Wednesday, September 9, 2026

BDA Apartments

Home Front Page MUDA ಪ್ರಕರಣ: ದಿನೇಶ್ ಕುಮಾರ್ ವಿರುದ್ದ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್

MUDA ಪ್ರಕರಣ: ದಿನೇಶ್ ಕುಮಾರ್ ವಿರುದ್ದ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು,ಮಾರ್ಚ್,10,2026 (www.justkannada.in):  ಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ  ಹಗರಣಕ್ಕೆ ಸಂಬಂಧಿಸಿದಂತೆ  ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ವಿರುದ್ಧದ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.

ಈ ಕುರಿತಂತೆ ದಿನೇಶ್ ಕುಮಾರ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್  ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠವು, ಜಿ.ಟಿ. ದಿನೇಶ್ ಕುಮಾರ್ ವಿರುದ್ಧದ ಹಣ ಅಕ್ರಮ ವರ್ಗಾವಣೆ ಕಾಯ್ದೆ (ಪಿಎಂಎಲ್‌ಎ) ಅಡಿ ದಾಖಲಿಸಿರುವ ಪ್ರಕರಣದ ವಿಚಾರಣೆ ನಡೆಸದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರ್ಬಂಧಿಸಿದೆ.

ಈ ಪ್ರಕರಣದ ವಿಚಾರಣೆಯನ್ನು ಪಿಎಂಎಲ್‌ಎ ಅಡಿ ಸ್ಥಾಪಿತವಾಗಿರುವ ವಿಶೇಷ ನ್ಯಾಯಾಲಯ ನಡೆಸಬೇಕೇ ವಿನಾ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಲ್ಲ ಎಂದು ಆಕ್ಷೇಪಿಸಿ ಮಾಜಿ ಆಯುಕ್ತ ದಿನೇಶ್ ಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಅರ್ಜಿದಾರ ದಿನೇಶ್ ಕುಮಾರ್ ಪರ ಪದಾಂಕಿತ ಹಿರಿಯ ವಕೀಲ ಸಂದೇಶ್ ಜೆ. ಚೌಟ ಹಾಗೂ ಜಾರಿ ನಿರ್ದೇಶನಾಲಯ (ಇ.ಡಿ) ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಅರವಿಂದ ಕಾಮತ್ ಅವರ ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಪೀಠ, ವಿಚಾರಣೆಯನ್ನು ಇದೇ 26ಕ್ಕೆ ಮುಂದೂಡಿತು.

Key words: MUDA case, High Court, stays, trial, against, Dinesh Kumar