ಸರ್ಕಾರಿ ಸ್ಥಳದಲ್ಲಿ RSS ಚಟುವಟಿಕೆ ನಿರ್ಬಂಧ: ಪರಿಶೀಲನೆಗೆ ಸಿಎಸ್ ಗೆ ಸೂಚನೆ- ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ, ಅಕ್ಟೋಬರ್ 13,2025 (www.justkannada.in):  ಸರ್ಕಾರಿ ಸ್ಥಳದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ತಮಿಳುನಾಡು ರಾಜ್ಯದ ಕ್ರಮವನ್ನು ಪರಿಗಣಿಸಿ, ಪರಿಶೀಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸಚಿವ ಪ್ರಿಯಾಂಕ್ ಖರ್ಗೆಯವರು ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳನ್ನು ನಿರ್ಬಂಧಿಸಲು ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಆರ್ ಎಸ್ ಎಸ್ ಸಂಘಟನೆ ತನ್ನ ಚಟುವಟಿಕೆಗಳಿಗೆ ಸರ್ಕಾರಿ ಸ್ಥಳಗಳನ್ನು ಬಳಸಿಕೊಳ್ಳುತ್ತಿದೆ. ತಮಿಳುನಾಡು ರಾಜ್ಯದಲ್ಲಿ ಇದನ್ನು ನಿರ್ಬಂಧಿಸಿದಂತೆ  ರಾಜ್ಯದಲ್ಲಿಯೂ ನಿರ್ಬಂಧಿಸಬೇಕು ಎಂದು ಪತ್ರ ಬರೆದಿದ್ದಾರೆ ಎಂದರು.

ಸಂಪುಟ ಪುನರ್ ರಚನೆಗೂ ಇಂದಿನ ಭೋಜನಕೂಟಕ್ಕೂ ಸಂಬಂಧವಿಲ್ಲ

ರಾಜ್ಯದಲ್ಲಿ ಬದಲಾವಣೆಯಲ್ಲಿ ಹೈಕಮಾಂಡ್ ನವರ ನಿರ್ಧಾರವೇ ಮುಖ್ಯ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಪಕ್ಷದ ವರಿಷ್ಠರ ಮತ್ತು ಶಾಸಕರ ಅಭಿಪ್ರಾಯ ಬಹಳ ಮುಖ್ಯ. ಶಾಸಕರ ಒಮ್ಮತ ಹಾಗೂ ಹೈಕಮಾಂಡ್ ನ ಆರ್ಶೀವಾದವಿರಬೇಕು.  ಇಂದಿನ ಭೋಜನಕೂಟ ಕಾರ್ಯಕ್ರಮದಲ್ಲಿ ಯಾವುದೇ ವಿಶೇಷತೆ ಇಲ್ಲ. ಸಂಪುಟ ಪುನರ್ರಚನೆಗೂ ಇಂದಿನ ಭೋಜನಕೂಟಕ್ಕೂ ಯಾವುದೇ ಸಂಬಂಧವಿಲ್ಲ. ನವೆಂಬರ್ ತಿಂಗಳಲ್ಲಿ ಯಾವುದೇ ಕ್ರಾಂತಿಯೂ ಇಲ್ಲ ಎಂದರು.

ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ಸುಧಾರಿಸಿದೆ

ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡುತ್ತಾ, ಅವರ  ಆರೋಗ್ಯ ಸುಧಾರಣೆಯಾಗುತ್ತಿದೆ ಎಂದರು.

ನನಗೆ ಮಾಟ ಮಂತ್ರಗಳಲ್ಲಿ ನಂಬಿಕೆಯಿಲ್ಲ

ಶಾಸಕ ಮುನಿರತ್ನ ಮತ್ತು ಡಿಕೆ ಶಿವಕುಮಾರ್ ಅವರ ನಡೆದ ಮಾತುಕತೆಯ ಬಗ್ಗೆ ಪ್ರತಿಕ್ರಿಯೆ ನೀಡಿ, ಡಿಸಿಎಂ ಡಿ ಕೆ ಶಿವಕುಮಾರ್ ರವರು ನಿನ್ನೆ ಬೆಂಗಳೂರು ನಡಿಗೆ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಲಾಲ್ ಬಾಗ್  ನಂತೆ ಮತ್ತಿಕರೆಯ ಜೆ.ಪಿಪಾರ್ಕ್ ದಲ್ಲಿಯೂ ಕಾರ್ಯಕ್ರಮವಿತ್ತು. ಶಾಸಕ ಮುನಿರತ್ನರವರು ವೇದಿಕೆಗೆ ಆಗಮಿಸಿ, ತಮ್ಮ ಅಭಿಪ್ರಾಯವನ್ನು ನೀಡಬಹುದಾಗಿತ್ತು. ಆದರೆ ಶಾಸಕರು ತಮ್ಮ ಅಭಿಪ್ರಾಯವನ್ನು ತಿಳಿಸಲಿಲ್ಲ. ಕಾರ್ಯಕ್ರಮಕ್ಕೆ ಆಹ್ವಾನವಿತ್ತೇ ಇಲ್ಲವೇ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ . ನಾನು  ಯಾವುದೇ ಮಾಟ ಮಂತ್ರಗಳಲ್ಲಿ ನಂಬಿಕೆಯಿರಿಸಿಲ್ಲ ಎಂದರು.

ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಸೂಕ್ತ ಅನುದಾನ ನೀಡಿ, ಮುಂದಿನ ನಾಲ್ಕು ವರ್ಷದೊಳಗೆ ಪೂರ್ಣಗೊಳಿಸಲಾಗುವುದು ಎಂದರು.

ಸಂಪುಟ ಪುನರ್ ರಚನೆ

ವಾಲ್ಮೀಕಿ ಸಮಾಜದವರಿಗೆ ಸಚಿವ ಸ್ಥಾನ ನೀಡಲಾಗುವುದೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ, ಶಾಸಕರು ರಾಜೀನಾಮೆ ನೀಡಿದ್ದು, ಸರ್ಕಾರ ಅವರನ್ನು ತೆಗೆದುಹಾಕಿಲ್ಲ. ಮುಂದಿನ ದಿನಗಳಲ್ಲಿ ನಡೆಯುವ ಸಂಪುಟ ಪುನರ್ರಚನೆಯ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದವರಿಗೆ ಪ್ರಾತಿನಿಧ್ಯ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.

Key words: RSS, activity, banned , CS, instructed, CM Siddaramaiah