ಬೆಂಗಳೂರು ಗ್ರಾಮಾಂತರ, ಅಕ್ಟೋಬರ್,9,2026 (www.justkannada.in): ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ ಸಾರ್ವಜನಿಕ ಸೇವೆಗಳಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುವುದನ್ನು ಸಹಿಸುವುದಿಲ್ಲ. ಸಾಮಾನ್ಯ ಜನರಿಗೆ ಸರಳ ಮತ್ತು ಸುಗಮ ಆಡಳಿತ ಒದಗಿಸುವುದು ಸರ್ಕಾರದ ಉದ್ದೇಶವಾಗಿದ್ದು, ಕರ್ತವ್ಯಲೋಪ ಎಸಗುವ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ ಅವರು ತಿಳಿಸಿದರು.
ಇಂದು ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ದಿಢೀರ್ ಭೇಟಿ ನೀಡಿ, ವಿವಿಧ ವಿಭಾಗಗಳ ಕಾರ್ಯನಿರ್ವಹಣೆ, ಸಾರ್ವಜನಿಕರ ಅರ್ಜಿಗಳ ವಿಲೇವಾರಿ, ಕಂದಾಯ ದಾಖಲೆಗಳ ನಿರ್ವಹಣೆ ಹಾಗೂ ಸಾರ್ವಜನಿಕರಿಗೆ ಒದಗಿಸುತ್ತಿರುವ ಸೇವೆಗಳನ್ನು ಪರಿಶೀಲಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಪರಮೇಶ್ವರ್, ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ತಾಲೂಕು ಕಚೇರಿಗೆ ಬಂದಾಗ ಯಾವ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ, ಅಧಿಕಾರಿಗಳು ಆ ಸಮಸ್ಯೆಗಳಿಗೆ ಹೇಗೆ ಸ್ಪಂದಿಸುತ್ತಿದ್ದಾರೆ ಹಾಗೂ ಅರ್ಜಿಗಳ ವಿಲೇವಾರಿ ಯಾವ ಹಂತದಲ್ಲಿದೆ ಎಂಬುದನ್ನು ಖುದ್ದಾಗಿ ತಿಳಿದುಕೊಳ್ಳುವ ಉದ್ದೇಶದಿಂದ ಅನಿರೀಕ್ಷಿತ ಭೇಟಿ ನೀಡಿದ್ದೇನೆ ಎಂದರು.
ದಾಖಲೆಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿ ಅಮಾನತು
ದೇವನಹಳ್ಳಿ ತಹಶೀಲ್ದಾರ್ ಕಚೇರಿಯ ಎಲ್ಲ ವಿಭಾಗಗಳಿಗೆ ಭೇಟಿ ನೀಡಿ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿದ್ದೇನೆ. ಈ ವೇಳೆ ಕೆಲವು ನ್ಯೂನತೆಗಳು ಕಂಡುಬಂದಿದ್ದು, ಅವುಗಳನ್ನು ಸರಿಪಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಡಿಸಿಎಂ ಪರಮೇಶ್ವರ್ ತಿಳಿಸಿದರು.
ವಿಶೇಷವಾಗಿ ದಾಖಲೆಗಳ ಕೊಠಡಿಯಲ್ಲಿ (ರೆಕಾರ್ಡ್ ರೂಮ್) ಕಂದಾಯ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸದಿರುವುದು ಹಾಗೂ ದತ್ತಾಂಶಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿರುವುದು ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸದ ಸಂಬಂಧಪಟ್ಟ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಿದರು.
ಕಂದಾಯ ದಾಖಲೆಗಳು ಜನಸಾಮಾನ್ಯರ ಆಸ್ತಿ ಮತ್ತು ಹಕ್ಕುಗಳಿಗೆ ಸಂಬಂಧಿಸಿದ ಅತ್ಯಂತ ಮಹತ್ವದ ದಾಖಲೆಗಳಾಗಿವೆ. ಒಂದು ಮೂಲ ದಾಖಲೆ ಹಾಳಾದರೂ ಅದರಿಂದ ಸಂಬಂಧಪಟ್ಟ ಕುಟುಂಬಗಳಿಗೆ ತೀವ್ರ ತೊಂದರೆಯಾಗಬಹುದು. ಸ್ವಾತಂತ್ರ್ಯಪೂರ್ವ ಕಾಲದ ಮೂಲ ದಾಖಲೆಗಳೂ ಕಂದಾಯ ಇಲಾಖೆಯಲ್ಲಿದ್ದು, ಅವುಗಳನ್ನು ಅತ್ಯಂತ ಜಾಗರೂಕತೆಯಿಂದ ಸಂರಕ್ಷಿಸಬೇಕು ಎಂದು ತಿಳಿಸಿದರು.
