ಅನುಮಾನಾಸ್ಪದ ವಸ್ತು ಸ್ಫೋಟ: ಶಾಲೆಗೆ ತೆರಳುತ್ತಿದ್ದ ಮಕ್ಕಳಿಗೆ ಗಂಭೀರ ಗಾಯ

ಬೀದರ್, ಜನವರಿ,31,2026 (www.justkannada.in): ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಶಾಲೆಗೆ ತೆರಳುತ್ತಿದ್ದ ಮಕ್ಕಳಿಗೆ ಗಂಭೀರ ಗಾಯವಾಗಿರುವ ಘಟನೆ ಬೀದರ್ ಜಿಲ್ಲೆ ಹುಮ್ನಾಬಾದ್ ತಾಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.

ಮೋಳಗಿ ಮಾರಯ್ಯ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಅನುಮಾನಾಸ್ಪದ ವಸ್ತು ಸ್ಫೋಟದಿಂದ ಗ್ರಾಮದಲ್ಲಿ ಆತಂಕ ಮೂಡಿದೆ.  ಶಾಲೆಗೆ ತೆರಳುತ್ತಿದ್ದ ಐದು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದಲ್ಲಿಅನ್ವರ್ ‌ಸಾಬ್(18) ಮತ್ತು ಜಬ್ಬಾರ್ ಸಾಬ್(65) ಎಂಬ ಯುವಕರಿಗೆ ತೀವ್ರ ಗಾಯಗಳಾಗಿದ್ದು,ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೈದ್ರಾಬಾದ್ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದಂತೆ ಪರಿಜಾರ್(8), ಅಜೀಜ್(5), ಬುಶ್ರಾ(4)ಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಮಕ್ಕಳಿಗೆ ಸಮೀಪದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಹುಮ್ನಾಬಾದ್ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ತೆರಳಿ ಪರಿಶೀಲನೆ ನಡೆಸಿಸಿದ್ದಾರೆ.

ಕಳೆದ ಆರು ತಿಂಗಳಲ್ಲಿ ಇದೇ ಗ್ರಾಮದಲ್ಲಿ ಇದು ಎರಡನೇ ಬಾರಿ ಸಂಭವಿಸಿರುವ ಸ್ಫೋಟವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ವಾತಾವರಣ ನಿರ್ಮಾಣವಾಗಿದೆ.

Key words: Suspicious explosion, Children, seriously injured