ನೂತನ ಸಂಸತ್ ಭವನ ಉದ್ಘಾಟನಾ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ –ಮಾಜಿ ಸಿಎಂ ಹೆಚ್.ಡಿಕೆ ಆಕ್ರೋಶ.

ಬೆಂಗಳೂರು,ಮೇ,26,2023(www.justkannada.in): ನೂತನ ಸಂಸತ್ ಭವನ ಉದ್ಘಾಟನಾ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರಿಂದ ಸಂಸತ್ ಭವನ ಉದ್ಘಾಟನೆಗೆ ಕಾಂಗ್ರೆಸ್ ವಿರೋಧಿಸುತ್ತಿರುವ ವಿಚಾರ ಕುರಿತು ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಸಂಸತ್ ಭವನ ಒಂದು ಪಕ್ಷಕ್ಕೆ, ವ್ಯಕ್ತಿಗೆ ಸೀಮಿತವಲ್ಲ. ದೇಶದ ತೆರಿಗೆ ಹಣದಿಂದ ಕಟ್ಟಿರುವ ಭವನ. ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳು ಧ್ವನಿ ಎತ್ತಿದ್ದಾರೆ. ರಾಷ್ಟ್ರಪತಿಯಾಗಿರುವ ಆದಿವಾಸಿ ಮಹಿಳೆಗೆ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ಧ್ವನಿ ಎತ್ತಿದೆ. ಯಾವುದೇ ಭವನವನ್ನು ಉದ್ಘಾಟನೆ ಮಾಡಬೇಕಾದಾಗ ರಾಷ್ಟ್ರಪತಿ, ರಾಜ್ಯಪಾಲರನ್ನು ಕರೆದ ಉದಾಹರಣೆ ಇಲ್ಲ. ಛತ್ತೀಸ್ ಘಡ , ವಿಧಾನಸಭೆ ಅಡಿಗಲ್ಲಿಗೆ ಸೋನಿಯಾಗಾಂಧಿ, ರಾಹುಲ್ ಗಾಂಧಿಯನ್ನು ಕರೆದಿದ್ದರೂ,  ರಾಜ್ಯಪಾಲರನ್ನು ಕರೆಸಿ ಅಡಿಗಲ್ಲು ಹಾಕಿಸಿರಲಿಲ್ಲ. ಕರ್ನಾಟಕದ ವಿಕಾಸಸೌಧವನ್ನು ಅಂದಿನ ಮುಖ್ಯಮಂತ್ರಿ ಉದ್ಘಾಟನೆ ಮಾಡಿದ್ದರು. ಕಾಂಗ್ರೆಸ್ ಪಕ್ಷ ಈಗ ರಾಷ್ಟ್ರಪತಿ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು.

ಗ್ಯಾರಂಟಿ ಜಾರಿಗೆ ಕಾಂಗ್ರೆಸ್ ಸರ್ಕಾರ ವಿಳಂಬ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿ ಕುಮಾರಸ್ವಾಮಿ, ಚುನಾವಣೆಗೂ ಮುನ್ನ ಕಾಂಗ್ರೆಸ್​​ ನಿನಗೂ ಫ್ರೀ ನನಗೂ ಫ್ರೀ ಎಂದು ಸಿದ್ದರಾಮಯ್ಯ ಹೇಳಿದ್ದರು. ಆದರೀಗ ಕಂಡಿಷನ್ಸ್ ಹಾಕುವ ಬಗ್ಗೆ ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯ, ಮೊದಲ ಸಂಪುಟದಲ್ಲೇ ಗ್ಯಾರಂಟಿ ಜಾರಿ ಮಾಡುತ್ತೇವೆ ಎಂದಿದ್ದರು. ಆದರೆ ಈವರೆಗೆ ಜಾರಿ ಮಾಡಿಲ್ಲ. ಅವರು ಕುತಂತ್ರ ರಾಜಕಾರಣ ನಡೆಸಿ ರಾಜ್ಯದ ಜನರನ್ನು ವಂಚಿಸಿದ್ದಾರೆ ಎಂದು ಕಿಡಿಕಾರಿದರು.

Key words: Congress-politics – inauguration – new parliament -building. H.D.Kumaraswamy