ಮೈಸೂರು,ಜುಲೈ,28,2026 (www.justkannada.in): ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು (CWMA) 15 ದಿನಗಳ ಕಾಲ 3500 ಕೂಸಸ್ ತಮಿಳುನಾಡಿಗೆ ತಕ್ಷಣವೇ ಕಾವೇರಿ ನೀರನ್ನು ಬಿಡುಗಡೆ ಮಾಡುವಂತೆ ನೀಡಿರುವ ಆದೇಶವನ್ನು ಪ್ರಸಕ್ತ ಸನ್ನಿವೇಶದಲ್ಲಿ ಜಾರಿಗೊಳಿಸಲು ರಾಜ್ಯ ಸರ್ಕಾರಕ್ಕೆ ಹಾಗೂ ಕಾವೇರಿ ಜಲಾನಯನ ಪ್ರದೇಶದ ರೈತರಿಗೆ ಸಾಧ್ಯವಿಲ್ಲ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಆಗ್ರಹಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಕುರುಬೂರು ಶಾಂತಕುಮಾರ್, ಜಲಾಶಯಗಳಲ್ಲಿನ ಕಡಿಮೆ ನೀರಿನ ಸಂಗ್ರಹ, ಕಾವೇರಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಾದ ಕೆ.ಆರ್.ಎಸ್, ಕಬಿನಿ, ಹಾರಂಗಿ ಮತ್ತು ಹೇಮಾವತಿಗಳಲ್ಲಿ ಪ್ರಸ್ತುತ ಇರುವ ನೀರು ನಮ್ಮ ರಾಜ್ಯದ ಕುಡಿಯುವ ನೀರಿನ ಅಗತ್ಯತೆಗಳಿಗೆ ರೈತರ ಬೆಳೆಗಳ ರಕ್ಷಣೆಗೆ ಮಾತ್ರ ಇದೆ.
ಕುಡಿಯುವ ನೀರಿಗೆ ಆದ್ಯತೆ: ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ಕಾವೇರಿ ನೀರನ್ನೇ ನೆಚ್ಚಿಕೊಂಡಿರುವ ನಗರಗಳು ಮತ್ತು ಗ್ರಾಮಗಳ ಕುಡಿಯುವ ನೀರಿನ ಅಭಾವವನ್ನು ನೀಗಿಸುವುದು ನಮ್ಮ ಮೊದಲ ಕರ್ತವ್ಯವಾಗಿದೆ. ಜಲಾನಯನ ಪ್ರದೇಶಗಳಲ್ಲಿ ಶೇಕಡ 50ರಷ್ಟು ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿರುವುದರಿಂದ ಜಲಾಶಯಗಳಿಗೆ ಹರಿದುಬರುವ ನೀರಿನ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ ಎಂದು ತಿಳಿಸಿದರು.
”ಕರ್ನಾಟಕವು ಯಾವಾಗಲೂ ಸುಪ್ರೀಂ ಕೋರ್ಟ್ ಹಾಗೂ ಕಾವೇರಿ ಪ್ರಾಧಿಕಾರದ ಆದೇಶಗಳನ್ನು ಗೌರವಿಸುತ್ತಾ ಬಂದಿದೆ. ಆದರೆ, ಈಗ ರಾಜ್ಯದ ಜನರ ಕುಡಿಯುವ ನೀರು ಮತ್ತು ರೈತರ ಹಿತಾಸಕ್ತಿಯನ್ನು ಬಲಿ ಕೊಟ್ಟು ನೀರು ಹರಿಸಲು ಸಾಧ್ಯವಿಲ್ಲ. ಸಂಕಷ್ಟ ಸೂತ್ರದ (Distress Formula) ಆಧಾರದ ಮೇಲೆ ಪ್ರಸ್ತುತ ಪರಿಸ್ಥಿತಿಯನ್ನು ಮರುಪರಿಶೀಲಿಸುವಂತೆ ಪ್ರಾಧಿಕಾರ ಮಂಡಳಿಗೆ ರಾಜ್ಯ ಸರ್ಕಾರ ಮನವಿ ಮಾಡಬೇಕು ಎಂದು ಸಲಹೆ ನೀಡಿದರು.
ಕರ್ನಾಟಕದ ಹಿತಾಸಕ್ತಿ, ರೈತರ ಬದುಕು ಹಾಗೂ ಕುಡಿಯುವ ನೀರಿನ ಭದ್ರತೆಯನ್ನು ಕಾಯ್ದುಕೊಳ್ಳಲು ಸರ್ಕಾರ ಬದ್ಧವಾಗಬೇಕು. ಎಂದು ಕುರುಬೂರು ಶಾಂತಕುಮಾರ್ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
Key words: Water, cannot be, released, Tamil Nadu, Kuruburu Shanthakumar







