Saturday, September 12, 2026

BDA Apartments

ಆ.2 ರಂದು ಪೊಲೀಸ್ ಕಾನ್ಸ್‌ಟೇಬಲ್ ಲಿಖಿತ ಪರೀಕ್ಷೆ: ಅಧಿಕಾರಿಗಳಿಗೆ ಡಿಸಿ ಡಾ.ಕು...
Home Front Page ಆ.2 ರಂದು ಪೊಲೀಸ್ ಕಾನ್ಸ್‌ಟೇಬಲ್ ಲಿಖಿತ ಪರೀಕ್ಷೆ: ಅಧಿಕಾರಿಗಳಿಗೆ ಡಿಸಿ ಡಾ.ಕುಮಾರ್ ಕಟ್ಟುನಿಟ್ಟಿನ ಸೂಚನೆ

ಆ.2 ರಂದು ಪೊಲೀಸ್ ಕಾನ್ಸ್‌ಟೇಬಲ್ ಲಿಖಿತ ಪರೀಕ್ಷೆ: ಅಧಿಕಾರಿಗಳಿಗೆ ಡಿಸಿ ಡಾ.ಕುಮಾರ್ ಕಟ್ಟುನಿಟ್ಟಿನ ಸೂಚನೆ

ಮಂಡ್ಯ,ಜುಲೈ,27,2026 (www.justkannada.in): ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಉಳಿಕೆ ವೃಂದದ ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿಗಾಗಿ ಆಗಸ್ಟ್‌ 2ರಂದು ನಡೆಯಲಿರುವ ಲಿಖಿತ ಪರೀಕ್ಷೆಯನ್ನು ಸಂಪೂರ್ಣ ಪಾರದರ್ಶಕವಾಗಿ, ಯಾವುದೇ ಲೋಪದೋಷಗಳಿಗೆ ಅವಕಾಶವಿಲ್ಲದಂತೆ ಹಾಗೂ ಅಭ್ಯರ್ಥಿಗಳಿಗೆ ಅನುಕೂಲಕರ ವಾತಾವರಣದಲ್ಲಿ ಯಶಸ್ವಿಯಾಗಿ ನಡೆಸುವಂತೆ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ನೇಮಕಾತಿ ಲಿಖಿತ ಪರೀಕ್ಷೆಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಒಟ್ಟು 16 ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.00 ಗಂಟೆಯವರೆಗೆ ಪರೀಕ್ಷೆ ನಡೆಯಲಿದ್ದು, 7,810 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಪರೀಕ್ಷೆಯ ಪ್ರತಿಯೊಂದು ಹಂತದಲ್ಲೂ ಪಾರದರ್ಶಕತೆ, ಗೌಪ್ಯತೆ ಹಾಗೂ ಶಿಸ್ತು ಕಾಪಾಡುವ ಮೂಲಕ ನ್ಯಾಯಸಮ್ಮತ ಪರೀಕ್ಷಾ ವಾತಾವರಣವನ್ನು ನಿರ್ಮಿಸಬೇಕು ಎಂದು ತಿಳಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸಿ, ಅವು ಸುಸ್ಥಿತಿಯಲ್ಲಿರುವುದನ್ನು ಪೂರ್ವಭಾವಿಯಾಗಿ ಪರಿಶೀಲಿಸಬೇಕು. ಜೊತೆಗೆ ವಿದ್ಯುತ್, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯವಿರುವ ಎಲ್ಲ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ಸೂಚಿಸಿದರು.

ಪ್ರಶ್ನೆಪತ್ರಿಕೆಗಳನ್ನು ಖಜಾನೆಯಿಂದ ಪರೀಕ್ಷಾ ಕೇಂದ್ರಗಳಿಗೆ ಅತ್ಯಂತ ಸುರಕ್ಷಿತವಾಗಿ ಸಾಗಿಸಬೇಕು. ಈ ಪ್ರಕ್ರಿಯೆ ಸಂಪೂರ್ಣ ಸಿಸಿಟಿವಿ ನಿಗಾ, ಜಿಪಿಎಸ್ ವ್ಯವಸ್ಥೆಯುಳ್ಳ ವಾಹನ ಹಾಗೂ ಪೊಲೀಸ್ ಎಸ್ಕಾರ್ಟ್ ಮೂಲಕ ನಡೆಯಬೇಕು. ನಿಗದಿತ ವೇಳಾಪಟ್ಟಿಯಂತೆ ಪ್ರಶ್ನೆಪತ್ರಿಕೆಗಳನ್ನು ತಲುಪಿಸಲು ತಹಶೀಲ್ದಾರರು ಹಾಗೂ ಸಂಬಂಧಿತ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಪ್ರಶ್ನೆಪತ್ರಿಕೆಗಳ ಸುರಕ್ಷಿತ ಸಾಗಣೆಗೆ ಎಂಟು ಮಾರ್ಗ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಅವರು ಸಂಪೂರ್ಣ ಜವಾಬ್ದಾರಿಯೊಂದಿಗೆ ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.

ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಸೂಕ್ತ ಪೊಲೀಸ್ ಬಂದೋಬಸ್ತ್, ವೈದ್ಯಾಧಿಕಾರಿಗಳ ನಿಯೋಜನೆ ಹಾಗೂ ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಪ್ರತಿ ಪರೀಕ್ಷಾ ಕೊಠಡಿಯಲ್ಲಿ 24 ಅಭ್ಯರ್ಥಿಗಳಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು ಪರೀಕ್ಷಾ ನಿರ್ವಹಣೆಯಲ್ಲಿ ಯಾವುದೇ ಗೊಂದಲ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.

