ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗದಿರಲು ಕಾಂಗ್ರೆಸ್ ನಾಯಕರು ತೀರ್ಮಾನ.

ಬೆಂಗಳೂರು,ಜನವರಿ,10,2024(www.justkannada.in): ಅಯೋಧ್ಯೆಯಲ್ಲಿ ಜನವರಿ 22ರಂದು  ನಡೆಯಲಿರುವ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗದಿರಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ರಾಮಂದಿರ ಉದ್ಘಾಟನಾ ಕಾರ್ಯಕ್ರಮದ ಆಹ್ವಾನವನ್ನು ಕಾಂಗ್ರೆಸ್  ಗೌರವಯುತವಾಗಿ ತಿರಸ್ಕರಿಸಿದೆ ಎನ್ನಲಾಗಿದೆ.  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ಲೋಕಸಭೆಯಲ್ಲಿ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಕಾರ್ಯಕ್ರಮಕ್ಕೆ ಹೋಗದಿರಲು ನಿರ್ಧರಿಸಿದ್ದಾರೆ

ಇದೊಂದು ಆರ್‌ಎಸ್‌ಎಸ್‌ ಹಾಗೂ ಬಿಜೆಪಿಯ ಕಾರ್ಯಕ್ರಮವಾಗಿದ್ದು, ಹೀಗಾಗಿ ಇವರು ಪಾಲ್ಗೊಳ್ಳುವುದಿಲ್ಲ ಎಂದು ಕಾಂಗ್ರೆಸ್‌ ‍ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಮ್ಮ ದೇಶದಲ್ಲಿ ಲಕ್ಷಾಂತರ ಜನರು ರಾಮನನ್ನು ಪೂಜಿಸುತ್ತಾರೆ. ಧರ್ಮ ಎಂಬುದು ವೈಯಕ್ತಿಕ ವಿಷಯವಾಗಿದೆ. ಆದರೆ ಆರ್ ಎಸ್ ಎ ಸ್ ಮತ್ತು ಬಿಜೆಪಿಯವರು ಬಹಳ ಹಿಂದಿನಿಂದಲೂ ಅಯೋಧ್ಯೆಯಲ್ಲಿ ಮಂದಿರವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ. ಬಿಜೆಪಿ ಮತ್ತು ಆರ್ ಎಸ್ ಎಸ್  ನಾಯಕರಿಂದ ಆಗುತ್ತಿರುವ ಈ ದೇವಾಲಯದ ಉದ್ಘಾಟನೆಯನ್ನು ಚುನಾವಣಾ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಎಂಬುದು ಬಹಳ ಸ್ಪಷ್ಟವಾಗಿದೆ.

2019ರ ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ಬದ್ಧರಾಗಿ ಮತ್ತು ಶ್ರೀರಾಮನನ್ನು ಗೌರವಿಸುವ ಲಕ್ಷಾಂತರ ಜನರ ಭಾವನೆಗಳನ್ನು ಗೌರವಿಸಿ, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ಅಧೀರ್ ರಂಜನ್ ಚೌಧರಿ ಅವರು ಆರೆಸ್ಸೆಸ್ ಮತ್ತು ಬಿಜೆಪಿಯವರು ಆಯೋಜಿಸಿರುವ ಕಾರ್ಯಕ್ರಮದ ಆಹ್ವಾನವನ್ನು ಗೌರವಯುತವಾಗಿ ತಿರಸ್ಕರಿಸಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

Key words: Congress leaders-decided -not – attend – Ram Mandir- inauguration