ದಾಖಲೆಗಳ ಕೊಠಡಿಯಲ್ಲಿರುವ ಎಲ್ಲ ದಾಖಲೆಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕು. ಅವುಗಳ ಸುರಕ್ಷತೆ, ಸಂರಕ್ಷಣೆ ಹಾಗೂ ದತ್ತಾಂಶ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡುವಂತೆ ತಹಶೀಲ್ದಾರ್ ಹಾಗೂ ಭೂದಾಖಲೆಗಳ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದು ಹೇಳಿದರು.
ಬಗರ್ ಹುಕುಂ ಅರ್ಜಿಗಳ ವಿಲೇವಾರಿ ಹಾಗೂ ಪೋಡಿ ದುರಸ್ತಿ ಕಾರ್ಯ ಚುರುಕುಗೊಳಿಸಲು ಕ್ರಮ
ಬಗರ್ ಹುಕುಂ ಜಮೀನುಗಳಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿಯಲ್ಲಿ ಉಂಟಾಗಿರುವ ಸಮಸ್ಯೆಗಳ ಕುರಿತು ಸಾರ್ವಜನಿಕರು ನನ್ನ ಗಮನಕ್ಕೆ ತಂದಿದ್ದಾರೆ. ವಿಶೇಷವಾಗಿ 18 ಕಿಲೋಮೀಟರ್ ವ್ಯಾಪ್ತಿಯ ನಿಯಮದಿಂದ ಕೆಲವು ಅರ್ಜಿಗಳು ತಿರಸ್ಕೃತವಾಗಿರುವುದು ಅಥವಾ ವಿಲೇವಾರಿಯಾಗದೆ ಉಳಿದಿರುವ ಕುರಿತು ಅಹವಾಲು ಸಲ್ಲಿಸಲಾಗಿದೆ ಎಂದು ಡಿಸಿಎಂ ಪರಮೇಶ್ವರ್ ತಿಳಿಸಿದರು.
18 ಕಿಲೋಮೀಟರ್ ವ್ಯಾಪ್ತಿಯ ನಿಯಮ ಜಾರಿಗೆ ಬರುವುದಕ್ಕೂ ಮುನ್ನ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಪರಿಗಣಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಈ ಸಂಬಂಧ ಅಗತ್ಯ ನಿರ್ದೇಶನಗಳನ್ನು ನೀಡಲಾಗುವುದು ಎಂದು ಹೇಳಿದರು.
ಬಗರ್ ಹುಕುಂ ಜಮೀನುಗಳಿಗೆ ಸಂಬಂಧಿಸಿದ ನಮೂನೆ 52 ಮತ್ತು 53ರ ಅರ್ಜಿಗಳು ಸೇರಿದಂತೆ ನಿಯಮ ಜಾರಿಯಾದ ನಂತರ ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲಿಸಲಾಗುವುದು. ನ್ಯಾಯಾಲಯಗಳಿಂದ ಯಾವುದಾದರೂ ನಿರ್ದೇಶನಗಳು ಬಂದಿದ್ದರೆ ಅವುಗಳನ್ನು ಗಮನದಲ್ಲಿಟ್ಟುಕೊಂಡು ಕಾನೂನಿನ ಅನ್ವಯ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಅದೇ ರೀತಿ ಪೋಡಿ ಹಾಗೂ ದುರಸ್ತಿ ಕಾರ್ಯಗಳಲ್ಲಿ ವಿಳಂಬವಾಗುತ್ತಿರುವುದು ಗಮನಕ್ಕೆ ಬಂದಿದೆ. ಬಾಕಿ ಇರುವ ಪೋಡಿ ದುರಸ್ತಿ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಪ್ರತ್ಯೇಕವಾಗಿ ನಿರ್ವಹಿಸಬೇಕು. ನ್ಯಾಯಾಲಯದ ಆದೇಶಗಳು ಮತ್ತು ನಿರ್ದೇಶನಗಳಿಗೆ ಅನುಗುಣವಾಗಿ ಕ್ರಮ ಕೈಗೊಳ್ಳಬೇಕು. ಅಗತ್ಯವಿರುವ ಪ್ರಕರಣಗಳಲ್ಲಿ ಮೇಲ್ಮನವಿ ಸಲ್ಲಿಸುವ ಕುರಿತು ಸರ್ಕಾರದ ಗಮನಕ್ಕೆ ತಂದು ತೀರ್ಮಾನ ಕೈಗೊಳ್ಳಬಹುದು. ನ್ಯಾಯಾಲಯದ ಪ್ರಕರಣಗಳ ನೆಪದಲ್ಲಿ ಸಾರ್ವಜನಿಕರಿಗೆ ಅನಗತ್ಯ ತೊಂದರೆಯಾಗದಂತೆ ನೋಡಿಕೊಳ್ಳಲು ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ವಿವರಿಸಿದರು.
