ರೈಲು ವಿಳಂಬದಿಂದ ನೀಟ್ ಪರೀಕ್ಷೆಯಿಂದ ವಂಚಿತರಾದವರಿಗೆ ಮೇ 20 ರಂದು ಮತ್ತೆ ಪರೀಕ್ಷೆಗೆ ಅವಕಾಶ

ಬೆಂಗಳೂರು:ಮೇ-7:(www.justkannada.in) ಹಂಪಿ ಎಕ್ಸ್ ಪ್ರೆಸ್ ರೈಲು ವಿಳಂಬದಿಂದಾಗಿ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್‌) ಬರೆಯಲಾಗದೇ ವಂಚಿತರಾಗಿದ್ದ ಕರ್ನಾಟಕದ ವಿದ್ಯಾರ್ಥಿಗಳಿಗೆ ಮೇ 20ರಂದು ಭಾನುವಾರ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.

ಈ ಕುರಿತು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್, ಅವಕಾಶವಂಚಿತ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ಒದಗಿಸುವುದಾಗಿ ಟ್ವೀಟ್ ಮಾಡಿದ್ದರು. ಈ ಹಿನ್ನಲೆಯಲ್ಲಿ ಮೇ.20ರಂದು ಮತ್ತೊಮೆ ನೀಟ್ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ.

ಮರು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಸ್ಪಷ್ಟಪಡಿಸಿದೆ.

ಪರೀಕ್ಷಾ ಕೇಂದ್ರದ ಬದಲಾವಣೆ ಹಾಗೂ ಬೆಂಗಳೂರಿಗೆ ಹಂಪಿ ಎಕ್ಸ್‌ಪ್ರೆಸ್‌ ರೈಲು ಆಗಮನ ವಿಳಂಬವಾದ ಪರಿಣಾಮ 500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯುವ ಅವಕಾಶದಿಂದ ವಂಚಿತರಾಗಿದ್ದರು. ಬೆಂಗಳೂರು, ಮಂಗಳೂರು, ಕಲಬುರಗಿ ಮತ್ತು ಬೆಳಗಾವಿಯ ಕೇಂದ್ರಗಳಲ್ಲಿ ಭಾನುವಾರ ಏಕಕಾಲದಲ್ಲಿ ಪರೀಕ್ಷೆ ನಡೆದಿದ್ದು, ಬೆಂಗಳೂರಿನಲ್ಲಿ ಗರಿಷ್ಠ ಸಮಸ್ಯೆ ಉಂಟಾಗಿತ್ತು. ಉತ್ತರ ಕರ್ನಾಟಕದ ಭಾಗದಿಂದ ಬೆಂಗಳೂರನ್ನು ಕೇಂದ್ರವಾಗಿ ಆಯ್ಕೆ ಮಾಡಿಕೊಂಡಿದ್ದ ನೂರಾರು ಮಂದಿ ಸಕಾಲದಲ್ಲಿ ತಲುಪಲಾಗದೆ ತೊಂದರೆಗೀಡಾಗಿದ್ದರು.

ಈ ಬೆಳವಣಿಗೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸೋಮವಾರ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ರಾಜ್ಯ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌ ಹಾಗೂ ಹಿರಿಯ ಅಧಿಕಾರಿಗಳನ್ನು ಕರೆಸಿಕೊಂಡು ಇಡೀ ಪ್ರಕರಣದ ಬಗ್ಗೆ ಮಾಹಿತಿ ಪಡೆದುಕೊಂಡರು. ರಾಜ್ಯದ ನೂರಾರು ಮಕ್ಕಳ ಭವಿಷ್ಯಕ್ಕೆ ನೆರವಾಗುವ ದೃಷ್ಟಿಯಿಂದ ಮತ್ತೊಮ್ಮೆ ಅವಕಾಶ ಕಲ್ಪಿಸುವಂತೆ ಕೇಂದ್ರ ಮಾನವ ಸಂಪನ್ಮೂಲ ಸಚಿವರಿಗೆ ಸಿಎಂ ಮನವಿ ಮಾಡಿಕೊಂಡಿದ್ದರು. ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರೂ ಈ ಸಂಬಂಧ ಸಹೋದ್ಯೋಗಿ ಜಾವಡೇಕರ್‌ ಅವರಿಗೆ ಮನವಿ ಮಾಡಿ ಪತ್ರ ಬರೆದಿದ್ದರು.

ರೈಲು ವಿಳಂಬದಿಂದ ನೀಟ್ ಪರೀಕ್ಷೆಯಿಂದ ವಂಚಿತರಾದವರಿಗೆ ಮೇ 20 ರಂದು ಮತ್ತೆ ಪರೀಕ್ಷೆಗೆ ಅವಕಾಶ

Karnataka students who missed NEET due to train delay to rewrite exam on May 20