ಕೊರೊನಾ ಮೂರನೇ ಅಲೆ ಎದುರಿಸಲು ಸಿದ್ದತೆ: ಶಶಿಕಲಾ ಜೊಲ್ಲೆ

ರಾಯಚೂರು: ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದ್ದು, ಮೂರನೇ ಅಲೆಯಲ್ಲಿ ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ ಎನ್ನುವ ಕಾರಣಕ್ಕೆ ಮಕ್ಕಳ ಆರೋಗ್ಯ ರಕ್ಷಣೆಗೆ ಹೆಚ್ಚು ಒತ್ತು ನೀಡಲಾಗುತ್ತದೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆಯೂ ಆಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆಯವರು ತಿಳಿಸಿದರು.
ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, ಕೊರೊನಾ ಮೂರನೇ ಅಲೆ ನಿಯಂತ್ರಿಸಲು ಸಿದ್ದತೆ ಮಾಡುವ ಕಾರಣಕ್ಕೆ ಕಲ್ಯಾಣ ಕರ್ನಾಟಕ ಭಾಗದ ಆರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದೇನೆ. ಮೂರನೇ ಅಲೆಯಲ್ಲಿ ಏನೆಲ್ಲ ಕ್ರಮ ಕೈಗೊಳ್ಳಬೇಕು ಎಂಬ ಕುರಿತು ತಜ್ಞರ ಜತೆ ಚರ್ಚಿಸಲಾಗುವುದು. ನಮ್ಮ ಇಲಾಖೆ ಈಗಾಗಲೇ ಆಕ್ಸನ್ ಪ್ಲ್ಯಾನ್ ಸಿದ್ದಪಡಿಸಿಕೊಂಡಿದೆ. ಆರೋಗ್ಯ ಇಲಾಖೆ, ಗ್ರಾಮೀಣಾಭಿವೃದ್ದಿ, ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಮೂರನೆ ಅಲೆ ನಿಯಂತ್ರಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದೆ. ಮನೆಯಲ್ಲಿ ತಂದೆ.ತಾಯಿಗೆ ಕೊರೊನಾ ಬಂದರೆ ಮಕ್ಕಳನ್ನು ನೋಡಿಕೊಳ್ಳುವುದು ಹಾಗೂ ಮಕ್ಕಳಿಗೆ ಕೊರೊನಾ ಸೋಂಕು ತಗುಲಿದರೆ ಅವರಿಗೆ ಪ್ರತ್ಯೇಕ ಕೊವಿಡ್ ಕೇರ್ ಸೆಂಟರ್ ಮಾಡಲಾಗುವುದು. 10 ವರ್ಷದ ಒಳಗಿನ ಮಕ್ಕಳಿಗೆ ಕೊರೊನಾ ಬಂದರೆ, ಅವರೊಂದಿಗೆ ತಾಯಿಯೂ ಇರಲು ಅವಕಾಶ ಕಲ್ಪಿಸಲು ವ್ಯವಸ್ಥೆ ಮಾಡಲಾವುದು ಎಂದು ತಿಳಿಸಿದರು.
ಮಕ್ಕಳಿಗೆ ಜಿಲ್ಲಾಸ್ಪತ್ರೆ, ರಿಮ್ಸ್, ಸಮುದಾಯ ಭವನದಲ್ಲಿ ಆರಂಭಿಸಿರುವ ಕೊವಿಡ್ ಕೇರ್ ಸೆಂಟರ್ ಗಳು ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಮಕ್ಕಳಿಗೆ ಶೇ 10 ರಷ್ಟು ಹಾಸಿಗೆಗಳನ್ನು ಮೀಸಲಿಡಲು ತೀರ್ಮಾನಿಸಲಾಗಿದೆ. ಖಾಸಗಿ ಆಸ್ಪತ್ರೆಗಳ ಮಕ್ಕಳ ತಜ್ಞರ ಜೊತೆ ಈಗಾಗಲೇ ಜಿಲ್ಲಾಧಿಕಾರಿಗಳು ಸಭೆ ನಡೆಸಿದ್ದಾರೆ. ಅವರೂ ಸಹಕಾರ ನೀಡುವ ಭರವಸೆ ನೀಡಿದ್ದಾರೆ. ಜಿಲ್ಲೆಯಲ್ಲಿ ಮಕ್ಕಳಿಗಾಗಿ ಸುಮಾರು 600 ಬೆಡ್ ಗಳನ್ನು ಸಿದ್ಧಮಾಡಿ ಇಟ್ಟುಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.
ಮಕ್ಕಳಿಗೆ ಬೇಕಾಗುವ ಐಸಿಯು, ಪಿಡಿಯಾಟ್ರಿಕ್ ವೆಂಟಿಲೇಟರ್, ಔಷಧ ಎಲ್ಲದರ ಬಗ್ಗೆಯೂ ಜಿಲ್ಲಾಡಳಿತ ಪಟ್ಟಿ ಮಾಡಿ ಆರೋಗ್ಯ ಇಲಾಖೆಗೆ ಕಳುಹಿಸಿ ಕೊಟ್ಟಿದೆ. ರಿಮ್ಸ್ ನಲ್ಲಿ 10 ಜನ, ಜಿಲ್ಲಾಸ್ಪತ್ರೆಯಲ್ಲಿ 4 ಜನ ಮಕ್ಕಳ ತಜ್ಞರಿದ್ದಾರೆ. ಇನ್ನೂ ಆರು ಜನ ಮಕ್ಕಳ ತಜ್ಞರ ನೇಮಕ ಮಾಡಲಾಗಿದ್ದು ಶೀಘ್ರವೇ ಅವರೂ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಇನ್ನೂ ವೈದ್ಯರ ಕೊರತೆ ಇದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವರ ಜೊತೆ ಚರ್ಚಿಸಿ ಜಿಲ್ಲೆಗೆ ಹೆಚ್ಚಿನ ವೈದ್ಯರ ನೀಡುವಂತೆ ಮನವಿ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.
ರಾಯಚೂರು ಜಿಲ್ಲೆಯಲ್ಲಿ ನಾಲ್ವರು ಮಕ್ಕಳಿಗೆ ಕೊವಿಡ್ ನಂತರ ಎಂ ಐಎಸ್ ಎನ್ನುವ ಬಹು ಅಂಗಾಂಗ ವೈಫಲ್ಯ ಉಂಟು ಮಾಡುವ ಖಾಯಿಲೆ ಬಂದಿದೆ ಎಂಬ ವರದಿ ಇದೆ. ಆ ಮಕ್ಕಳಿಗೆ ಚಿಕಿತ್ಸೆ ನೀಡಲಾಗಿದೆ. ಅಲ್ಲದೆ ಮೂರನೇ ಅಲೆಯಲ್ಲಿ ಮಕ್ಕಳಿಗೆ ಬೇಕಾಗುವ ಔಷಧದ ಪಟ್ಟಿಯನ್ನು ಜಿಲ್ಲಾಡಳಿತ ಸರ್ಕಾರಕ್ಕೆ ಕಳುಹಿಸಿದೆ. ಅಗತ್ಯ ಔಷಧಿಯನ್ನಿ ಆರೋಗ್ಯ ಇಲಾಖೆ ಮೂಲಕ ಒದಗಿಸುವ ಕೆಲಸವನ್ನು ಮಾಡಲಾಗುವುದು ಎಂದು ಸಚಿವರು ತಿಳಿಸಿದರು.