ಪ್ರಜಾಸೇವೆ ಕಾರ್ಯಕ್ರಮದಡಿ 300ಕ್ಕೂ ಹೆಚ್ಚು ಅರ್ಜಿಗಳು; ಶೇ.60ರಿಂದ 70ರಷ್ಟು ವಿಲೇವಾರಿ
ಸರ್ಕಾರ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶದಿಂದ ಪ್ರಜಾಸೇವೆ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುತ್ತಿದೆ. ಈ ಕಾರ್ಯಕ್ರಮದಡಿ ದೇವನಹಳ್ಳಿ ತಾಲೂಕಿನಲ್ಲಿ ಸ್ವೀಕರಿಸಿರುವ ಅರ್ಜಿಗಳು ಹಾಗೂ ಅವುಗಳ ವಿಲೇವಾರಿ ಸ್ಥಿತಿಯನ್ನೂ ಪರಿಶೀಲಿಸಲಾಗಿದೆ ಎಂದು ಡಿಸಿಎಂ ಪರಮೇಶ್ವರ್ ತಿಳಿಸಿದರು.
ಪ್ರಜಾಸೇವೆ ಕಾರ್ಯಕ್ರಮದಡಿ 300ಕ್ಕೂ ಹೆಚ್ಚು ಅರ್ಜಿಗಳು ಸ್ವೀಕೃತವಾಗಿದ್ದು, ಅವುಗಳಲ್ಲಿ ಸುಮಾರು ಶೇ.60ರಿಂದ 70ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ವಿಲೇವಾರಿಗೆ ಸಾಧ್ಯವಾಗದ ಕೆಲವು ಪ್ರಕರಣಗಳು ಬಾಕಿ ಉಳಿದಿವೆ. ಈ ಕುರಿತು ಸಂಪೂರ್ಣ ದಾಖಲೆಗಳನ್ನು ಪಡೆದು ಪರಿಶೀಲಿಸಲಾಗಿದೆ ಎಂದು ಹೇಳಿದರು.
ಸಾರ್ವಜನಿಕರು ಪೋಡಿ ದುರಸ್ತಿ, ಬಗರ್ ಹುಕುಂ, ಖಾತೆ ಬದಲಾವಣೆ ಅಥವಾ ಕಂದಾಯ ಇಲಾಖೆಗೆ ಸಂಬಂಧಿಸಿದ ಯಾವುದೇ ಕೆಲಸಕ್ಕಾಗಿ ಕಚೇರಿಗೆ ಬಂದಾಗ ಅವರ ಅರ್ಜಿಗಳನ್ನು ಸಮರ್ಪಕವಾಗಿ ಪರಿಶೀಲಿಸಿ ತ್ವರಿತವಾಗಿ ವಿಲೇವಾರಿ ಮಾಡಬೇಕು. ಪ್ರಭಾವಿಗಳು ಅಥವಾ ಆರ್ಥಿಕವಾಗಿ ಅನುಕೂಲಸ್ಥರ ಕೆಲಸಗಳನ್ನು ಆದ್ಯತೆಯ ಮೇರೆಗೆ ಮಾಡಿ, ಸಾಮಾನ್ಯ ಜನರ ಕೆಲಸಗಳನ್ನು ಅನಗತ್ಯವಾಗಿ ಅಲೆದಾಡಿಸುವ ಪ್ರವೃತ್ತಿಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಇಂತಹ ತಾರತಮ್ಯ ಅಥವಾ ಕರ್ತವ್ಯಲೋಪ ಗಮನಕ್ಕೆ ಬಂದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಾರ್ವಜನಿಕರು ಕೂಡ ತಮ್ಮ ಕೆಲಸಗಳಿಗೆ ಸಂಬಂಧಿಸಿದಂತೆ ಸರಿಯಾದ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಅನಗತ್ಯ ಅರ್ಜಿಗಳು, ಮತ್ತೊಬ್ಬರ ಜಮೀನಿಗೆ ಸಂಬಂಧಿಸಿದಂತೆ ಅಕ್ರಮವಾಗಿ ಖಾತೆ ಬದಲಾವಣೆ ಮಾಡಿಸುವ ಪ್ರಯತ್ನ ಹಾಗೂ ಸುಳ್ಳು ದಾಖಲೆಗಳ ಆಧಾರದಲ್ಲಿ ಅರ್ಜಿ ಸಲ್ಲಿಸುವಂತಹ ಚಟುವಟಿಕೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದರು.
