ಮೈಸೂರು,ಅಕ್ಟೋಬರ್,10,2026 (www.justkannada.in): ನಾಳೆಯಿಂದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಹಬ್ಬದ ಸಂಭ್ರಮ ಕಳೆಗಟ್ಟಲಿದ್ದು, ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವಕ್ಕೆ ಚಾಲನೆ ಸಿಗಲಿದೆ. ಈ ಮಧ್ಯೆ ನಾಳೆ ಸಿಎಂ ಡಿಕೆ ಶಿವಕುಮಾರ್ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಿಎಂ ಡಿಕೆ ಶಿವಕುಮಾರ್ ಅವರು ಪಾಲ್ಗೊಳ್ಳುವ ದಸರಾ ಮಹೋತ್ಸವದ ವಿವಿಧ ಕಾರ್ಯಕ್ರಮಗಳ ವಿವರ ಈ ಕೆಳಕಂಡಂತಿದೆ.
ನಾಳೆ ಬೆಳಿಗ್ಗೆ 9.30ಕ್ಕೆ ಬೆಂಗಳೂರಿನಿಂದ ಹೊರಟು 10 ಗಂಟೆಗೆ ಮೈಸೂರಿಗೆ ಆಗಮಿಸಲಿರುವ ಸಿಎಂ ಡಿಕೆ ಶಿವಕುಮಾರ್ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ 2026ರ ದಸರಾ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಶ್ರೀಗಳು ಬೆಳಿಗ್ಗೆ 11.50ರ ವೇಳೆಗೆ ಮೈಸೂರು ದಸರಾ ಮಹೋತ್ಸವವನ್ನು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ. ನಂತರ 12.30ಕ್ಕೆ ಕುಪ್ಪಣ್ಣ ಪಾರ್ಕ್ ನಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನವನ್ನು ಸಿಎಂ ಡಿಕೆ ಶಿವಕುಮಾರ್ ಉದ್ಘಾಟಿಸಲಿದ್ದಾರೆ. ಇದಾದ ಬಳಿಕ 3.30ಕ್ಕೆ ಶ್ರೀ ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ನಡೆಯುವ ದಸರಾ ಕುಸ್ತಿ ಪಂದ್ಯಾವಳಿಯನ್ನ ಉದ್ಘಾಟಿಸಲಿದ್ದಾರೆ.
ನಂತರ 4.30ಕ್ಕೆ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ, ಸಂಜೆ 6 ಗಂಟೆಗೆ ಅರಮನೆ ಆವರಣದಲ್ಲಿ ಆಯೋಜಿಸಿರುವ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಇದಾದ ನಂತರ ರಾತ್ರಿ 7.30ಕ್ಕೆ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ವಸ್ತು ಪ್ರದರ್ಶನವನ್ನ ಸಿಎಂ ಡಿಕೆ ಶಿವಕುಮಾರ್ ಉದ್ಘಾಟಿಸಿ ರಾತ್ರಿ 8.30ಕ್ಕೆ ಮೈಸೂರಿನಿಂದ ತೆರಳಲಿದ್ದಾರೆ.






