ಮೈಸೂರು ಅಕ್ಟೋಬರ್,5,2026 (www.justkannada.in): ವರುಣ ಕ್ಷೇತ್ರದಲ್ಲಿ ಒಟ್ಟು ರೂ.183.78 ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿದೆ. ಇದರಲ್ಲಿ ಸುಮಾರು 40.40 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಹಾಗ 143.38 ಕೋಟಿ ವೆಚ್ಚದ ನೂತನ ಕಾಮಗಾರಿಗಳ ಶಂಕುಸ್ಥಾಪನೆ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಇಂದು ನಂಜನಗೂಡು ತಾಲೂಕಿನ ದಾಸನೂರು ಗ್ರಾಮದಲ್ಲಿ ಆಯೋಜಿಸಲಾಗಿದ್ದ ವರುಣ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಉದ್ಘಾಟಿಸಿ ಸಿದ್ದರಾಮಯ್ಯ ಅವರು ಮಾತನಾಡಿದರು.
ಇದೇ ಸಂದರ್ಭದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಮಹಿಳಾ ವಸತಿ ನಿಲಯ ಸೇರಿದಂತೆ ವಿವಿಧ ಪ್ರಮುಖ ಕಟ್ಟಡ ಹಾಗೂ ಯೋಜನೆಗಳನ್ನು ಉದ್ಘಾಟಿಸಲಾಯಿತು.
2013ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೆವು. ಅಷ್ಟೇ ಅಲ್ಲದೆ, ಅನ್ನಭಾಗ್ಯ, ಕ್ಷೀರಭಾಗ್ಯ ಸೇರಿದಂತೆ 20 ರಿಂದ 30 ಹೊಸ ಯೋಜನೆಗಳನ್ನು ಜಾರಿಗೆ ತಂದು ಬಡವರ, ಎಲ್ಲಾ ಧರ್ಮ-ಜಾತಿಗಳ ಜನರ ಆರ್ಥಿಕ ಸಬಲೀಕರಣಕ್ಕೆ ಶ್ರಮಿಸಿದ್ದೆವು ಎಂದು ಹೇಳಿದರು.
2023ರಲ್ಲಿ ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ ನಾವು ಘೋಷಿಸಿದ್ದ ಐದಕ್ಕೆ ಐದೂ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದೇವೆ. ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ ನೀಡಲಾಗಿದೆ ಎಂದರು.
ರಾಜ್ಯದ 240 ತಾಲೂಕುಗಳ ಪೈಕಿ 220 ತಾಲೂಕುಗಳು ಭೀಕರ ಬರಗಾಲಕ್ಕೆ ತುತ್ತಾಗಿದ್ದವು. ಇಂತಹ ಕಷ್ಟದ ಸಂದರ್ಭದಲ್ಲೂ ಗ್ಯಾರಂಟಿ ಯೋಜನೆಗಳು ಜನರ ಕೈಗೆ ತಲುಪಿರುವುದರಿಂದ ಪ್ರತಿಯೊಬ್ಬರಿಗೂ ಆಹಾರ, ಆರ್ಥಿಕ ನೆರವು ಮತ್ತು ನೆಮ್ಮದಿ ಸಿಕ್ಕಿದೆ. ಜಾತಿ, ಧರ್ಮ, ಅಥವಾ ಪಕ್ಷ ಭೇದವಿಲ್ಲದೆ ರಾಜ್ಯದ ಎಲ್ಲಾ ಬಡ ಜನರಿಗಾಗಿ ಈ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು.
ಅಸಮಾನತೆಯನ್ನು ಹೋಗಲಾಡಿಸಿ, ಸಮಾಜದ ಪ್ರತಿಯೊಬ್ಬರಿಗೂ ಸಮಾನ ಅವಕಾಶ ಸಿಗುವಂತೆ ಸಮಸಮಾಜವನ್ನು ನಿರ್ಮಾಣ ಮಾಡುವುದೇ ನಮ್ಮ ಸರ್ಕಾರದ ಮೂಲ ಉದ್ದೇಶವಾಗಿದೆ ಎಂದು ತಿಳಿಸಿದರು.
ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಮಾತನಾಡಿ ಸರ್ಕಾರದ ಬಳಿ ಇರುವ ಹಣ ಸರ್ಕಾರದ ಸ್ವಂತದ್ದಲ್ಲ, ಅದು ಜನರು ತೆರಿಗೆ ರೂಪದಲ್ಲಿ ನೀಡಿದ ಹಣ. ಜನರ ತೆರಿಗೆ ಹಣವನ್ನು ಗ್ಯಾರಂಟಿ ಯೋಜನೆಗಳ ಮೂಲಕ ಮರಳಿ ಜನರಿಗೇ ನೀಡುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದು ಹೇಳಿದರರು.
ಇಂದು ದಿನಬಳಕೆ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ. ಸಾಲದ್ದಕ್ಕೆ ಭೀಕರ ಬರಗಾಲವೂ ಆವರಿಸಿದೆ. ಇಂತಹ ಕಷ್ಟದ ಪರಿಸ್ಥಿತಿಯಲ್ಲಿ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಗ್ಯಾರಂಟಿ ಯೋಜನೆಗಳು ಜೀವನಾಡಿಯಾಗಿ ನೆರವಾಗುತ್ತಿವೆ ಎಂದರು.
ದಾಸನೂರು ಗ್ರಾಮದಲ್ಲಿ ರೂ.22.50 ಕೋಟಿ ವೆಚ್ಚದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯನ್ನು ನಿರ್ಮಿಸಿ ಉದ್ಘಾಟಿಸಲಾಗಿದೆ. ವರುಣ ಕ್ಷೇತ್ರದ ಪ್ರತಿಯೊಂದು ಹೋಬಳಿಯಲ್ಲೂ ಬಡ ಹಾಗೂ ಗ್ರಾಮೀಣ ಮಕ್ಕಳ ಅನುಕೂಲಕ್ಕಾಗಿ ಉತ್ತಮ ಗುಣಮಟ್ಟದ ವಸತಿ ಶಾಲೆಗಳನ್ನು ತೆರೆಯಲಾಗುತ್ತಿದೆ ಎಂದು ತಿಳಿಸಿದರು.
ನಂಜನಗೂಡು ವಿಧಾನ ಸಭಾ ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಮಾತನಾಡಿ ಸರ್ಕಾರವು ಚುನಾವಣೆಗೆ ಮುನ್ನ ನೀಡಿದ್ದ ಭರವಸೆಯಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತಂದಿದೆ ಎಂದು ಹೇಳಿದರು.
ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಮೂಲ ಆಶಯ ಹಾಗೂ ‘ನಿರ್ದೇಶಕ ತತ್ವಗಳ ಆಧಾರದ ಮೇಲೆ, ಸಮಾಜದ ಹಿಂದುಳಿದ, ಶೋಷಿತ, ಮಹಿಳೆಯರು ಹಾಗೂ ಕಾರ್ಮಿಕರ ಆರ್ಥಿಕ ಸಬಲೀಕರಣಕ್ಕಾಗಿ ಈ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕರುಗಳಾದ ಡಾ. ಡಿ. ತಿಮಯ್ಯ, ಕೆ.ಶಿವಕುಮಾರ್,ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಅಧ್ಯಕ್ಷರು ಮರಿಸ್ವಾಮಿ, ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷರು ಅನಂತ ಹಾಗೂ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.