ನಕಲಿ ಭೂದಾಖಲೆ ಹಾಗೂ ಸರ್ಕಾರಿ ಗೋಮಾಳ ಒತ್ತುವರಿ ವಿರುದ್ಧ ಕಠಿಣ ಕ್ರಮ
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಭೂಮಿಯ ಮೌಲ್ಯ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸುವುದು, ಮತ್ತೊಬ್ಬರ ಹೆಸರಿನಲ್ಲಿ ಅರ್ಜಿ ಸಲ್ಲಿಸುವುದು ಹಾಗೂ ಕೆಲವು ಅಧಿಕಾರಿಗಳ ಸಹಭಾಗಿತ್ವದಲ್ಲಿ ಅಕ್ರಮ ಖಾತೆ ಬದಲಾವಣೆ ನಡೆಯುತ್ತಿರುವ ಆರೋಪಗಳ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಉಪಮುಖ್ಯಮಂತ್ರಿಗಳು, ಹಿಂದೆ ಇಂತಹ ಪ್ರಕರಣಗಳು ನಡೆದಿರಬಹುದು. ಆದರೆ ಪ್ರಸ್ತುತ ಅಥವಾ ಮುಂದಿನ ದಿನಗಳಲ್ಲಿ ನಕಲಿ ದಾಖಲೆಗಳ ಸೃಷ್ಟಿ, ಮತ್ತೊಬ್ಬರ ಹೆಸರಿನಲ್ಲಿ ವಂಚನೆ (Impersonation) ಅಥವಾ ಅಕ್ರಮ ಖಾತೆ ಬದಲಾವಣೆ ನಡೆಯುವುದನ್ನು ತಡೆಯಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ಕುರಿತು ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಅವರೊಂದಿಗೆ ಚರ್ಚಿಸಲಾಗಿದೆ. ತಂತ್ರಜ್ಞಾನದ ಬಳಕೆಯಿಂದ ಇಂತಹ ಅಕ್ರಮಗಳನ್ನು ತಡೆಯಲು ಹೆಚ್ಚಿನ ಅವಕಾಶವಿದ್ದು, ಯಾವುದೇ ರೀತಿಯ ನಕಲಿ ದಾಖಲೆಗಳ ಸೃಷ್ಟಿಗೆ ಅವಕಾಶ ನೀಡಬಾರದು ಎಂದು ಸೂಚಿಸಲಾಗಿದೆ. ಬಾಕಿ ಇರುವ ಅನುಮಾನಾಸ್ಪದ ಪ್ರಕರಣಗಳನ್ನು ಪರಿಶೀಲಿಸಿ, ಅಕ್ರಮ ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಬಿಲ್ಡರ್ಗಳು ಸೇರಿದಂತೆ ಪ್ರಭಾವಿ ವ್ಯಕ್ತಿಗಳು ಸರ್ಕಾರಿ ಗೋಮಾಳ ಜಮೀನುಗಳನ್ನು ಒತ್ತುವರಿ ಮಾಡಿಕೊಂಡಿರುವ ಕುರಿತು ದೂರುಗಳು ಕೇಳಿಬಂದಿವೆ. ಇಂತಹ ಸಮಸ್ಯೆಗಳು ಬೆಂಗಳೂರು ಸುತ್ತಮುತ್ತ ಮಾತ್ರವಲ್ಲದೆ ತುಮಕೂರು, ಮೈಸೂರು, ಬೆಳಗಾವಿ ಸೇರಿದಂತೆ ಬೆಳೆಯುತ್ತಿರುವ ನಗರ ಪ್ರದೇಶಗಳಲ್ಲಿಯೂ ಕಂಡುಬರುತ್ತಿವೆ ಎಂದು ತಿಳಿಸಿದರು.
