ಮೇಕೆದಾಟು ಯೋಜನೆ: ಪರಿಷ್ಕೃತ ಡಿಪಿಆರ್ ಕೇಂದ್ರಕ್ಕೆ ಸಲ್ಲಿಸುತ್ತೇವೆ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ನವೆಂಬರ್,19,2025 (www.justkannada.in): ಮೇಕೆದಾಟು ಯೋಜನೆಗೆ ಪರಿಷ್ಕೃತ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನಸೌಧದಲ್ಲಿ ಮೇಕೆದಾಟು ಯೋಜನೆ ಅನುಷ್ಠಾನ ಕುರಿತು ಅಧಿಕಾರಿಗಳ ಸಭೆ ಹಾಗೂ ಕಾವೇರಿ ನೀರಾವರಿ ನಿಗಮ ನಿರ್ದೇಶಕರ ಮಂಡಳಿ ಸಭೆ ಬಳಿಕ ಮಾತನಾಡಿದ ಡಿಕೆ ಶಿವಕುಮಾರ್, ಮೇಕೆದಾಟು ಯೋಜನೆ ಕುರಿತ ಸುಪ್ರೀಂ ಕೋರ್ಟ್ ತೀರ್ಪು ನಂತರ ಈ ಯೋಜನೆಯನ್ನು ಹೇಗೆ ಮುಂದಕ್ಕೆ ತೆಗೆದುಕೊಂಡು ಹೋಗಬೇಕು ಎಂದು ಚರ್ಚಿಸಿದ್ದೇವೆ. ಡಿಪಿಆರ್ ಅನ್ನು ಪರಿಷ್ಕರಿಸಿ ಸಲ್ಲಿಸಬೇಕಿದೆ. ಇದರಲ್ಲಿ ಯೋಜನೆ ಸಂಪೂರ್ಣ ವಿವರ, ಎಷ್ಟು ಅರಣ್ಯ ಪ್ರದೇಶ ಮುಳುಗಡೆಯಾಗಲಿದೆ ಎಂದು ಮಾಹಿತಿ ನೀಡಬೇಕು ಎಂದರು.

ಮೇಕೆದಾಟು ಯೋಜನೆ ಕಚೇರಿಯನ್ನು ಹಾರೋಬೆಲೆಯಲ್ಲಿ ಆರಂಭಿಸಿದ್ದೇವೆ. ಮಂಡ್ಯಕ್ಕೆ ಹತ್ತಿರವಾಗುವಂತೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ಸಿಇ, ಸಿಸಿಎಫ್ ಅವರನ್ನೊಳಗೊಂಡ ಪ್ರತ್ಯೇಕ ಕಚೇರಿ ಆರಂಭಿಸಲು ತೀರ್ಮಾನಿಸಿದ್ದೇವೆ. ಇದಕ್ಕೆ ಅಗತ್ಯ ಸಿಬ್ಬಂದಿ ಒದಗಿಸಲು ಸಿದ್ದತೆ ಮಾಡುತ್ತೇವೆ. ಈ ಹಿಂದೆ ಸಲ್ಲಿಸಿದ್ದ ಡಿಪಿಆರ್ ಅನ್ನು ಚಾಲ್ತಿ ದರಗಳಿಗೆ ಪರಿಷ್ಕರಿಸಿ ಸಲ್ಲಿಸುತ್ತೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Key words: Mekedatu project, revised, DPR, DCM, DK Shivakumar