ಬೆಂಗಳೂರು, ಮೇ 06, 2020 (www.justkannada.in): ಸಚಿವಾಲಯದ ಎಲ್ಲಾ ಅಧೀನ ಕಾರ್ಯದರ್ಶಿಗಳು ಹಾಗೂ ಮೇಲ್ಪಟ್ಟ ಅಧಿಕಾರಿಗಳು ಕೆಲಸಕ್ಕೆ ಹಾಜರಾಗುವಂತೆ ಸುತ್ತೋಲೆ ಹೊರಡಿಸಲಾಗಿದೆ.
ಸಚಿವಾಲಯದ ಅಧಿಕಾರಿಗಳಿಗೆ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಮಹತ್ವದ ಈ ಮಾಹಿತಿ ನೀಡಿದ್ದಾರೆ. ತಮ್ಮ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಯವರನ್ನು ಅಗತ್ಯತೆಗೆ ಅನುಗುಣವಾಗಿ ಕಾರ್ಯನಿರ್ವಹಿಸಲು ತಿಳಿಸಿದ್ದಾರೆ.
ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿ ಕೇಂದ್ರ ಸ್ಥಾನದಲ್ಲಿ ಲಭ್ಯವಿರಬೇಕು ಹಾಗೂ ಮೇಲಧಿಕಾರಿಗಳ ಸೇವೆಯನ್ನು ಬಯಸಿದಲ್ಲಿ ಯಾವುದೇ ಕಾರಣ ನೀಡದೆ ಕಚೇರಿಗೆ ಹಾಜರಾಗಬೇಕೆಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಅತ್ಯಗತ್ಯ ಸೇವೆಗಳನ್ನು ಒದಗಿಸುತ್ತಿರುವ ಇಲಾಖೆಗಳಲ್ಲಿನ ಸರ್ಕಾರಿ ಕಚೇರಿಗಳಲ್ಲಿ ಶೇ.100 ರಷ್ಟು ಗ್ರೂಪ್ ಎ, ಬಿ, ಸಿ ಮತ್ತು ಡಿ ವೃಂದದ ಅಧಿಕಾರಿ/ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗತಕ್ಕದ್ದು. ಉಳಿದ ಇಲಾಖೆಗಳಲ್ಲಿನ ಗ್ರೂಪ್ ಎ ಮತ್ತು ಬಿ ವೃಂದದ ಎಲ್ಲಾ ಅಧಿಕಾರಿಗಳು ಮತ್ತು ಗ್ರೂಪ್ ಸಿ ಮತ್ತು ಡಿ ವೃಂದದ ಶೇ.33 ರಷ್ಟು ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿದ್ದಾರೆ.






