ಎಸ್ ಎಸ್ ಎಲ್ ಸಿ ಪರೀಕ್ಷೆ ಪೂರ್ವ ಸಿದ್ದತೆ ಬಗ್ಗೆ ಮಾಹಿತಿ ನೀಡಿದ ಸಚಿವ ಸುರೇಶ್ ಕುಮಾರ್

kannada t-shirts

ಮೈಸೂರು,ಜುಲೈ,5,2021(www.justkannada.in): ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವುದನ್ನು ರಾಜ್ಯ ಸರ್ಕಾರ ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ.jk

ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ಕಳೆದ ಬಾರಿಯೂ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಅತ್ಯಂತ ಯಶಸ್ವಿಯಾಗಿ ನಡೆಸಿದ್ದೇವೆ. ಅದೇ ಮಾದರಿಯಲ್ಲಿ ಈ ಬಾರಿಯೂ ಪರೀಕ್ಷೆ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತದೆ. ಪರೀಕ್ಷೆ ನಡೆಸುವುದನ್ನು ರಾಜ್ಯ ಸರ್ಕಾರ ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿಲ್ಲ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಸಲುವಾಗಿ ಪರೀಕ್ಷೆ ನಡೆಸಲಾಗುತ್ತಿದೆ. ಎಸ್ ಎಸ್ ಎಲ್ ಸಿ ನಂತರ ಪಿಯುಸಿಯಲ್ಲಿ ಯಾವ ವಿಷಯವನ್ನು ಆಯ್ಕೆ ಮಾಡಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಪರೀಕ್ಷೆ ನಡೆಸಲಾಗುತ್ತಿದೆ ಎಂದು ಸ್ಪಷ್ಟನೆ ನೀಡಿದರು.

ಪರೀಕ್ಷೆ ನಡೆಸುವ ಸಂಬಂಧ ಈ ವಾರವೇ ಎಲ್ಲಾ ಜಿಲ್ಲೆಗಳ ಡಿಡಿಪಿಐ ಮತ್ತು ಬಿಇಒ ಗಳ ಸಭೆ ನಡೆಸಲಾಗುವುದು. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ಮೂಲಕ ವಿದ್ಯಾರ್ಥಿಗಳಲ್ಲಿ ಇರುವ ಗೊಂದಲ, ಅನುಮಾನಗಳನ್ನು ಹೋಗಲಾಡಿಸಲಾಗುವುದು. ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಈಗಾಗಲೇ ಎರಡು ಮಾದರಿ ಪ್ರಶ್ನೆ ಪತ್ರಿಕೆಗಳನ್ನು ರವಾನಿಸಲಾಗಿದೆ. ಈ ಮೂಲಕ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಗೊಂದಲವಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದರು.

ರಾಜ್ಯದಲ್ಲಿ 8 ಲಕ್ಷ 76 ಸಾವಿರದ 581 ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲಿದ್ದಾರೆ. ಇಷ್ಟೊಂದು ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದು ಸವಾಲಿನ ಕೆಲಸವಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಕಳೆದ ಬಾರಿಯಂತೆ ಸುಸೂತ್ರವಾಗಿ ಪರೀಕ್ಷೆ ನಡೆಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದರು.

ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿ ಕೇವಲ ಎಸ್ ಎಸ್ ಎಲ್ ಸಿ ಪರೀಕ್ಷೆಯ ಪೂರ್ವ ಸಿದ್ದತೆಯ ಬಗ್ಗೆ ಮಾತ್ರ ಸುರೇಶ್ ಕುಮಾರ್ ಸಮರ್ಪಕ ಉತ್ತರ ನೀಡಿದರು.

ಎಚ್ ವಿಶ್ವನಾಥ್ ನೀಡಿರುವ ಹೇಳಿಕೆ ಬಗ್ಗೆ ಕೇಳುತ್ತಿದ್ದಂತೆ ಸಿಡಿಮಿಡಿಗೊಂಡು ಯಾವುದೇ ಪ್ರತಿಕ್ರಿಯೆ ನೀಡದೇ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಥಳದಿಂದ ನಿರ್ಗಮಿಸಿದರು.

Key words: mysore-Minister -Suresh Kumar- preparation – SSLC-examination

website developers in mysore