ಸರ್ಕಾರಿ ಜಮೀನುಗಳನ್ನು ಒತ್ತುವರಿ ಮಾಡಿರುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ನಿಯಮಾನುಸಾರ ತೆರವುಗೊಳಿಸಬೇಕು ಎಂದು ಈಗಾಗಲೇ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದು ಡಿಸಿಎಂ ಜಿ. ಪರಮೇಶ್ವರ ಅವರು ಸ್ಪಷ್ಟಪಡಿಸಿದರು.
ನಿರ್ದಿಷ್ಟ ಒತ್ತುವರಿ ಪ್ರಕರಣಗಳನ್ನು ಗಮನಕ್ಕೆ ತಂದರೆ ಅವುಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಸರ್ಕಾರಿ ಜಮೀನನ್ನು ಅಕ್ರಮವಾಗಿ ಬಿಟ್ಟುಕೊಡುವುದು ಅಥವಾ ಒತ್ತುವರಿಗೆ ಸಹಕರಿಸುವ ಅಧಿಕಾರಿಗಳ ವಿರುದ್ಧವೂ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಭೂಸುಧಾರಣಾ ಕಾಯ್ದೆಯ 79ಎ ಮತ್ತು 79ಬಿ ಕಲಂಗಳಿಗೆ ಸಂಬಂಧಿಸಿದ ತಿದ್ದುಪಡಿ ಕುರಿತು ಕೇಳಿದ ಪ್ರಶ್ನೆಗೆ, ಈ ವಿಷಯ ಸರ್ಕಾರದ ಚರ್ಚೆಯ ಹಂತದಲ್ಲಿದ್ದು, ಯಾವ ರೀತಿಯ ಬದಲಾವಣೆಗಳನ್ನು ತರಬೇಕು ಎಂಬುದರ ಕುರಿತು ಚರ್ಚಿಸಲಾಗುತ್ತಿದೆ ಎಂದು ತಿಳಿಸಿದರು.
ದೇವನಹಳ್ಳಿಯಲ್ಲಿ ಉಪ ನೋಂದಣಾಧಿಕಾರಿ ಕಚೇರಿಗೆ ಹೊಸ ಕಟ್ಟಡ; ಮೂಲ ದಾಖಲೆಗಳ ಸಂರಕ್ಷಣೆಗೆ ಆದ್ಯತೆ
ದೇವನಹಳ್ಳಿಯ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಸ್ಥಳಾವಕಾಶದ ಕೊರತೆ ಇರುವುದನ್ನು ಪರಿಶೀಲಿಸಲಾಗಿದೆ. ಪ್ರಸ್ತುತ ಕಚೇರಿ ಕಾರ್ಯನಿರ್ವಹಿಸುತ್ತಿರುವ ಕಟ್ಟಡದಲ್ಲಿ ಸ್ಥಳದ ಅಭಾವದಿಂದ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ತೊಂದರೆಯಾಗುತ್ತಿದೆ ಎಂದು ಡಿಸಿಎಂ ಪರಮೇಶ್ವರ್ ತಿಳಿಸಿದರು.
ಈ ಹಿನ್ನೆಲೆಯಲ್ಲಿ ಉಪ ನೋಂದಣಾಧಿಕಾರಿ ಕಚೇರಿಗೆ ಹೊಸ ಕಟ್ಟಡ ನಿರ್ಮಿಸಲು ಜಿಲ್ಲಾಧಿಕಾರಿಗಳು ಈಗಾಗಲೇ ಸೂಕ್ತ ಜಾಗ ಗುರುತಿಸಿದ್ದಾರೆ. ಹೊಸ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಆದಷ್ಟು ಶೀಘ್ರವಾಗಿ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಉಪ ನೋಂದಣಾಧಿಕಾರಿಯ ಕೊಠಡಿ ಅಥವಾ ಕಚೇರಿಯ ಇತರ ಸೌಲಭ್ಯಗಳಿಗಿಂತ ಸಾರ್ವಜನಿಕರ ಆಸ್ತಿ ಹಕ್ಕುಗಳಿಗೆ ಸಂಬಂಧಿಸಿದ ಮೂಲ ದಾಖಲೆಗಳ ಸುರಕ್ಷತೆ ಅತ್ಯಂತ ಮುಖ್ಯವಾಗಿದೆ. ಹೊಸ ಕಟ್ಟಡದಲ್ಲಿ ದಾಖಲೆಗಳನ್ನು ವ್ಯವಸ್ಥಿತವಾಗಿ ಸಂಗ್ರಹಿಸಿ ನಿರ್ವಹಿಸಲು ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಲಾಗಿದೆ. ಕಂದಾಯ ಇಲಾಖೆ ಮತ್ತು ನೋಂದಣಿ ಇಲಾಖೆಯ ದಾಖಲೆಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳು ಬರಪೀಡಿತ; ಕುಡಿಯುವ ನೀರಿಗೆ ಅಗತ್ಯ ಅನುದಾನ
ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಉಂಟಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ಒಟ್ಟಾರೆ ಮಳೆಯ ಪ್ರಮಾಣ ನಿರೀಕ್ಷಿತ ಮಟ್ಟಕ್ಕಿಂತ ಕಡಿಮೆಯಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ ಹಾಗೂ ನೆಲಮಂಗಲ ತಾಲೂಕುಗಳನ್ನು ಈಗಾಗಲೇ ಬರಪೀಡಿತವೆಂದು ಘೋಷಿಸಲಾಗಿದೆ ಎಂದು ಡಿಸಿಎಂ ಪರಮೇಶ್ವರ್ ತಿಳಿಸಿದರು.
