20ಲಕ್ಷ ಕೋಟಿ ಪ್ಯಾಕೇಜ್ ಘೋಷಣೆ ಬೋಗಸ್-  ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ದ ಭ್ರಷ್ಟಾಚಾರದ ಆರೋಪ ಮಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ 

ಮೈಸೂರು,ಮೇ,28,2020(www.justkannada.in): ಕೇಂದ್ರ ಸರ್ಕಾರ ಪ್ರಕಟಿಸಿರುವ 20ಲಕ್ಷ ಕೋಟಿ ಪ್ಯಾಕೇಜ್ ಘೋಷಣೆ ಬೋಗಸ್ ಆಗಿದೆ. ಮಾಸ್ಕ್, ಸ್ಯಾನಿಟೈಸರ್, ಪಿಪಿಇ ಕಿಟ್ ಖರೀದಿ ವಿಚಾರದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಆರೋಪಿಸಿದರು.

ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ  ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡ ನಂತರದ ಪರಿಸ್ಥಿತಿ ನಿಭಾಯಿಸುವಲ್ಲಿ ಕೇಂದ್ರ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿವೆ. ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟಲು ತರಾತುರಿಯಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಯಿತು. ಯಾವುದೇ ಪೂರ್ವಸಿದ್ಧತೆ ಮಾಡಿಕೊಳ್ಳದೇ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ದೇಶಾದ್ಯಂತ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೇಂದ್ರ ಸರ್ಕಾರ ಪ್ರಕಟಿಸಿರುವ 20ಲಕ್ಷ ಕೋಟಿ ಪ್ಯಾಕೇಜ್ ಘೋಷಣೆ ಬೋಗಸ್ ಆಗಿದೆ. ಮಾಸ್ಕ್, ಸ್ಯಾನಿಟೈಸರ್, ಪಿಪಿಇ ಕಿಟ್ ಖರೀದಿ ವಿಚಾರದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ. ಸಂಕಷ್ಟದ ಸಮಯ ಎಂದುಕೊಂಡು ಇಷ್ಟು ದಿನ ಸುಮ್ಮನಿದ್ದೆವು. ಈಗಾಗಲೇ 60 ದಿನಗಳು ಕಳೆದಿವೆ. ಇನ್ನು ಮುಂದೆ ಸುಮ್ಮನೆ ಇರುವುದಿಲ್ಲ. ಕೇಂದ್ರ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ಸಂಘಟಿತ ಹೋರಾಟ ನಡೆಸಲಿದೆ ಎಂದು ತಿಳಿಸಿದರು.

ಬೆಂಗಳೂರಿನ ಯಲಹಂಕ ಫ್ಲೈ ಓವರ್ ಗೆ ವೀರ ಸಾವರ್ಕರ್  ಹೆಸರಿಡಲು ವಿರೋಧ ವ್ಯಕ್ತವಾಗಿರುವ ವಿಚಾರ ಕುರಿತು  ಪ್ರತಿಕ್ರಿಯಿಸಿದ ಸಲೀಂ ಅಹಮದ್, ಸದ್ಯಕ್ಕೆ ಫ್ಲೈ ಓವರ್ ಹೆಸರಿಡುವ ವಿಚಾರ ಮುಂದಕ್ಕೆ ಹೋಗಿದೆ. ಆ ವಿಚಾರದ ಬಗ್ಗೆ ಈಗ ಮಾತನಾಡುವುದಿಲ್ಲ ಎಂದು ತಿಳಿಸಿದರು.

ಹಾಗೆಯೇ ಮುಂಬರುವ ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಪರಸ್ಪರ ಕೈ ಜೋಡಿಸುವ ವಿಚಾರ ಕುರಿತು ಮಾತನಾಡಿದ ಸಲೀಂ ಅಹಮದ್ ಈ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದರು.

Key words: KPCC – Salim Ahmed –myosre-accused -corruption – central – state government.