ಪರೀಕ್ಷಾ ಕೇಂದ್ರಗಳಲ್ಲಿ ನಿಷೇಧಿತ ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳ ಬಳಕೆಗೆ ಅವಕಾಶ ನೀಡಬಾರದು. ಅಭ್ಯರ್ಥಿಗಳ ತಪಾಸಣೆಯನ್ನು ಸಮರ್ಪಕವಾಗಿ ನಡೆಸಲು ವಸ್ತ್ರ ಸಂಹಿತೆ (Dress Code) ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಅಭ್ಯರ್ಥಿಗಳಿಗೆ ಯಾವುದೇ ಅನಗತ್ಯ ತೊಂದರೆಯಾಗದಂತೆ ಕ್ರಮವಹಿಸುವಂತೆ ಸೂಚಿಸಿದರು.ಆ.2 ರಂದು ಪೊಲೀಸ್ ಕಾನ್ಸ್‌ಟೇಬಲ್ ಲಿಖಿತ ಪರೀಕ್ಷೆ police

ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಜೆರಾಕ್ಸ್ ಅಂಗಡಿಗಳನ್ನು ನಿಷೇಧಿಸಲಾಗಿದ್ದು, ಅಭ್ಯರ್ಥಿಗಳ ಹಾಜರಾತಿಯನ್ನು ಕ್ಯೂಆರ್ ಕೋಡ್ ಮೂಲಕ ದಾಖಲಿಸಲಾಗುತ್ತದೆ. ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಜಾಮರ್‌ಗಳನ್ನು ಅಳವಡಿಸಿ ನಕಲು ತಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

“ಪರೀಕ್ಷೆಯ ವಿಶ್ವಾಸಾರ್ಹತೆ ಕಾಪಾಡುವುದು ಪ್ರತಿಯೊಬ್ಬ ಅಧಿಕಾರಿಯ ಜವಾಬ್ದಾರಿಯಾಗಿದೆ. ಯಾವುದೇ ಲೋಪ, ನಿರ್ಲಕ್ಷ್ಯ ಅಥವಾ ನಿಯಮ ಉಲ್ಲಂಘನೆಗೆ ಅವಕಾಶ ನೀಡದೆ, ಅಭ್ಯರ್ಥಿಗಳಿಗೆ ನ್ಯಾಯಯುತ ಹಾಗೂ ಪಾರದರ್ಶಕ ಪರೀಕ್ಷಾ ವಾತಾವರಣ ಕಲ್ಪಿಸಬೇಕು. ಪರೀಕ್ಷೆಯ ಯಶಸ್ಸಿಗೆ ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು,” ಎಂದು ತಿಳಿಸಿದರು.ಅಧಿಕಾರಿಗಳಿಗೆ ಡಿಸಿ ಡಾ.ಕುಮಾರ್ ಕಟ್ಟುನಿಟ್ಟಿನ ಸೂಚನೆ exam

ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಪರೀಕ್ಷಾ ಪ್ರವೇಶ ಪತ್ರ (Admit Card/ಹಾಲ್ ಟಿಕೆಟ್) ಹಾಗೂ ಸರ್ಕಾರದಿಂದ ನಿಗದಿಪಡಿಸಿರುವ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಪರಿಶೀಲಿಸಿ ಮಾತ್ರ ಪರೀಕ್ಷಾ ಕೇಂದ್ರದೊಳಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಬೇಕು. ದಾಖಲೆಗಳ ಪರಿಶೀಲನೆಯಲ್ಲಿ ಯಾವುದೇ ಲೋಪ ಉಂಟಾಗದಂತೆ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಭದ್ರತಾ ಕ್ರಮಗಳನ್ನು ಇನ್ನಷ್ಟು ಬಿಗಿಗೊಳಿಸಿ, ಅನಧಿಕೃತ ವ್ಯಕ್ತಿಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಬೇಕು. ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು ಸಮಯಪಾಲನೆ, ಶಿಸ್ತು ಮತ್ತು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ ಪರೀಕ್ಷೆಯ ಪಾವಿತ್ರ್ಯವನ್ನು ಕಾಪಾಡಬೇಕು ಎಂದು ತಿಳಿಸಿದರು.ಆ.2 ರಂದು ಪೊಲೀಸ್ ಕಾನ್ಸ್‌ಟೇಬಲ್ ಲಿಖಿತ ಪರೀಕ್ಷೆ: ಅಧಿಕಾರಿಗಳಿಗೆ ಡಿಸಿ ಡಾ.ಕು...

ಸಭೆಯಲ್ಲಿ ಅಪರ ಪೊಲೀಸ್ ಅಧೀಕ್ಷಕರಾದ ತಿಮ್ಮಯ್ಯ, ಜಿಲ್ಲಾ ಕಚೇರಿಯ ತಹಸೀಲ್ದಾರ್ ರವಿ ಶಂಕರ್,ಮಂಡ್ಯ ತಹಸೀಲ್ದಾರ್ ವಿಶ್ವನಾಥ್, ಖಜಾನೆ ಅಧಿಕಾರಿ ವರಲಕ್ಷ್ಮಿ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Police Constable, Written Exam, Mandya DC, Dr. Kumar, Meeting