ಅಮೆರಿಕಾದ ನ್ಯೂ ಜೆರ್ಸಿಯಲ್ಲಿ ಕಾಲಭೈರವೇಶ್ವರ ಸ್ವಾಮಿ ದೇಗುಲಕ್ಕೆ ಅಡಿಗಲ್ಲು ಪೂಜೆ ನೆರವೇರಿಸಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ…

ನ್ಯೂಜೆರ್ಸಿ,ಜೂ, 30.2019(www.justkannada.in):  ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಜೂನ್ 29 ರಂದು ನ್ಯೂ ಜೆರ್ಸಿಯ ಸೋಮರ್‍ಸೆಟ್ ಎಂಬಲ್ಲಿ 20 ಎಕರೆ ಪ್ರದೇಶದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ನಿರ್ಮಿಸುತ್ತಿರುವ ಕಾಲಭೈರವೇಶ್ವರ ಸ್ವಾಮಿ ದೇವಾಲಯದ ಭೂಮಿ ಪೂಜೆಗೆ ಸಂಬಂಧಿಸಿದಂತೆ ವಿವಿಧ ಧಾರ್ಮಿಕ ವಿಧಿ ವಿಧಾನಗಳಲ್ಲಿ ಪಾಲ್ಗೊಂಡರು.

ನಂತರ ಮಾತನಾಡಿದ  ಸಿಎಂ ಹೆಚ್.ಡಿ ಕುಮಾರಸ್ವಾಮಿ,  ಆದಿಚುಂಚನಗಿರಿ ಮಹಾಸಂಸ್ಥಾನವು ಅಮೆರಿಕಾದ ನ್ಯೂ ಜೆರ್ಸಿಯಲ್ಲಿ ನಿರ್ಮಿಸುತ್ತಿರುವ ಈ ದೇವಾಲಯವು ಭಾರತೀಯರ, ಅದರಲ್ಲೂ ಕನ್ನಡಿಗರಿಗೆ ಪ್ರಮುಖ ಸಾಂಸ್ಕೃತಿಕ ಕೇಂದ್ರವಾಗಿ ರೂಪುಗೊಳ್ಳಲಿದೆ. ಹೊರನಾಡ ಕನ್ನಡಿಗರು ತಮ್ಮ ಬೇರನ್ನು ಬಲಪಡಿಸಲು, ಸಂಸ್ಕೃತಿಯೊಂದಿಗೆ ಬೆಸೆದುಕೊಳ್ಳಲು ಇಂತಹ ಸಾಂಸ್ಕøತಿಕ ಕೇಂದ್ರಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಅಭಿಪ್ರಾಯಪಟ್ಟರು.

ಆದ್ದರಿಂದ ಇಲ್ಲಿ ನೆಲೆಸಿರುವ ಕನ್ನಡಿಗರು ಈ ದೇವಾಲಯದ ನಿರ್ಮಾಣ ಕಾರ್ಯದಲ್ಲಿ ಮನಃಪೂರ್ವಕವಾಗಿ ಕೈಜೋಡಿಸಬೇಕು ಎಂದು ಸಲಹೆ ನೀಡಿದರು..

ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದವು. ಸ್ಥಳೀಯ ಕನ್ನಡಿಗರ ಸಂಘಟನೆಗಳ ಪದಾಧಿಕಾರಿಗಳು ಸಹ ಪಾಲ್ಗೊಂಡಿದ್ದರು. ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು, ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಉಪಸ್ಥಿತರಿದ್ದರು.

Key words: CM HD Kumaraswamy -foundation stone – Kalabhairaveshwara Swamy -Temple – New Jersey