ನವದೆಹಲಿ,ಅಕ್ಟೋಬರ್,12,2026 (www.justkannada.in): ಕೇಂದ್ರ ಸರ್ಕಾರದಿಂದ ‘ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ. ಡಾ.ಬಿಆರ್ ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನ ಅಳಿಸೋಕೆ ಹೊರಟಿದ್ದಾರೆ ಎಂದು ಸಚಿವ ಶಿವರಾಜ್ ತಂಗಡಗಿ ಕಿಡಿಕಾರಿದರು.
ಎಸ್‌ಐಆರ್ ರದ್ದತಿ, ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿಇಂಡಿಯಾ ಒಕ್ಕೂಟದಿಂದ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ. ಈ ವೇಳೆ ಮಾತನಾಡಿದ ಸಚಿವ ಶಿವರಾಜ್ ತಂಗಡಗಿ ಬಿಜೆಪಿಗರನ್ನ 2-3 ದಿನಗಳಿಂದ ನೋಡಿದರೆ ಹೆದರಿದ್ದಾರೆ ಎಂದು ಗೊತ್ತಾಗ್ತಿದೆ . ಅವರ ಸತ್ಯ ಜನರಿಗೆ ಗೊತ್ತಾಗ್ತಿದೆ. ಜನರಿಗೆ ದೆಹಲಿಗೆ ಬರುವುದಕ್ಕೆ ಬಿಡುತ್ತಿಲ್ಲ. ರೈಲು, ಮೆಟ್ರೋ ಬಂದ್ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವದ ಕಗ್ಗೊಲೆ ಆಗ್ತಿದೆ. ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನ ಅಳಿಸೋಕೆ ಹೊರಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಅಬಕಾರಿ ಸಚಿವ ಕೆ.ಎಂ.ಶಿವಲಿಂಗೇಗೌಡ ಮಾತನಾಡಿ, ಕೇಂದ್ರ ಚುನಾವಣಾ ಆಯೋಗವನ್ನ ಕೇಂದ್ರ ಸರ್ಕಾರ ಕೈಗೊಂಬೆಯಾಗಿ ಮಾಡಿಕೊಂಡಿದೆ. ಹಾಗಾಗಿ ಜ್ಞಾನೇಶ್ ಕುಮಾರ್ ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿ ಇಡೀ ದೇಶಾದ್ಯಂತ ಹೋರಾಟ ನಡೆಯುತ್ತಿದೆ. ಚುನಾವಣಾ ವ್ಯವಸ್ಥೆಯಲ್ಲಿ ಆಗಿರುವ ಲೋಪದೋಷ ಸರಿಪಡಿಸಬೇಕು. ಕೇಂದ್ರ ಸರ್ಕಾರ ಗೌರವಯುತವಾಗಿ ನಡೆದುಕೊಂಡು ಹೋಗಬೇಕು ಎಂದು ಹರಿಹಾಯ್ದರು.






