ನಂದಿಬೆಟ್ಟದಲ್ಲಿ ಶೀಘ್ರವೇ ರೋಪ್ ವೇ- ಸಚಿವ ಆನಂದ್ ಸಿಂಗ್.

ಚಿಕ್ಕಬಳ್ಳಾಪುರ, ಫೆಬ್ರವರಿ,2,2022(www.justkannada.in): ನಂದಿಬೆಟ್ಟದಲ್ಲಿ ತಾಂತ್ರಿಕ ಕಾರಣಗಳಿಂದಾಗಿ ರೋಪ್ ವೇ ಯೋಜನೆ ನೆನೆಗುದಿಗೆ ಬಿದ್ದಿದ್ದು, ಶೀಘ್ರವೇ ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು ಎಂದು ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಖಾತೆ ಸಚಿವರಾದ ಆನಂದ್ ಸಿಂಗ್ ಹೇಳಿದರು.

ಬುಧವಾರ ನಂದಿಬೆಟ್ಟಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಆನಂದ್ ಸಿಂಗ್, ರೋಪ್ ವೇ ಯೋಜನೆಗೆ ಸಂಬಂಧಿಸಿದಂತೆ ತಿಂಗಳಾಂತ್ಯಕ್ಕೆ ಟೆಂಡರ್ ಆಹ್ವಾನಿಸಲಾಗುವುದು. ಪರಿಸರಕ್ಕೆ ಯಾವುದೇ ಧಕ್ಕೆಯಾಗದಂತೆ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.

ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿರುವ ನಂದಿ ಬೆಟ್ಟದ ಪ್ರಕೃತಿ ಸೌಂದರ್ಯ ಸವಿಯಲು ಸಾವಿರಾರು ಮಂದಿ ಪ್ರವಾಸಿಗರು ಪ್ರತಿ ನಿತ್ಯ ಭೇಟಿ ಕೊಡುತ್ತಾರೆ. ಇಲ್ಲಿ ಯಾವುದೇ ಮೂಲಸೌಕರ್ಯಕ್ಕೆ ಕೊರತೆಯಾಗದಂತೆ ಕ್ರಮವಹಿಸಲಾಗುತ್ತದೆ. ಶೌಚಾಲಯ ಮತ್ತು ಕುಡಿಯುವ ನೀರಿನ ಸಮಸ್ಯೆ ಇರುವುದು ಗಮನಕ್ಕೆ ಬಂದಿದ್ದು, ಶೀಘ್ರವೇ ಸಮಸ್ಯೆಯನ್ನು ಬಗೆಹರಿಸಲಾಗುವುದು.

ಇಲ್ಲಿಗೆ ಬರುವ ಪ್ರವಾಸಿಗರಿಗೆ ಪ್ರಕೃತಿ ಸೌಂದರ್ಯ ಸವಿಯುವ ಜತೆಗೆ ಇಲ್ಲಿನ ಕಲೆ ಬಗ್ಗೆ ತಿಳಿಸುವ ನಿಟ್ಟಿನಲ್ಲಿ ‘ಕಲಾಧಾಮ’ ಎಂಬ ಚಟುವಟಿಕೆ ಆರಂಭಿಸುವ ಬಗ್ಗೆ ಚಿಂತಿಸಲಾಗಿದೆ. ಇದರಿಂದಾಗಿ ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ಹಾಗೂ ಉದ್ಯೋಗ ದೊರಕಿಸಿಕೊಟ್ಟಂತಾಗುತ್ತದೆ. ಅಲ್ಲದೆ, ವೃದ್ಧರು ಹಾಗೂ ವಿಕಲಚೇತನರಿಗೆ ಬೆಟ್ಟದ ಸೌಂದರ್ಯ ಸವಿಯಲು ಬ್ಯಾಟರಿ ಚಾಲಿತ ವಾಹನದ ವ್ಯವಸ್ಥೆ ಕಲ್ಪಿಸುವ ಬಗ್ಗೆ ಕ್ರಮಕೈಗೊಳ್ಳಲಾಗುವುದು ಎಂದರು.

