ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿವಿಯ ನೂತನ ಸ್ನಾತಕೋತ್ತರ ಕೇಂದ್ರ  ಉದ್ಘಾಟನೆ

ಬೆಂಗಳೂರು,ಡಿಸೆಂಬರ್,23,2025 (www.justkannada.in):  ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬಾಗಲೂರಿನಲ್ಲಿ  ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ನೂತನ ಸ್ನಾತಕೋತ್ತರ ಕೇಂದ್ರವನ್ನು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್ ಇಂದು ವಿಧ್ಯುಕ್ತವಾಗಿ ಉದ್ಘಾಟಿಸಿದರು.

ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಸಚಿವ ಎಂ.ಸಿ ಸುಧಾಕರ್ ಅವರು ಶಿಲಾಫಲಕವನ್ನು ಅನಾವರಣಗೊಳಿಸಿ ಶುಭ ಹಾರೈಸಿದರು. ಉನ್ನತ ಶಿಕ್ಷಣದ ಸೌಲಭ್ಯ ವಿಸ್ತರಣೆಯ ಜೊತೆಗೆ ಗುಣಮಟ್ಟದ ಬಗ್ಗೆಯೂ ಅಗತ್ಯ ಗಮನ ಹರಿಸಬೇಕೆಂದು ಸೂಚಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬ್ಯಾಟರಾಯನಪುರ ಕ್ಷೇತ್ರದ ಶಾಸಕರೂ ಆದ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ನೂತನ ಸ್ನಾತಕೋತ್ತರ ಕೇಂದ್ರಕ್ಕೆ ಅಗತ್ಯವಿರುವ ಭೂಮಿ ಮತ್ತು ಮೂಲಸೌಕರ್ಯ ಒದಗಿಸುವ ಭರವಸೆಯಿತ್ತರು.

ಅಧಿಕ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಸ್ನಾತಕೋತ್ತರ ಕೇಂದ್ರದಲ್ಲಿ ಪ್ರವೇಶ ಪಡೆದು ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ಅವರು ಇದೇ ಸಂದರ್ಭದಲ್ಲಿ ಮನವಿ ಮಾಡಿದರು.

ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ರಮೇಶ್. ಬಿ. ಪ್ರಾಸ್ತಾವಿಕವಾಗಿ ಮಾತನಾಡಿ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಕಡಿಮೆ ವೆಚ್ಚದಲ್ಲಿ ಉತ್ತಮ ಗುಣಮಟ್ಟದ ಉನ್ನತ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಈ ಸ್ನಾತಕೋತ್ತರ ಕೇಂದ್ರ ಮಹತ್ವದ ಹೆಜ್ಜೆಯಾಗಿದೆ ಎಂದು ಬಣ್ಣಿಸಿದರು.

ವಿಶ್ವವಿದ್ಯಾನಿಲಯದ ಕುಲಸಚಿವ ಎ. ನವೀನ್ ಜೋಸೆಫ್, ರಮೇಶ್.ಬಿ. ಕುಡೇನಟ್ಟಿ, ವಿತ್ತಾಧಿಕಾರಿಗಳಾದ ಎಂ.ವಿ. ವಿಜಯಲಕ್ಷ್ಮಿ, ಸ್ನಾತಕೋತ್ತರ ಕೇಂದ್ರದ ನಿರ್ದೇಶಕರಾದ ಪ್ರೊ.ರಿತಿಕಾ ಸಿನ್ಹಾ, ಸಿಂಡಿಕೇಟ್ ಮತ್ತು ವಿದ್ಯಾವಿಷಯಕ ಪರಿಷತ್ತಿನ ಸದಸ್ಯರು ಹಾಗೂ ಬಾಗಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಎ.ಕೆಂಪೇಗೌಡರು ಉಪಸ್ಥಿತರಿದ್ದರು.

Key words: Dr. Manmohan Singh, Bangalore City University, PG Center. Inauguration