ಮೈಸೂರು, ಹಾಸನ ಕೊಡಗು ಸೇರಿ ವಿವಿಧೆಡೆ ನಾಳೆಯಿಂದ ಮೂರು ದಿನ ಭಾರಿ ಮಳೆ ಸಾಧ್ಯತೆ

ಬೆಂಗಳೂರು, ಜೂನ್ 28, 2020 (www.justkannada.in): ಜೂನ್ 29 ರಿಂದ ಜುಲೈ 1ರ ವರೆಗೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರಾವಳಿ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಮೈಸೂರು ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಜುಲೈ 1ರ ವರೆಗೆ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅರಬ್ಬೀ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾದ ಪರಿಣಾಮ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ.

ಮುಂಗಾರು ಚುರುಕಾಗಿ ಇನ್ನೂ ಒಂದು ವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಮಾಹಿತಿ ನೀಡಲಾಗಿದೆ.