ಶಿವಮೊಗ್ಗ,ಆಗಸ್ಟ್,22,2026 (www.justkannada.in): ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ (National Teachers Award-2026) ಯನ್ನು ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಪ್ರಕಟಿಸಿದ್ದು ರಾಜ್ಯದಿಂದ ಶಿವಮೊಗ್ಗ ಜಿಲ್ಲೆಯ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ರತ್ನಕುಮಾರಿ ಅವರು ಆಯ್ಕೆಯಾಗಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ, ದೇಶದ 48 ಶಿಕ್ಷಕರನ್ನು ಈ ಅತ್ಯುತ್ತಮ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಇದರಲ್ಲಿ ನಮ್ಮ ರಾಜ್ಯದ, ನಮ್ಮ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಹುಂಚ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ರತ್ನಕುಮಾರಿ ಕೂಡ ಒಬ್ಬರು ಎಂಬುದನ್ನು ತಿಳಿಸಲು ಹರ್ಷಿಸುತ್ತೇನೆ.
ಶಿಕ್ಷಕರ ದಿನಾಚರಣೆಯಂದು ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ದೇಶದಲ್ಲಿಯೇ ಅತ್ಯುತ್ತಮವಾದ ಈ ‘ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ’ಯನ್ನು ಪ್ರದಾನ ಮಾಡಿ ಗೌರವಿಸಲಿದ್ದಾರೆ.
ಈ ಪ್ರಶಸ್ತಿಗೆ ಪಾತ್ರರಾದ, ಗ್ರಾಮೀಣ ಭಾಗದ ಮಕ್ಕಳಲ್ಲಿ ಅಕ್ಷರ ದೀವಿಗೆ ಬೆಳಗುತ್ತಿರುವ ರತ್ನಕುಮಾರಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ನೀವು ನಮ್ಮ ಇಲಾಖೆ, ರಾಜ್ಯ ಮತ್ತು ನಮ್ಮ ಜಿಲ್ಲೆ ಹೆಮ್ಮೆಪಡುವಂತೆ ಮಾಡಿದ್ದೀರಿ. ನಿಮ್ಮ ಈ ಕೆಲಸ ರಾಜ್ಯದ ಶಿಕ್ಷಕ ಸಮುದಾಯಕ್ಕೆಲ್ಲಾ ಮಾದರಿ. ನಿಮ್ಮ ಪವಿತ್ರವಾದ ಈ ಶೈಕ್ಷಣಿಕ ಕಾಯಕ ಹೀಗೆಯೇ ಮುಂದುವರಿಯಲಿ. ನಿಮಗೆ ಮತ್ತೊಮ್ಮೆ ಅಭಿನಂದನೆಗಳು ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.
Key words: teacher, selected. National Teacher Award, Minister Madhu Bangarappa







