ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಏಪ್ರಿಲ್, 30,2026 (www.justkannada.in):  ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ  ಸಂಬಂಧಪಟ್ಟ  ಕಾರ್ಯಪಾಲಕ ಇಂಜಿನಿಯರ್ ಅವರನ್ನು ಅಮಾನತುಗೊಳಿಸಿ, ನೋಟೀಸು ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಭಾರಿ ಮಳೆಯಿಂದ ಬೌರಿಂಗ್ ಆಸ್ಪತ್ರೆ ದುರಂತದ ಹಿನ್ನೆಲೆಯಲ್ಲಿ ಇಂದು  ಸಿಎಂ ಸಿದ್ದರಾಮಯ್ಯ ಅವರ  ಅಧ್ಯಕ್ಷತೆಯಲ್ಲಿ  ಜಿಬಿಎ ಆಯುಕ್ತರುಗಳ ಸಭೆ ಜರುಗಿತು.

ಬೆಂಗಳೂರಿನಲ್ಲಿ ಮಳೆಯಿಂದ ಉಂಟಾಗಿರುವ ಹಾನಿ ಹಾಗೂ ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತದಿಂದ ನಿನ್ನೆ ಏಳು ಜನ ಮೃತಪಟ್ಟಿರುವ ಕುರಿತಂತೆ ಜಿಬಿಎ ಆಯುಕ್ತರೊಂದಿಗೆ ಚರ್ಚಿಸಿದ ಸಿಎಂ ಸಿದ್ದರಾಮಯ್ಯ ಗೋಡೆಗೆ ಹಾನಿ ಆಗಲಿದೆ ಎಂದು ತಿಳಿದಿದ್ದರೂ ಕಾಮಗಾರಿ ನಡೆಯುವಾಗ ಮಣ್ಣು ಸುರಿದದ್ದು ಏಕೆ? ಗೋಡೆಗೆ ಹಾನಿಯಾಗುವಂತೆ ಮಣ್ಣು ಸುರಿದದ್ದು ನೀವು ಏಕೆ ನೋಡಿಕೊಳ್ಳಲಿಲ್ಲ ಎಂದು ಆಸ್ಪತ್ರೆ ಮುಖ್ಯಸ್ಥರನ್ನು ಪ್ರಶ್ನಿಸಿದರು.

ಬೌರಿಂಗ್ ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್ ನೀಡಲು ಸೂಚಿಸಿದ ಸಿಎಂ ಸಿದ್ದರಾಮಯ್ಯ  ಬೆಂಗಳೂರಿನಲ್ಲಿ ಗುಂಡಿಗಳನ್ನು ಮುಚ್ಚಲು ಕೂಡಲೇ  ಕ್ರಮ ಕೈಗೊಳ್ಳಬೇಕು ಎಂದರು.

ನಿನ್ನೆ ಬೆಂಗಳೂರಿನಲ್ಲಿ ಉಂಟಾದ ಮಳೆಯಲ್ಲಿ ಸಾಕಷ್ಟು ಹಾನಿಯಾಗಿದ್ದು, 250 ಕ್ಕೂ ಹೆಚ್ಚು ಮರಗಳು ಬಿದ್ದಿವೆ. ಏಳು ಜನ  ಸಾವನ್ನಪ್ಪಿದ್ದಾರೆ. ಈಗಾಗಲೇ ಸತ್ತವರ ಕುಟುಂಬದವರಿಗೆ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಗಾಯಗೊಂಡವರಿಗೆ ಉಚಿತ ಚಿಕಿತ್ಸೆ ನೀಡುವಂತೆ ಸೂಚಿಸಿದರು.

ಮುಂಗಾರು ಮಳೆ ಪ್ರಾರಂಭವಾಗುವ ಮೊದಲೇ ಸಿದ್ಧತೆ ಕೈಗೊಳ್ಳಿ

ಮುಂಗಾರು ಮಳೆ ಪ್ರಾರಂಭವಾಗುವ ಮೊದಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಬೆಂಗಳೂರಿನ ಐದೂ ವಲಯಗಳ ಆಯುಕ್ತರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು . ಒಣಗಿರುವ ಅಪಾಯಕಾರಿ  ಮರಗಳ ರೆಂಬೆಗಳನ್ನು ಕತ್ತರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.

ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು ರಾಜಕಾಲುವೆಗಳಲ್ಲಿ ಹೂಳು ತೆಗೆಯುವುದು, ಪ್ರವಾಹ ಉಂಟಾಗದಂತೆ  ಕ್ರಮ ತೆಗೆದುಕೊಳ್ಳಬೇಕು ಎಂದರು. ಮಳೆಯಿಂದ  ರಸ್ತೆಯಲ್ಲಿ ಬಿದ್ದಿರುವ ಕಸ, ರೆಂಬೆಗಳನ್ನು ಕೂಡಲೇ ತೆರವು ಮಾಡಲು ಸೂಚಿಸಿದರು.

ಅಂಡರ್ ಪಾಸ್ ಗಳಲ್ಲಿ  ಮಳೆ ನೀರು ನಿಲ್ಲದಂತೆ ಹಾಗೂ ಜನ ಅಂಡರ್ ಪಾಸ್ ಬಳಸದಂತೆ ಕೂಡಲೇ ಬ್ಯಾರಿಕೇಡ್ ಹಾಕಿ ಎಂದು ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದರು.

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಶಾಸಕ ರಿಜ್ವಾನ್ ಅರ್ಷದ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಜಿಬಿಎ ಆಯುಕ್ತ ಮಹೇಶ್ವರ ರಾವ್ , ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಮೊದಲಾದವರು ಉಪಸ್ಥಿತರಿದ್ದರು.

Key words: Bowring Hospital, Compound, Tragedy, CM Siddaramaiah, Suspension, Engineer