ವೈದ್ಯ ವಿದ್ಯಾರ್ಥಿಗಳ ಶಿಷ್ಯವೇತನ ಪರಿಷ್ಕರಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ. ಯಾರ್ಯಾರಿಗೆ ಎಷ್ಟೆಷ್ಟು ಗೊತ್ತ..?

 

ಬೆಂಗಳೂರು – ಮೇ 18, 2020: ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ನೀಡಿದ್ದ ಭರವಸೆಯಂತೆ ವೈದ್ಯ ವಿದ್ಯಾರ್ಥಿಗಳ ಶಿಷ್ಯವೇತನವನ್ನು ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರೊಂದಿಗೆ ಕಳೆದ ಐದು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಪರಿಷ್ಕರಣೆ ಪ್ರಸ್ತಾವಕ್ಕೆ ಕೊನೆಗೂ ಮುಕ್ತಿ ದೊರಕಿದಂತಾಗಿದೆ.

ಕೋವಿಡ್ ಸಂಕಷ್ಟದಿಂದಾಗಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನಿಂದಾಗಿ ಹಲವಾರು ರಾಜ್ಯಗಳು ವೈದ್ಯರ ವೇತನ ಕಡಿತಗೊಳಿಸಿರುವ ಸಂದರ್ಭದಲ್ಲಿ ವೈದ್ಯರುಗಳ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಕರ್ನಾಟಕ ಸರ್ಕಾರ ವೇತನ ಪರಿಷ್ಕರಣೆ ಮಾಡಿರುವುದಕ್ಕೆ ವೈದ್ಯ ವೃಂದದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ಕಳೆದ ಫೆಬ್ರವರಿ 26 ರಂದು “ಕರ್ನಾಟಕ ಅಸೋಸಿಯೇಷನ್ ಆಫ್ ರೆಸಿಡೆಂಟ್ ಡಾಕ್ಟರ್ಸ್’ ಸಂಘಟನೆ ಪ್ರತಿನಿಧಿಗಳ ನಿಯೋಗ ಸಚಿವ ಸುಧಾಕರ್ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿ ಸಲ್ಲಿಸಿತ್ತು. ಮನವಿ ಸ್ವೀಕರಿಸಿದ್ದ ಸಚಿವ ಸುಧಾಕರ್ ಅವರು, “ಮೂರ್ನಾಲ್ಕು ತಿಂಗಳಲ್ಲಿ ಈ ಕುರಿತು ಖಚಿತ ತೀರ್ಮಾನ ಕೈಗೊಳ್ಳುತ್ತೇನೆ” ಎಂದು ಭರವಸೆ ನೀಡಿದ್ದರು. ಬಳಿಕ ಇಲಾಖೆಯ ಅಧಿಕಾರಿಗಳಿಗೆ ಈ ಕುರಿತು ಪ್ರಸ್ತಾವನೆ ಸಿದ್ಧಪಡಿಸುವಂತೆ ಸೂಚನೆ ನೀಡಿದ್ದರು.

medical-students-sty fund-increased-Karnataka-government

ಕೊರೋನಾ ಸೋಂಕಿತ ಮಾಧ್ಯಮ ಪ್ರತಿನಿಧಿಯೊಬ್ಬರ ಸಂಪರ್ಕದಿಂದ ಕ್ವಾರಂಟೈನ್ ನಲ್ಲಿದ್ದ ಸಂದರ್ಭದಲ್ಲಿ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕುಲಪತಿ ಡಾ. ಸಚ್ಚಿದಾನಂದ ಮತ್ತು ಇಲಾಖೆ ನಿರ್ದೇಶಕ ಡಾ. ಗಿರೀಶ್ ಅವರೊಂದಿಗೆ ವಿಡಿಯೋ ಸಂವಾದ ನಡೆಸಿ ಶಿಷ್ಯ ವೇತನ ಪ್ರಸ್ತಾವನೆಯನ್ನು ಹಣಕಾಸು ಇಲಾಖೆಗೆ ಕಳುಹಿಸಿಕೊಡುವಂತೆ ಸಚಿವರು ಸೂಚಿಸಿದ್ದರು. ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ ಅವರನ್ನು ಕ್ವಾರಂಟೈನ್ ಬಳಿಕ ಭೇಟಿ ಮಾಡಿ ಹಣಕಾಸು ಇಲಾಖೆಯ ಸಮ್ಮತಿ ದೊರಕಿಸುವಂತೆ ಮನವೊಲಿಸುವಲ್ಲಿ ಡಾ.ಸುಧಾಕರ್ ಯಶಸ್ವಿಯಾದರು.

ಪರಿಷ್ಕೃತಗೊಂಡಿರುವ ಶಿಷ್ಯವೇತನದ ಅನ್ವಯ ಗೃಹ ವೈದ್ಯರಿಗೆ – 30000, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಮೊದಲ ವರ್ಷ – 45000, ಎರಡನೇ ವರ್ಷ – 50000, ಮೂರನೇ ವರ್ಷ- 55000, ಸೂಪರ್ ಸ್ಪೆಷಾಲಿಟಿ ಮೊದಲ ವರ್ಷದ ವಿದ್ಯಾರ್ಥಿಗಳಿಗೆ – 55000, ಎರಡನೇ ವರ್ಷ – 60000, ಮೂರನೇ ವರ್ಷ- 65000, ಸೀನಿಯರ್ ರೆಸಿಡೆಂಟ್ಸ್ (ಕಡ್ಡಾಯ ಸರ್ಕಾರಿ ಸೇವೆ) – 60000 ಮತ್ತು ಫೆಲೋಶಿಫ್ ವಿದ್ಯಾರ್ಥಿಗಳಿಗೆ – 60000 ನಿಗದಿಪಡಿಸಿ ಆದೇಶ ಹೊರಡಿಸಲಾಗಿದೆ. ಸರ್ಕಾರದ ಈ ನಿರ್ಧಾರದಿಂದ ಆರು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ಕೋವಿಡ್ ವಿರುದ್ಧ ಸರ್ಕಾರ ನಡೆಸಿರುವ ಹೋರಾಟದಲ್ಲಿ ವೈದ್ಯ ವಿದ್ಯಾರ್ಥಿಗಳ ಕೊಡುಗೆ ಮಹತ್ತರವಾಗಿದೆ. ಅಧಿಸೂಚಿತ ಕೋವಿಡ್ ಆಸ್ಪತ್ರೆಗಳಲ್ಲಿ ಮುಂಚೂಣಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇವರಿಗೆ ಇದೇ ಸಂದರ್ಭದಲ್ಲಿ ಶಿಷ್ಯ ವೇತನ ಪರಿಷ್ಕರಿಸಿದರೆ ಅವರನ್ನು ಪ್ರೋತ್ಸಾಹಿಸಿದಂತಾಗುತ್ತದೆ ಹಾಗೂ ಇನ್ನೂ ಹೆಚ್ಚು ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸುವಂತೆ ಅವರನ್ನು ಪ್ರೇರೇಪಿಸಿದಂತಾಗುತ್ತದೆ ಎಂದು ಸಚಿವ ಸುಧಾಕರ್ ಹೇಳಿದ್ದಾರೆ.

 

key words : medical-students-sty fund-increased-Karnataka-government