ಮೈಸೂರು,ಜನವರಿ,24,2026 (www.justkannada.in): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ನಂಜನಗೂಡು ಹೊಸ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಜನರಿಗೆ ರಾಜ್ಯ ಸರಕಾರ ರೂಪಿಸಿರುವ ವಿವಿಧ ಕಾರ್ಯಕ್ರಮಗಳು ಮತ್ತು ಗ್ಯಾರಂಟಿ ಯೋಜನೆಗಳ ಕುರಿತು ಮಾಹಿತಿ ನೀಡುವ ವಸ್ತುಪ್ರದರ್ಶನ ಮಳಿಗೆಯನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಅವರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು, ಸಾರ್ವಜನಿಕರು ಮಳಿಗೆಗಳಿಗೆ ಭೇಟಿ ನೀಡಿ ಸರಕಾರದ ಯೋಜನೆಗಳ ಕುರಿತು ಮಾಹಿತಿಯನ್ನು ಪಡೆದುಕೊಂಡು ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಅವರು ಮಾತನಾಡಿ ನಮ್ಮ ಸರ್ಕಾರ ಹಿಂದುಳಿದ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿದಂತೆ ಮಹಿಳೆಯರು, ಬಡ ವರ್ಗದವರನ್ನು ಆರ್ಥಿಕವಾಗಿ ಸದೃಢಗೊಳಿಸಲು ಯೋಜನೆಗಳನ್ನು ರೂಪಿಸಿದೆ. ಎಲ್ಲರೂ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ನಂಜನಗೂಡು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಾರುತಿ ಕೆ.ಎಂ.ಅವರು ಮಾತನಾಡಿ, ಅನ್ನಭಾಗ್ಯ, ಶಕ್ತಿ, ಗೃಹ ಜ್ಯೋತಿ, ಗೃಹ ಲಕ್ಷ್ಮಿ ಹಾಗೂ ಯುವನಿಧಿ ಯೋಜನೆಗಳು ಬಡವರ ಬದುಕನ್ನು ಕಟ್ಟಿಕೊಡುವುದರ ಜೊತೆಗೆ ಮಹಿಳೆಯರು ಸ್ವಾವಲಂಬಿಯಾಗಲು ಸಹಕರಿಸಿದೆ ಎಂದರು.
ಕಾರ್ಯಕ್ರಮದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ, ಸುಯು ಕುಮಾರ್, ಮಹೇಂದ್ರ ಕುಮಾರ್, ರಂಗಸ್ವಾಮಿ.ಜಿ. ಟಿ, ವೆಂಕಟೇಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ಎಸ್.ಹೆಚ್ ನಿರ್ಮಲ ಉಪಸ್ಥಿತರಿದ್ದರು.
ವಸ್ತುಪ್ರದರ್ಶನದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಸಮುದಾಯಗಳು ಶಿಕ್ಷಣ, ಉದ್ಯೋಗ, ಆರ್ಥಿಕ ಕ್ಷೇತ್ರಗಳಲ್ಲಿ ಮೀಸಲಾತಿ ಮತ್ತು ವಿಶೇಷ ಯೋಜನೆಗಳು, ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಮಾಹಿತಿಯನ್ನು ಪ್ರದರ್ಶಿಸಲಾಗುತ್ತಿದೆ. ಜನವರಿ 24 ರಿಂದ 26 ರವರೆಗೆ ಬಸ್ ನಿಲ್ದಾಣದಲ್ಲಿ ವಸ್ತುಪ್ರದರ್ಶನ ನಡೆಯಲಿದೆ.
Key words: Nanjanagud, MLA, Darshan Dhruvanarayan, photography exhibition







