ಬೆಂಗಳೂರು,ಅಕ್ಟೋಬರ್,17,2026 (www.justkannada.in): ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜೀನಾಮೆ ಪತ್ರ ರವಾನಿಸಿರುವ ಸೌಮ್ಯರೆಡ್ಡಿ, ತಮ್ಮ ಹುದ್ದೆಯನ್ನು ತ್ಯಜಿಸುತ್ತಿರುವುದಾಗಿ ಘೋಷಿಸಿದ್ದಾರೆ . ಇದೇ ವೇಳೆ, ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಒಬ್ಬರೇ ಒಬ್ಬ ಮಹಿಳಾ ಸಚಿವರೂ ಇಲ್ಲದಿರುವ ಬಗ್ಗೆ ಪತ್ರದ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
20-08-2026ರಂದೇ ಈ ಸಂಬಂಧ ಸೌಮ್ಯರೆಡ್ಡಿ ಅವರು ಪತ್ರ ಬರೆದಿದ್ದು ನಾನು ಈ ಹುದ್ದೆಯನ್ನು ವಹಿಸಿಕೊಂಡಾಗ ಕೇವಲ ಎರಡು ವರ್ಷಗಳ ಕಾಲ ಮಾತ್ರ ಸೇವೆ ಸಲ್ಲಿಸುವುದಾಗಿ ಒಪ್ಪಿಕೊಂಡಿದ್ದೆ. ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಮಹಿಳೆಯರ ಆರೋಗ್ಯ, ಶಿಕ್ಷಣ, ಆರ್ಥಿಕ ಸಬಲೀಕರಣದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಅವರನ್ನು ಪಕ್ಷಕ್ಕೆ ಕರೆತರಲು ಅವಕಾಶ ಸಿಕ್ಕಿದ್ದು ನನ್ನ ಸೌಭಾಗ್ಯ. ಮುಖ್ಯವಾಗಿ ನಮ್ಮ ಸರ್ಕಾರದ 5 ಗ್ಯಾರಂಟಿ ಯೋಜನೆಗಳು ತಳಮಟ್ಟದಲ್ಲಿ ಮಹಿಳೆಯರ ಜೀವನದಲ್ಲಿ ಕ್ರಾಂತಿಕಾರಕ ಬದಲಾವಣೆ ತಂದಿರುವುದನ್ನು ಕಣ್ಣಾರೆ ಕಂಡಿದ್ದೇನೆ” ಎಂದು ತಿಳಿಸಿದ್ದಾರೆ.
“ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಈವರೆಗೂ ಒಬ್ಬರೇ ಒಬ್ಬ ಮಹಿಳಾ ಸಚಿವರೂ ಇಲ್ಲದಿರುವ ವಿಚಾರವನ್ನು ಮತ್ತೊಮ್ಮೆ ಪಕ್ಷದ ವರಿಷ್ಠರ ಗಮನಕ್ಕೆ ತರಲು ನಾನು ಬಯಸುತ್ತೇನೆ. ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತೆಯಾಗಿ ನಾನು ಮುಂದುವರಿಯುತ್ತೇನೆ, 2028ರ ರಾಜ್ಯ ವಿಧಾನಸಭಾ ಚುನಾವಣೆ ಹಾಗೂ 2029ರ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಶ್ರಮಿಸುತ್ತೇನೆ. ನೂತನ ಅಧ್ಯಕ್ಷೆ ನೇಮಕವಾಗುವವರೆಗೂ ಈ ಹುದ್ದೆಯಲ್ಲಿ ಮುಂದುವರೆಯುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.
Soumya Reddy, resigns, KPCC, women’s wing, president






