್ನು ಹೇಳುತ್ತೇನೆ. ಸಿದ್ದರಾಮಯ್ಯ ಅವರೇ.. ನೀವು ರೈತರಿಗೆ ಏನು ಕೊಡುಗೆ ಕೊಟ್ಟಿದ್ದೀರಿ ಎಂಬುದನ್ನು ಹೇಳಿ. ಮಂಡ್ಯಕ್ಕೆ ನಿಮ್ಮ ಕೊಡುಗೆ ಏನು? ಹಿಂದಿನ ಐದು ವರ್ಷ ಆಡಳಿತದಲ್ಲಿ 200ಕ್ಕೂ ಹೆಚ್ಚು ರೈತರು ಮಂಡ್ಯದಲ್ಲಿ ಸರಣಿ ಆತ್ಮಹತ್ಯೆ ಮಾಡಿಕೊಂಡಿದ್ದೇ ನಿಮ್ಮ ಕೊಡುಗೆ. ಅಂಥ ಕಷ್ಟಕಾಲದಲ್ಲಿ ನಾನು ಅಧಿಕಾರಕ್ಕೆ ಬಂದ ಮೇಲೆ ಅದೇ ಜಿಲ್ಲೆಯ ರೈತರ 900 ಕೋಟಿ ಸಾಲ ಮನ್ನಾ ಮಾಡಿದೆ. ಇದಕ್ಕಿಂತ ಕೊಡುಗೆ ಬೇಕಾ? ಎಂದು ಟಾಂಗ್  ಕೊಟ್ಟರು.

ಪ್ರವಾಹ, ಮಳೆಯಲ್ಲಿ ಜನ ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ. ಆದರೆ ನೀವು ಮೋಜು ಮಸ್ತಿಯಲ್ಲಿ ಮುಳುಗಿದ್ದೀರಿ ಕಲ್ಯಾಣ ಕರ್ನಾಟಕದಲ್ಲಿ ತೊಗರಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ತೊಗರಿ ದರ ಕುಸಿದಿದೆ. ಅದಕ್ಕೆ ಏನು ಮಾಡಿದ್ದೀರಿ? ಎಂದು ಹೆಚ್ ಡಿಕೆ ಕಿಡಿಕಾರಿದರು.

Key words: Union Minister, HDK, challenges, CM Siddaramaiah