ಈ ನಾಲ್ಕೂ ತಾಲೂಕುಗಳು ಬರಪೀಡಿತವೆಂದು ಘೋಷಣೆಯಾಗಿರುವುದರಿಂದ ಸರ್ಕಾರದ ನಿಯಮಗಳ ಪ್ರಕಾರ ಬರ ಪರಿಹಾರ ಹಾಗೂ ಇತರ ನೆರವು ಪಡೆಯಲು ಅರ್ಹವಾಗಿವೆ. ಜನರಿಗೆ ಕುಡಿಯುವ ನೀರು, ರೈತರಿಗೆ ಅಗತ್ಯ ಪರಿಹಾರ ಮತ್ತು ತುರ್ತು ಕಾಮಗಾರಿಗಳನ್ನು ಕೈಗೊಳ್ಳಲು ಜಿಲ್ಲಾಡಳಿತ ಕ್ರಮವಹಿಸಬೇಕು ಎಂದು ಸೂಚಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈಗಾಗಲೇ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ₹1 ಕೋಟಿ ಅನುದಾನ ಒದಗಿಸಿದೆ. ಜಿಲ್ಲೆಗಳಿಗೂ ಅಗತ್ಯಕ್ಕೆ ಅನುಗುಣವಾಗಿ ₹4ರಿಂದ ₹5 ಕೋಟಿ ಅನುದಾನ ನೀಡಲಾಗಿದೆ ಎಂದು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ವಿಪತ್ತು ನಿರ್ವಹಣೆಯ ಪಿ.ಡಿ. ಖಾತೆಯಲ್ಲಿ ಪ್ರಸ್ತುತ ₹9 ಕೋಟಿ ಅನುದಾನ ಲಭ್ಯವಿದೆ. ಈ ಅನುದಾನವನ್ನು ಬರಪೀಡಿತವೆಂದು ಘೋಷಿಸಿರುವ ನಾಲ್ಕು ತಾಲೂಕುಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಅಗತ್ಯ ಕಾಮಗಾರಿಗಳು ಹಾಗೂ ತುರ್ತು ಪರಿಹಾರ ಕಾರ್ಯಗಳಿಗೆ ಎಸ್ಡಿಆರ್ಎಫ್ ನಿಯಮಗಳ ಅನ್ವಯ ಬಳಸಿಕೊಳ್ಳಲು ಅವಕಾಶವಿದೆ. ಲಭ್ಯವಿರುವ ಹಣವನ್ನು ಸಮರ್ಪಕವಾಗಿ ಬಳಸಿಕೊಂಡು ಜನರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅಗತ್ಯವಿದ್ದರೆ ಸರ್ಕಾರದಿಂದ ಹೆಚ್ಚುವರಿ ಅನುದಾನ ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ರೈತರು ಹಾಗೂ ಕೂಲಿ ಕಾರ್ಮಿಕರು ತೀವ್ರ ಸಂಕಷ್ಟದಲ್ಲಿರುವುದರಿಂದ ಕುಡಿಯುವ ನೀರು, ಉದ್ಯೋಗ ಹಾಗೂ ಜೀವನೋಪಾಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಪರಿಹರಿಸಬೇಕು ಎಂದು ಸೂಚಿಸಿದರು.
