ಕೋವಿಡ್ -19 ಪರಿಸ್ಥಿತಿ ಅವಲೋಕಿಸಿದ ಸಚಿವ ಎಸ್.ಟಿ.ಸೋಮಶೇಖರ್: ಹೆಚ್ಚಿನ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ…

ಮೈಸೂರು,ಸೆಪ್ಟೆಂಬರ್.5,2020(www.justkannada.in):  ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಶನಿವಾರ ಮೈಸೂರಿನಲ್ಲಿ ಕೋವಿಡ್ ಪರಿಸ್ಥಿತಿ ಅವಲೋಕಿಸಿ ಹೆಚ್ಚಿನ ನಿಗಾವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.jk-logo-justkannada-logo

ನೂತನ ಜಿಲ್ಲಾ ಕಚೇರಿಗಳ ಸಂಕಿರಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಸಚಿವ ಎಸ್.ಟಿ ಸೋಮಶೇಖರ್,  ಕೋವಿಡ್ ಆಸ್ಪತ್ರೆಗಳಲ್ಲಿ ಸ್ವಚ್ಛತೆ ಸಮಸ್ಯೆ ಬಗ್ಗೆ ದೂರುಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಕೋವಿಡ್ ಪತ್ತೆಯಾಗಿ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವವರ ಬಗ್ಗೆ ಹೆಚ್ಚಿನ ನಿಗಾವಹಿಸಬೇಕು. ಯಾವುದೇ ತರಹದ ದೂರುಗಳಿಗೆ ಆಸ್ಪದ ನೀಡದಂತೆ ಕೆಲಸ ಮಾಡಬೇಕು ಎಂದರು.

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಸರ್ಕಾರದ ಮಾರ್ಗಸೂಚಿಯಂತೆ ನೀಡಬೇಕಾದ ಹಾಸಿಗೆಗಳನ್ನು ನೀಡಲು ನಿರಾಕರಿಸಿದಲ್ಲಿ ಕಾನೂನು ಕ್ರಮ ಕೈಗೊಳ್ಳಲು ಹಿಂಜರಿಯಬಾರದು. ಯಾವೊಬ್ಬ ರೋಗಿಯು ಚಿಕಿತ್ಸೆಯಿಂದ ವಂಚಿತರಾಗಬಾರದು ಎಂದು ಸಚಿವ ಎಸ್.ಟಿ ಸೋಮಶೇಖರ್ ಸೂಚನೆ ನೀಡಿದರು.

ದಸರಾ ಆಚರಣೆ ಸಂಬಂಧ ಸೆಪ್ಟೆಂಬರ್ 8 ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ದಸರಾ ಉನ್ನತ ಮಟ್ಟದ ಸಮಿತಿ ಸಭೆ ಆಯೋಜಿಸಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದರು.

ಡ್ರಗ್ಸ್ ದಂಧೆಯನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಂತಹ ಪ್ರಕರಣ ಕಂಡುಬಂದರೆ ಸಂಬಂಧಪಟ್ಟ ಎ.ಸಿ.ಪಿ ಹಾಗೂ ಡಿ.ವೈ.ಎಸ್.ಪಿ ಮುಂತಾದವರನ್ನೇ ಜವಾಬ್ದಾರರನ್ನಾಗಿ ಮಾಡುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಮೂಡಾ ಅಧ್ಯಕ್ಷರಾದ ಎಚ್.ವಿ.ರಾಜೀವ್, ಜಿಲ್ಲಾಧಿಕಾರಿ ಬಿ.ಶರತ್, ಪೊಲೀಸ್ ಉಪ ಆಯುಕ್ತರಾದ ಗೀತಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Key words: mysore-Minister- ST Somashekhar – covid-19- situation.