ಉಜಿರೆ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಆರೋಪಿ ಸಂತೋಷ್ ರಾವ್ ದೋಷಮುಕ್ತ ಎಂದು ತೀರ್ಪು ನೀಡಿದ ಕೋರ್ಟ್.

ಬೆಂಗಳೂರು,ಜೂನ್,16,2023(www.justkannada.in): ಕಳೆದ 11 ವರ್ಷಗಳ ಹಿಂದೆ ನಡೆದಿದ್ದ  ದಕ್ಷಿಣ ಕನ್ನಡ ಜಿಲ್ಲೆ ಉಜಿರೆಯ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಂತೋಷ್ ರಾವ್ ನನ್ನು ದೋಷಮುಕ್ತಗೊಳಿಸಿ ಬೆಂಗಳೂರು ಸಿಬಿಐ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.

ಪ್ರಕರಣದಲ್ಲಿ ಆರೋಪಿ ಸಂತೋಷ್‌ ರಾವ್‌ ಖುಲಾಸೆಗೊಳಿಸಿ ಬೆಂಗಳೂರು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ  ಸಿ.ಬಿ ಸಂತೋಷ್‌  ಇಂದು ತೀರ್ಪು ನೀಡಿದ್ದಾರೆ. ಸಾಕ್ಷ್ಯಾಧಾರಗಳ ಕೊರತೆ  ಹಿನ್ನೆಲೆ ಆರೋಪಿ ಸಂತೋಷ್‌ ರಾವ್ ​ನನ್ನು ನಿರ್ದೋಷಿ ಎಂದು ಆದೇಶ ಹೊರಡಿಸಿದ್ದಾರೆ. ಬರೋಬ್ಬರಿ 11 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ಸಿಬಿಐ ಕೋರ್ಟ್ ಅಂತಿಮ ತೀರ್ಪು ಪ್ರಕಟಿಸಿದೆ.

ಸೌಜನ್ಯ ದಕ್ಷಿಣ ಕನ್ನಡ ಜಿಲ್ಲೆ ಉಜಿರೆ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿಯಾಗಿದ್ದರು.   ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಚಂದಪ್ಪ ಗೌಡ ಮತ್ತು ಕುಸುಮಾವತಿ ದಂಪತಿಯ ಪುತ್ರಿ ಸೌಜನ್ಯ ಅಕ್ಟೋಬರ್ 9 ರಂದು ಕಾಲೇಜಿನಿಂದ ಮನೆಗೆ ತೆರಳುವಾಗ ನಾಪತ್ತೆಯಾಗಿದ್ದರು. 2012ರ ಅಕ್ಟೋಬರ್‌ 10 ರಂದು ಧರ್ಮಸ್ಥಳದ ಬಳಿ ಸೌಜನ್ಯ ಮೃತದೇಹ ಪತ್ತೆಯಾಗಿತ್ತು.

ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ, ಕೊಲೆ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಆರೋಪಿ ಸಂತೋಷ್ ರಾವ್ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದರು. ಬಳಿಕ ಪೊಲೀಸರು ಸರಿಯಾಗಿ ತನಿಖೆ‌ ನಡೆಸಿಲ್ಲ ಎಂಬ ಆರೋಪ ವ್ಯಕ್ತವಾಗಿತ್ತು. ಹೀಗಾಗಿ ಹಲವು ಹೋರಾಟಗಳ ಬಳಿಕ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲಾಗಿತ್ತು.

Key words: Accused -Santosh Rao- Ujire –sowjanya- rape-murder case.