ಮೀಸಲು ಸೌಲಭ್ಯ ಕಲ್ಪಿಸದೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಿದರೇ ಹಿಂದುಳಿದ ವರ್ಗಗಳಿಗೆ ಅನ್ಯಾಯ- ಮಾಜಿ ಸಿಎಂ ಸಿದ‍್ಧರಾಮಯ್ಯ.

ಬೆಂಗಳೂರು,ಮಾರ್ಚ್,31,2022(www.justkannada.in):  ಮೀಸಲು ಸೌಲಭ್ಯ ಕಲ್ಪಿಸದೆ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಿದರೆ ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಹಿಂದುಳಿದ ವರ್ಗಗಳಿಗೆ ಮೀಸಲು ಸೌಲಭ್ಯ ಕಲ್ಪಿಸುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ವಿಧಾನ ಮಂಡಲದ ಉಭಯ ಸದನ ನಾಯಕರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಈಗ ಹಿಂದುಳಿದ ವರ್ಗಗಳಿಗೆ ಮೀಸಲು ಸೌಲಭ್ಯ ಕಗ್ಗಂಟಾಗಿ ಪರಿಣಮಿಸಿದೆ. ಹೀಗಾಗಿ ಮೀಸಲು ಸೌಲಭ್ಯ ಒದಗಿಸುವ ಕುರಿತು ಸರ್ಕಾರ ಗಂಭೀರ ಚಿಂತನೆ ನಡೆಸಬೇಕು. ಕಾನೂನಾತ್ಮಕವಾಗಿ ಪರಿಶೀಲಿಸಬೇಕು ಎಂದರು.

ಮೀಸಲು ಸೌಲಭ್ಯ ಒದಗಿಸುವ ಮುನ್ನ ಸಮೀಕ್ಷೆ ನಡೆಸಬೇಕು ಎಂದು ನ್ಯಾಯಾಲಯ ಹೇಳಿದೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಈಗಾಗಲೇ ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿ ಕುರಿತು ಸಮೀಕ್ಷೆ ನಡೆಸಿ ವರದಿ ಸಲ್ಲಿಸಿದೆ. ಆ ವರದಿಯನ್ನು ಪರಿಗಣಿಸುವ ಸಾಧ್ಯತೆ ಕುರಿತಾಗಿಯೂ ಪರಿಶೀಲನೆ ನಡೆಸಬೇಕು ಎಂದು ಮನವಿ ಮಾಡಿದರು.

ಒಂದು ವೇಳೆ ಇದು ಸಾಧ್ಯವಾಗದಿದ್ದರೆ ಮತ್ತೊಂದು ಆಯೋಗವನ್ನು ರಚನೆ ಮಾಡಿ ಸಮೀಕ್ಷೆ ನಡೆಸುವುದು ಸೂಕ್ತ. ಅಲ್ಲಿಯವರೆಗೆ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬಾರದು. ಇಲ್ಲದಿದ್ದರೆ ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ಸಿಗದಂತೆ ಆಗುತ್ತದೆ. ಆ ವರ್ಗಗಳಿಗೆ ಭಾರಿ ಅನ್ಯಾಯವಾಗುತ್ತದೆ. ಹಿಂದುಳಿದ ವರ್ಗದವರನ್ನು ಸಾಮಾನ್ಯ ವರ್ಗದಲ್ಲಿ ಸೇರಿಸಿ ಚುನಾವಣೆ ನಡೆಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಮೀಸಲು ಪ್ರಮಾಣ ಹೆಚ್ಚಿಸಬೇಕೆಂದ ಬೇಡಿಕೆ ಮುಂದಿಟ್ಟುಕೊಂಡು ವಾಲ್ಮೀಕಿ ಸಮುದಾಯದ ಸ್ವಾಮೀಜಿಯವರು ಕಳೆದ 50 ದಿನಗಳಿಂದ ಧರಣಿ ನಡೆಸುತ್ತಿದ್ದಾರೆ. ಆ ಬೇಡಿಕೆ ಈಡೇರಿಸುವ ಕುರಿತಾಗಿಯೂ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಸಚಿವರಾದ ಗೋವಿಂದ ಕಾರಜೋಳ, ಈಶ್ವರಪ್ಪ, ಮಾಧುಸ್ವಾಮಿ, ಕೋಟಾ ಶ್ರೀನಿವಾಸಪೂಜಾರಿ, ಬೈರತಿ ಬಸವರಾಜ್, ಎಂ.ಟಿ.ಬಿ. ನಾಗರಾಜ್ ಮತ್ತಿತರರು ಸಭೆಯಲ್ಲಿದ್ದರು.

Key words: election -local bodies – reservations-Former CM- Siddhayaramaiah.