ಸಾರ್ವಜನಿಕರಿಗೆ ಯೋಜನೆಗಳ ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳಿ- ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು,ಜನವರಿ,12,2026 (www.justkannada.in): ಸಾರ್ವಜನಿಕರಿಗೆ ಅವಶ್ಯಕವಿರುವ ಯೋಜನೆಗಳ ಪ್ರಸ್ತಾವನೆಗಳನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳಿ. ಯೋಜನೆಗಳ ಪ್ರಾಮುಖ್ಯತೆಯ ಬಗ್ಗೆ ವಿವರಿಸಿದರೆ ಆಯವ್ಯಯದಲ್ಲಿ ಯೋಜನೆ ಸೇರಿಸುವುದರ ಜೊತೆಗೆ ಜಿಲ್ಲೆಯು ಅಭಿವೃದ್ಧಿ ಪಥದಲ್ಲಿ ಸಾಗುತ್ತದೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಅವರು ತಿಳಿಸಿದರು.

ಇಂದು ಜಿಲ್ಲಾ ಪಂಚಾಯತ್ ಡಿ.ದೇವರಾಜ್ ಅರಸು ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದು ನಂತರ ಸಚಿವ ಹೆಚ್.ಸಿ ಮಹದೇವಪ್ಪ ಮಾತನಾಡಿದರು.

ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಅವಶ್ಯಕವಿರುವ ಹೊಸ ಹಾಸ್ಟಲ್‌ ಗಳು ಹಾಗೂ ಹಾಸ್ಟೆಲ್‌ ಗಳಿಗೆ ಸ್ವಂತ ಕಟ್ಟಡಗಳ ವಿವರವನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ದೊರಕಿಸಬೇಕು ಎಂಬುದು ಮುಖ್ಯ ಆಶಯ ಎಂದರು.

ಆಶ್ರಮ ಶಾಲೆಗಳಲ್ಲಿ ಬಹುತೇಕ ಹೊರಗುತ್ತಿಗೆ ನೌಕರರು ಕೆಲಸ ನಿರ್ವಹಿಸುತ್ತಿದ್ದು, ನೇಮಕಾತಿ ಪ್ರಕ್ರಿಯೆ ಬಗ್ಗೆ ಹಾಗೂ ಹಾಡಿ ಜನರಿಗೆ ಹೆಚ್.ಡಿ.ಕೋಟೆ, ಪಿರಿಯಾಪಟ್ಟಣ ಹಾಗೂ ಹುಣಸೂರು ತಾಲ್ಲೂಕಿನಲ್ಲಿ ಕೌಶಲ್ಯಾಧಾರಿತ ತರಬೇತಿ ಕೇಂದ್ರಗಳನ್ನು ತೆರೆಯಬೇಕು ಎಂದು ಸಭೆಯಲ್ಲಿ ಚರ್ಚಿಸಲಾಯಿತು.

ಮೈಸೂರು ನಗರದಲ್ಲಿ 390 ಕೆ.ಎಸ್.ಆರ್.ಟಿ‌ಸಿ ಬಸ್ ಗಳು ಮಾತ್ರ ಕಳೆದ 15 ವರ್ಷದಿಂದ ಸಂಚಾರಕ್ಕೆ ಲಭ್ಯವಿದೆ. ಜನಸಂಖ್ಯೆ ಹೆಚ್ಚಳವಾಗಿದ್ದು, ಹೆಚ್ಚಿನ ಬಸ್ ಹಾಗೂ ಡಿಪೋನ ಅವಶ್ಯಕತೆ ಇರುತ್ತದೆ. ಈ ಬಗ್ಗೆ ಮಾಹಿತಿ ಸಲ್ಲಿಸುವಂತೆ ಸಚಿವ ಹೆಚ್.ಸಿ ಮಹದೇವಪ್ಪ ತಿಳಿಸಿದರು‌.

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ವಿದ್ಯಾಭ್ಯಾಸದಿಂದ ವಂಚಿತರಾಗಬಾರದು. ಅವರಿಗೆ ಬೇಕಿರುವ ವಸತಿ ಶಾಲೆಗಳು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಹಾಗೂ ಇನ್ನಿತರೆ ಯೋಜನೆಗಳ ಬಗ್ಗೆ ವರದಿ ಸಿದ್ಧಪಡಿಸುವಂತೆ ತಿಳಿಸಿದರು.

ಅಧಿಕಾರಿಗಳು ಸಭೆಯಲ್ಲಿ ಚರ್ಚಿಸುವ ಕೆಲವು ವಿಷಯಗಳನ್ನು ಇಲಾಖಾ ಮಂತ್ರಿಗಳ ವ್ಯಾಪ್ತಿಯಲ್ಲಿ ಚರ್ಚಿಸಿ ಸರಿಪಡಿಸಬಹುದು. ಅಂತಹ ವಿಷಯಗಳನ್ನು ಅವರ ಗಮನಕ್ಕೆ ಆಯವ್ಯಯದಲ್ಲಿ ಸೇರಿಸಬೇಕಿರುವ ವಿಷಯಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದರು.

ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಅವರು ಮಾತನಾಡಿ, ಅಧಿಕಾರಿಗಳು ಜಿಲ್ಲೆಯಲ್ಲಿ ಅವಶ್ಯಕವಿರುವ ಯೋಜನೆಗಳ ಕುರಿತು ಕ್ರೂಢೀಕೃತ ವರದಿಯನ್ನು ಶೀಘ್ರವಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆ ತಿಳಿಸಿದರು.

ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ಅವರು ಮಾತನಾಡಿ, ಮುಂದಿನ ದಿನಗಳಲ್ಲಿ ಕಸ ವಿಲೇವಾರಿ ಹಾಗೂ ಯುಜಿಡಿ ವ್ಯವಸ್ಥೆ, ಸಾರ್ವಜನಿಕ ಈಜು ಕೊಳ, ರಸ್ತೆಗಳಲ್ಲಿ ಪಾದಚಾರಿ ಸ್ಥಳಗಳನ್ನು ಹೆಚ್ಚಿಸುವ ಬಗ್ಗೆ ಚರ್ಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಯುಕೇಶ್ ಕುಮಾರ್, ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಕ್ಷಿತ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Prepare, submit,  proposals, CM, Minister, H.C. Mahadevappa