ಮಳೆ ಹಾನಿ: ಪರಿಹಾರ ಮತ್ತು ಪುನರ್ವಸತಿ ಕಾರ್ಯಾಚರಣೆಗೆ 200 ಕೋಟಿ ರೂ. ಬಿಡುಗಡೆ

ಬೆಂಗಳೂರು, ಆಗಸ್ಟ್ 07, 2022 (www.justkannada.in): ಮಳೆ ಹಾನಿ ಸಂಬಂಧ ಪರಿಹಾರ ಮತ್ತು ಪುನರ್ವಸತಿ ಕಾರ್ಯಾಚರಣೆ ಕೈಗೊಳ್ಳಲು ಸರ್ಕಾರ 200 ಕೋಟಿ ರೂ. ಬಿಡುಗಡೆ ಮಾಡಿದೆ.

ಈ ಕುರಿತು ಮಾಹಿತಿ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಎರಡು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತುಕಡಿಗಳ ರಚನೆಗೆ ಸೂಚನೆ ನೀಡಿದ್ದಾರೆ.

ಜೂನ್ 1 ರಿಂದ ಆಗಸ್ಟ್ 6 ರವರೆಗೆ ಎಡೆಬಿಡದೆ ಸುರಿದ ಮಳೆಯಿಂದಾಗಿ ರಾಜ್ಯದಲ್ಲಿ ಈವರೆಗೆ 70 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ಅವಧಿಯಲ್ಲಿ ಒಟ್ಟು 507 ಜಾನುವಾರುಗಳ ನಾಪತ್ತೆಯಾಗಿವೆ.

ಜಿಲ್ಲಾಧಿಕಾರಿಗಳು ರಕ್ಷಣಾ ತಂಡಗಳೊಂದಿಗೆ ನಿರಂತರ ಸಂಪರ್ಕವನ್ನು ಇಟ್ಟುಕೊಂಡು ತಕ್ಷಣ ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

ಪರಿಹಾರ ಮತ್ತು ಪುನರ್ವಸತಿ ಕಾರ್ಯಾಚರಣೆಗೆ ಹಣದ ಕೊರತೆ ಇಲ್ಲ ಎಂದ ಮುಖ್ಯಮಂತ್ರಿಗಳು, ಈಗಾಗಲೇ 21 ಜಿಲ್ಲೆಗಳಿಗೆ 200 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.