ಮನಸೋ ಇಚ್ಛೆ ಪ್ರವೇಶ ಹಾಗೂ ಪಾರ್ಕಿಂಗ್ ಶುಲ್ಕ ಪಡೆಯಲಾಗುತ್ತದೆ ಎಂದು ಸಾರ್ವಜನಿಕರು ಸಚಿವರ ಗಮನಕ್ಕೆ ತಂದರು. ಈ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿ ಶುಲ್ಕ ಕಡಿಮೆ ಮಾಡುವ ಬಗ್ಗೆ ಕ್ರಮಕೈಗೊಳ್ಳಲಾಗುವುದು ಎಂದು ಸಚಿವ ಆನಂದ್ ಸಿಂಗ್ ಇದೇ ವೇಳೆ ಭರವಸೆ ನೀಡಿದರು.

ಮೂಲಭೂತ ಸೌಕರ್ಯದಲ್ಲಿ ಪ್ರವಾಸಿಗರಿಗೆ ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಸಚಿವ ಆನಂದ್ ಸಿಂಗ್ ಅಧಿಕಾರಿಗಳಿಗೆ ಸೂಚಿಸಿದರು.

ಪಾರ್ಕಿಂಗ್, ಉದ್ಯಾನವನ, ಮಕ್ಕಳ ಪಾರ್ಕ್ ನಿರ್ಮಾಣಕ್ಕೆ ಗುರುತಿಸಿರುವ ಸ್ಥಳಕ್ಕೆ ಸಚಿವ ಆನಂದ್ ಸಿಂಗ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಯೋಜನೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ನಂದಿಬೆಟ್ಟವನ್ನು ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ರೂಪುಗೊಳಿಸಬೇಕಿದೆ. ಈ ತಾಣವು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸುಮಾರು ೩೦ ಕಿ.ಮೀ. ದೂರದಲ್ಲಿದೆ. ಬೆಂಗಳೂರು ನಗರದಿಂದ ಒಂದು ಗಂಟೆಯಲ್ಲಿ ಬರಬಹುದು. ಈ ಪ್ರದೇಶವನ್ನು ಅಭಿವೃದ್ಧಿಪಡಿಸಿ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಇನ್ನಷ್ಟು ಕ್ರಮ ವಹಿಸಲಾಗುವುದು ಎಂದರು.

ಜೋಗದಲ್ಲಿ ರೋಪ್ ವೇ!

ಇನ್ನು ಜೋಗ ಜಲಪಾತದಲ್ಲಿ ೧೮೫ ಕೋಟಿ ವೆಚ್ಚದಲ್ಲಿ ರೋಪ್ ವೇ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ದೊರೆತಿದ್ದು, ಕಾಮಗಾರಿಗಳು ಪ್ರಾರಂಭಗೊಳ್ಳಲಿವೆ. ಅದರಂತೆ ಹಂಪಿ, ಹಳೇಬೀಡು, ಬೇಲೂರು, ಬಾದಾಮಿಯಲ್ಲಿ ಪ್ರವಾಸೋದ್ಯಮದ ಇಲಾಖೆಯಿಂದ ಹಲವು ಅಭಿವೃದ್ಧಿ ಕಾಮಗಾರಿಗಳು ಪ್ರಾರಂಭಗೊಂಡಿವೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ  ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ನಿರ್ದೇಶಕರಾದ ಸಿಂಧೂ.ಬಿ‌ ರೂಪೇಶ್, ಕೆಎಸ್ ಟಿಡಿಸಿ ವ್ಯವಸ್ಥಾಪಕ ನಿರ್ದೇಶಕ ಜಗದೀಶ್ ಹಾಗೂ ಅರಣ್ಯ ವಸತಿ ಹಾಗೂ ವಿಹಾರ ಧಾಮ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ  ಮನೋಜ್ ಕುಮಾರ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಟಿ.ಮುನಿರಾಜು ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Rope Way- Nandi hills-Minister -Anand Singh