ಸಂಕ್ರಾಂತಿಗೆ ಸೂರ್ಯ ಪಥ ಬದಲಿಸುವ ರೀತಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದು ಅನುಮಾನ- ಮಾಜಿ ಸಚಿವ ಸಿ.ಪಿ ಯೋಗೇಶ್ವರ್

ರಾಮನಗರ, ಅಕ್ಟೋಬರ್​,2,2023(www.justkannada.in):  ಸಂಕ್ರಾಂತಿಗೆ ಸೂರ್ಯ ಪಥ ಬದಲಿಸುವ ರೀತಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದು ಅನುಮಾನ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿ.ಪಿ ಯೋಗೇಶ್ವರ್,  2023 ಮುಗಿದ ಬಳಿಕ ರಾಜಕೀಯ ಬದಲಾವಣೆ ನಿರೀಕ್ಷೆಯಿದೆ. ಕಾಂಗ್ರೆಸ್ ಶಾಸಕರಿಗೆ ರಾಜಕೀಯ ಭವಿಷ್ಯದ ಆತಂಕ ಇದೆ. ಹಾಗಾಗಿ ಇದರ ಪರಿಣಾಮವನ್ನ ಸಂಕ್ರಾಂತಿ ವೇಳೆಗೆ ಎಲ್ಲರೂ ನೋಡುತ್ತೀರಾ. ನಾವು ಯಾವುದೇ ರೀತಿಯ ಆಪರೇಷನ್ ಮಾಡುತ್ತಿಲ್ಲ. ನಮ್ಮ ಸಂಪರ್ಕದಲ್ಲಿ ಯಾರೂ ಇಲ್ಲ ಎಂದು ಹೇಳಿದರು.

ಕಾಂಗ್ರೆಸ್​ ನ ಅಸಮಾಧಾನಿತ ಶಾಸಕರು ವಿಮುಖವಾಗಿ ಯೋಚನೆ ಮಾಡುತ್ತಿದ್ದಾರೆ. ಕೆಲ ಕಾಂಗ್ರೆಸ್ ಶಾಸಕರು ವೈಯಕ್ತಿಕವಾಗಿ ನನ್ನ ಜೊತೆ ಮಾತನಾಡಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಶಾಸಕರು ಡಮ್ಮಿಗಳಾಗಿದ್ದಾರೆ‌. ಅವರಿಗೆ ಶಾಸಕರ ಕಾರ್ಯ ನಿರ್ವಹಿಸಲು ಆಗುತ್ತಿಲ್ಲ. ಸರ್ಕಾರ ಐದು ಗ್ಯಾರಂಟಿ ಕೊಟ್ಟಿದೆ ಹಾಗಾಗಿ ಅನುದಾನ ಕೊಡಲ್ಲ ಅಂತ ಹೇಳಿದ್ದಾರೆ‌. ಯಾವುದೇ ಅಭಿವೃದ್ಧಿ ಕಾರ್ಯಕ್ಕೆ ಸರ್ಕಾರದಲ್ಲಿ ದುಡ್ಡಿಲ್ಲ. ಹಾಗಾಗಿ ಕಾಂಗ್ರೆಸ್ ಶಾಸಕರು ನಿರುದ್ಯೋಗಿಗಳಾಗಿದ್ದಾರೆ‌ ಎಂದು  ಕಿಡಿಕಾರಿದರು.

ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿ.ಪಿ ಯೋಗೇಶ್ವರ್,  ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಎದುರಿಸಲು ಮೈತ್ರಿ ಅನಿವಾರ್ಯ. ಮೈತ್ರಿಯಿಂದ ಬಿಜೆಪಿ-ಜೆಡಿಎಸ್ ಎರಡೂ ಪಕ್ಷಕ್ಕೂ ಅನುಕೂಲ ಆಗಲಿದೆ ಎಂದರು.

Key words: Congress government -Sankranti – Former Minister- CP Yogeshwar