ಕೋವಿಡ್ ಚಿಕಿತ್ಸೆಗೆ  4500 ಬೆಡ್ ನೀಡಲು ಖಾಸಗಿ ವೈದ್ಯಕೀಯ ಕಾಲೇಜುಗಳಿಂದ ಒಪ್ಪಿಗೆ-ಸಭೆ ಬಳಿಕ ಸಿಎಂ ಬಿಎಸ್ ವೈ ಮಾಹಿತಿ..

ಬೆಂಗಳೂರು,ಜೂ,30,2020(www.justkannada.in):  ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೊರೋನಾ ನಿಯಂತ್ರಣಕ್ಕೆ ಸರ್ಕಾರ ಶಕ್ತಿಮೀರಿ ಪ್ರಯತ್ನಿಸುತ್ತಿದೆ. ಈ ನಡುವೆ ಸೋಂಕಿತರ ಚಿಕಿತ್ಸೆಗೆ  4500 ಬೆಡ್ ಗಳನ್ನ ನೀಡಲು ಖಾಸಗಿ ವೈದ್ಯಕೀಯ ಕಾಲೇಜುಗಳು ಒಪ್ಪಿಗೆ ನೀಡಿವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆ, ಸೋಂಕಿತರಿಗೆ ಚಿಕತ್ಸೆ ಸಂಬಂಧ ಖಾಸಗಿ ವೈದ್ಯಕೀಯ ಕಾಲೇಜು ಮುಖ್ಯಸ್ಥರ ಜತೆ ಸಿಎಂ ಬಿಎಸ್ ಯಡಿಯೂರಪ್ಪ ಸಭೆ ನಡೆಸಿ ಚರ್ಚಿಸಿದರು. ಈ ವೇಳೆ ಸೋಂಕಿತರ  ಚಿಕಿತ್ಸೆಗಾಗಿ 5ಸಾವಿರ ಬೆಡ್ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದರು ಎನ್ನಲಾಗಿದೆ.private-medical-colleges-4500-bed-corona-treatment-cm-bs-yeddyurappa

ಸಭೆ ಬಳಿಕ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಬೆಂಗಳೂರಿನಲ್ಲಿ ಹನ್ನೊಂದು ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳಿದ್ದು, ಈ ಪೈಕಿ ಇಂದಿನ ಸಭೆಯಲ್ಲಿ ಎಲ್ಲ ಕಾಲೇಜುಗಳ ಮುಖ್ಯಸ್ಥರು, ಮಾಲೀಕರು ಭಾಗವಹಿಸಿದ್ದರು. ಸಭೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಈ ಆಸ್ಪತ್ರೆಗಳಲ್ಲಿ ಶೇ.50 ರಷ್ಟು ಅಂದರೆ 4500 ಬೆಡ್ ಗಳನ್ನು ನೀಡಲು ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳ ಮುಖ್ಯಸ್ಥರು ಒಪ್ಪಿಗೆ ನೀಡಿದ್ದಾರೆ. ಜತೆಗೆ ಎಲ್ಲರೂ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.

ಹಾಗೆಯೇ ಐಸಿಯು, ಪರಿಣಿತರು, ವೈದ್ಯರು, ಅರೆವೈದ್ಯಕೀಯ ಸಿಬ್ಬಂದಿಯನ್ನು ಒದಗಿಸಿಕೊಡುವುದಾಗಿ ಭರವಸೆ ಕೊಟ್ಟಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ಕೊರೊನಾ ಸೋಂಕಿತರಿಗೆ ಇನ್ನು ಉತ್ತಮ ಚಿಕಿತ್ಸೆ ಸಿಗಲಿದೆ. ಖಾಸಗಿ ವೈದ್ಯಕೀಯ ಸಿಬ್ಬಂದಿಗೆ  ವಿಮೆ ನೀಡಲಾಗುತ್ತದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದಿನಾಂಕ 30-6-2020 ರಂದು ನಡೆಸಿದ ಸಭೆಯ ಮುಖ್ಯಾಂಶಗಳು:

· ಬೆಂಗಳೂರಿನಲ್ಲಿ ಎರಡು ಸರ್ಕಾರಿ ಸಂಸ್ಥೆಗಳಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಪ್ರಸ್ತುತ ನಗರದ 11 ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ 2200 ಹಾಸಿಗೆಗಳನ್ನು ಅಧಿಸೂಚಿಸಲಾಗಿದೆ.