50 ಲಕ್ಷ ರೈತರಿಗೆ ₹1,250 ಕೋಟಿ ಮೊದಲ ಕಂತಿನ ಪರಿಹಾರ; ಕೇಂದ್ರದ ನೆರವಿಗಾಗಿ ಸರ್ವಪಕ್ಷ ನಿಯೋಗ
ಬರದಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ತಕ್ಷಣ ಆರ್ಥಿಕ ನೆರವು ಒದಗಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸುಮಾರು 50 ಲಕ್ಷ ಅರ್ಹ ರೈತರಿಗೆ ತಲಾ ₹2,500ರಂತೆ ಒಟ್ಟಾರೆ ₹1,250 ಕೋಟಿ ಮೊದಲ ಕಂತಿನ ಇನ್ಪುಟ್ ಸಬ್ಸಿಡಿ ನೀಡಲು ನಿರ್ಧರಿಸಲಾಗಿದ್ದು, ಈ ಕುರಿತು ಜಿಲ್ಲಾಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಡಿಸಿಎಂ ಪರಮೇಶ್ವರ್ ತಿಳಿಸಿದರು.
ರೈತರ ಸಂಕಷ್ಟವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರದ ನೆರವಿಗಾಗಿ ಕಾಯದೆ ರಾಜ್ಯ ಸರ್ಕಾರ ತನ್ನ ವತಿಯಿಂದ ಪರಿಹಾರ ನೀಡಲು ಮುಂದಾಗಿದೆ. ಬರದಿಂದ ಉಂಟಾಗಿರುವ ನಷ್ಟದ ಕುರಿತು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರದ ಎನ್ಡಿಆರ್ಎಫ್ ಮಾರ್ಗಸೂಚಿಗಳ ಪ್ರಕಾರ ರಾಜ್ಯಕ್ಕೆ ಬರ ಪರಿಹಾರ ಒದಗಿಸುವಂತೆ ಕೋರಿ ವಿವರವಾದ ಮನವಿ ಪತ್ರ ಸಲ್ಲಿಸಲಾಗಿದೆ. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳು, ನಾನುಹಾಗೂ ವಿರೋಧ ಪಕ್ಷಗಳ ಪ್ರತಿನಿಧಿಗಳನ್ನು ಒಳಗೊಂಡ ಸರ್ವಪಕ್ಷ ನಿಯೋಗದೊಂದಿಗೆ ದೆಹಲಿಗೆ ತೆರಳಿ ಕೇಂದ್ರ ಗೃಹ ಸಚಿವರು, ಕೃಷಿ ಸಚಿವರು ಹಾಗೂ ಪ್ರಧಾನಮಂತ್ರಿಗಳನ್ನು ಭೇಟಿ ಮಾಡುವ ಉದ್ದೇಶವಿದೆ ಎಂದು ತಿಳಿಸಿದರು.
ಬರ ಪರಿಸ್ಥಿತಿಯನ್ನು ಎದುರಿಸಲು ಕೇಂದ್ರ ಸರ್ಕಾರವೂ ರಾಜ್ಯದ ನೆರವಿಗೆ ಬರಬೇಕಾಗಿದೆ. ರಾಜ್ಯದ ರೈತರು ಎದುರಿಸುತ್ತಿರುವ ಸಂಕಷ್ಟವನ್ನು ಕೇಂದ್ರದ ಗಮನಕ್ಕೆ ತಂದು ಅಗತ್ಯ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗುವುದು ಎಂದು ಹೇಳಿದರು.
ಇತ್ತೀಚೆಗೆ ರಾಜ್ಯದ ವಿವಿಧ ಜಿಲ್ಲೆಗಳ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಖುದ್ದಾಗಿ ಆಲಿಸಿದ್ದೇನೆ. ಮಳೆ ಕೊರತೆಯಿಂದ ಬೆಳೆ ನಷ್ಟವಾಗಿರುವುದರ ಜೊತೆಗೆ ಕುಡಿಯುವ ನೀರು ಹಾಗೂ ಕೂಲಿ ಕೆಲಸದ ಕೊರತೆಯಿಂದಲೂ ರೈತರು ಮತ್ತು ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಅವರ ನೆರವಿಗೆ ನಿಲ್ಲಲು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ತಿಳಿಸಿದರು.
