ಬೆಂಗಳೂರು, ಜುಲೈ, 13,2026 (www.justkannada.in): ಗಂಭೀರ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಕೆಪಿಎಸ್‌ಸಿ (KPSC) ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಆದೇಶಿಸಿದ್ದಾರೆ.
ಶಿವಶಂಕರಪ್ಪ ಸಾಹುಕಾರ್ ಅವರನ್ನು ತಕ್ಷಣದಿಂದಲೇ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದು ಅಲ್ಲದೆ, ಶಿವಶಂಕರಪ್ಪ ವಿರುದ್ಧದ ಆರೋಪಗಳ ಕುರಿತು ತನಿಖೆ ನಡೆಸಲು ರಾಜ್ಯಪಾಲರು ಶಿಫಾರಸು ಮಾಡಿದ್ದಾರೆ.
ಜೊತೆಗೆ ಪ್ರಕರಣವನ್ನು ಸುಪ್ರೀಂ ಕೋರ್ಟ್‌ಗೆ ಉಲ್ಲೇಖಿಸುವ ಸಂಬಂಧ ರಾಷ್ಟ್ರಪತಿಗಳಿಗೆ ರಾಜ್ಯಪಾಲರು ಶಿಫಾರಸು ಮಾಡಿದ್ದಾರೆ. ತನಿಖೆ ಪೂರ್ಣಗೊಳ್ಳುವವರೆಗೆ ಅಥವಾ ಮುಂದಿನ ಆದೇಶ ಹೊರಬೀಳುವವರೆಗೆ ಕೆಪಿಎಸ್‌ಸಿಯ ಹಿರಿಯ ಸದಸ್ಯರು ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲು ಆದೇಶದಲ್ಲಿ ತಿಳಿಸಲಾಗಿದೆ. 
ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಸ್ವಜನಪಕ್ಷಪಾತ ಆರೋಪ ಕೇಳಿ ಬಂದಿದ್ದು ಈ ಕುರಿತು ದೂರುಗಳು ಸಲ್ಲಿಕೆಯಾಗಿದ್ದವು. ಈ ದೂರಿನ ಆಧಾರದ ಮೇಲೆ ರಾಜ್ಯಪಾಲರು ಈ ಕ್ರಮ ಕೈಗೊಂಡಿದ್ದಾರೆ. ಇತ್ತೀಚೆಗೆ ಶಿವಶಂಕರಪ್ಪ ಸಾಹುಕಾರ್ ಅವರ ಪುತ್ರಿ ವಿರುದ್ಧವೂ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.
ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ವೇಳೆ ನಕಲಿ ಆದಾಯ ಮತ್ತು ಜಾತಿ ಪ್ರಮಾಣಪತ್ರಗಳನ್ನು ಸಲ್ಲಿಸಿರುವ ಆರೋಪದ ಮೇಲೆ ಪ್ರಕರಣ ದಾಖಲಾಗಿದ್ದು, ದಾಖಲೆಗಳ ಪರಿಶೀಲನೆ ವೇಳೆ ಅಕ್ರಮ ಬೆಳಕಿಗೆ ಬಂದಿತ್ತು.
Key words: KPSC chairman, Shivshankarappa Sahukar, suspended, Governor, Order