· ಆದರೆ ಪ್ರಸ್ತುತ ವರದಿಯಾಗುತ್ತಿರುವ ಪ್ರಕರಣಗಳನ್ನು ಗಮನಿಸಿದರೆ, 4500 ಹಾಸಿಗೆಗಳನ್ನು ಖಾಸಗಿ ಕಾಲೇಜುಗಳಿಂದ ಸರ್ಕಾರ ನಿರೀಕ್ಷಿಸುತ್ತಿದೆ.

· ಕಳೆದ ನಾಲ್ಕು ತಿಂಗಳಿಂದ ಹತ್ತು ವೈದ್ಯಕೀಯ ಕಾಲೇಜುಗಳು ಹೊರತು ಪಡಿಸಿ, ಇತರ ಎಲ್ಲ ಕಾಲೇಜುಗಳು ಪ್ರಯೋಗಾಲಯ ವ್ಯವಸ್ಥೆ ಮಾಡಿವೆ.

· ಸರ್ಕಾರಿ ಕಾಲೇಜುಗಳಲ್ಲಿ 2000 ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 4500 ಸೇರಿದಂತೆ ಸುಮಾರು 6500 ಹಾಸಿಗೆಗಳು ಬೆಂಗಳೂರಿನ ವೈದ್ಯಕೀಯ ಕಾಲೇಜುಗಳಲ್ಲಿಯೇ ಲಭ್ಯವಾಗುತ್ತಿವೆ. ಇದಕ್ಕೆ ಖಾಸಗಿ ವೈದ್ಯಕೀಯ ಕಾಲೇಜುಗಳು ಸಹಕರಿಸುವಂತೆ ಮನವಿ ಮಾಡಿದರು.

· ವೈದ್ಯಕೀಯ ಕಾಲೇಜುಗಳು ಸರ್ಕಾರದೊಂದಿಗೆ ಕೈಜೋಡಿಸಿ, ಕೋವಿಡ್ ಚಿಕಿತ್ಸೆಗೆ ಸಹಕರಿಸುವ ಭರವಸೆಯನ್ನು ನೀಡಿದರು. ಇದಕ್ಕೆ ಸಿದ್ಧತೆಗಳು ಮಾಡಿಕೊಳ್ಳಬೇಕಾಗಿರುವುದರಿಂದ ಹಂತ ಹಂತವಾಗಿ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು.

· ಕೋವಿಡ್ ಚಿಕಿತ್ಸೆ ನೀಡುವ ಖಾಸಗಿ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗೆ ಕೂಡ ವಿಮಾ ಸೌಲಭ್ಯ ಒದಗಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

· ಕೋವಿಡ್ ರೋಗಿಗಳಿಗೆ ಹಾಸಿಗೆ ಹಂಚಿಕೆ ಕುರಿತಂತೆ ಕೇಂದ್ರೀಕೃತ ವ್ಯವಸ್ಥೆಯನ್ನು ಈಗಾಗಲೇ ಬಿಬಿಎಂಪಿ ಯಲ್ಲಿ ಮಾಡಲಾಗಿದ್ದು, ಎರಡು ಮೂರು ದಿನಗಳಲ್ಲಿ ಪೂರ್ಣಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿದೆ. ಕೋವಿಡ್ ಚಿಕಿತ್ಸೆ ನೀಡುವ ಎಲ್ಲ ಆಸ್ಪತ್ರೆಗಳನ್ನು ಈ ವ್ಯವಸ್ಥೆಯ ವ್ಯಾಪ್ತಿಗೆ ತರಲಾಗುವುದು ಎಂದು ಸ್ಪಷ್ಟಪಡಿಸಿದರು.

· ಖಾಸಗಿಯವರೊಂದಿಗೆ ಸಮನ್ವಯಕ್ಕೆ ಸಮಿತಿ ರಚನೆ ಮಾಡಲಾಗುವುದು.

· ಇದಲ್ಲದೆ ಟೆಲಿಮೆಡಿಸಿನ್ ಮೂಲಕ ಚಿಕಿತ್ಸೆ ನೀಡಲು ಸಹ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

· ಇದಲ್ಲದೆ ಕೋವಿಡ್ ಕೇರ್ ಸೆಂಟರ್ ಗಳಿಗೆ ಅಗತ್ಯ ಸಿಬ್ಬಂದಿ ಒದಗಿಸುವಂತೆ ಮನವಿ ಮಮಾಡಿದರು.

· ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಕಂದಾಯ ಸಚಿವ ಆರ್. ಅಶೋಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Private Medical -Colleges – 4500 Bed –corona Treatment-CM BS yeddyurappa