ಸಾರ್ವಜನಿಕರಿಗೆ ಸರಳ ಆಡಳಿತ ಒದಗಿಸುವುದು ಸರ್ಕಾರದ ಉದ್ದೇಶ; ಕರ್ತವ್ಯಲೋಪ ಎಸಗುವವರ ವಿರುದ್ಧ ಕ್ರಮ
ಕಂದಾಯ ಇಲಾಖೆಯ ಕಚೇರಿಗಳಿಗೆ ಬರುವ ಜನರು ತಮ್ಮ ಕೆಲಸಗಳಿಗಾಗಿ ಪದೇಪದೇ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು. ಅರ್ಜಿಗಳನ್ನು ಸಮರ್ಪಕವಾಗಿ ಪರಿಶೀಲಿಸಿ, ನಿಯಮಾನುಸಾರ ವಿಲೇವಾರಿ ಮಾಡುವ ಮೂಲಕ ಸಾರ್ವಜನಿಕರಿಗೆ ಸಮಯಕ್ಕೆ ಸರಿಯಾಗಿ ಸೇವೆ ಒದಗಿಸುವುದು ನಮ್ಮ ಜವಾಬ್ದಾರಿ ಎಂದರು.
ತಾಲೂಕು ಕಚೇರಿಗಳಲ್ಲಿ ದಾಖಲೆಗಳ ನಿರ್ವಹಣೆ, ಬಗರ್ ಹುಕುಂ ಅರ್ಜಿಗಳ ವಿಲೇವಾರಿ, ಪೋಡಿ ದುರಸ್ತಿ, ಖಾತೆ ಬದಲಾವಣೆ, ನ್ಯಾಯಾಲಯದ ಪ್ರಕರಣಗಳು ಹಾಗೂ ಸಾರ್ವಜನಿಕರ ಇತರ ಅಹವಾಲುಗಳನ್ನು ಆದ್ಯತೆಯ ಮೇರೆಗೆ ಬಗೆಹರಿಸಬೇಕು. ಆಡಳಿತದಲ್ಲಿ ಯಾವುದೇ ರೀತಿಯ ತಾರತಮ್ಯ, ಅನಗತ್ಯ ವಿಳಂಬ ಅಥವಾ ಅಕ್ರಮಗಳಿಗೆ ಅವಕಾಶ ನೀಡಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.
ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಅರಿತು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ನಕಲಿ ದಾಖಲೆಗಳ ಸೃಷ್ಟಿ, ಸರ್ಕಾರಿ ಜಮೀನುಗಳ ಒತ್ತುವರಿ, ದಾಖಲೆಗಳ ದುರುಪಯೋಗ ಹಾಗೂ ಪ್ರಭಾವಿಗಳ ಪರವಾಗಿ ಕೆಲಸ ಮಾಡುವ ಪ್ರವೃತ್ತಿ ಕಂಡುಬಂದರೆ ಸಂಬಂಧಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಸಾರ್ವಜನಿಕರ ಕೆಲಸಗಳು ಸುಗಮವಾಗಿ ನಡೆಯುತ್ತಿವೆಯೇ ಎಂಬುದನ್ನು ಪರಿಶೀಲಿಸಲು ಮುಂದೆಯೂ ಇಂತಹ ಅನಿರೀಕ್ಷಿತ ಭೇಟಿಗಳ ಮೂಲಕ ಆಡಳಿತ ವ್ಯವಸ್ಥೆಯ ಕಾರ್ಯನಿರ್ವಹಣೆಯನ್ನು ಅವಲೋಕಿಸಲಾಗುವುದು. ಸರ್ಕಾರಿ ಸೇವೆಗಳು ಜನರಿಗೆ ಸಮರ್ಪಕವಾಗಿ ತಲುಪಲು ಸಾರ್ವಜನಿಕರ ಸಹಕಾರವೂ ಅಗತ್ಯವಾಗಿದೆ ಎಂದು ಹೇಳಿದರು.
ಸಾರ್ವಜನಿಕರ ಕೆಲಸಗಳಿಗೆ ಅನಗತ್ಯ ವಿಳಂಬವಾಗಬಾರದು. ಕಂದಾಯ ಇಲಾಖೆಯ ದಾಖಲೆಗಳು ಸುರಕ್ಷಿತವಾಗಿರಬೇಕು. ಅರ್ಹ ಜನರಿಗೆ ಸರ್ಕಾರದ ಸೌಲಭ್ಯಗಳು ಸಕಾಲದಲ್ಲಿ ದೊರೆಯಬೇಕು. ಬರದಿಂದ ಸಂಕಷ್ಟದಲ್ಲಿರುವ ರೈತರು ಮತ್ತು ಜನಸಾಮಾನ್ಯರಿಗೆ ಅಗತ್ಯ ನೆರವು ಒದಗಿಸುವುದರ ಜೊತೆಗೆ ಪಾರದರ್ಶಕ, ಸರಳ ಹಾಗೂ ಜನಸ್ನೇಹಿ ಆಡಳಿತ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ತಿಳಿಸಿದರು.






