ಆನ್ ಲೈನ್ ಪರೀಕ್ಷೆ ಕೈಬಿಡುವಂತೆ ಆಗ್ರಹಿಸಿ ಐಟಿಐ ವಿದ್ಯಾರ್ಥಿಗಳಿಂದ ಪ್ರತಿಭಟನೆ…

kannada t-shirts

ತುಮಕೂರು,ಡಿ,23,2019(www.justkannada.in): ಐಟಿಐ ವಿದ್ಯಾರ್ಥಿಗಳಿಗೆ ಆನ್ ಲೈನ್ ಪರೀಕ್ಷೆ ನಡೆಸಲು ಉದ್ದೇಶಿಸಿರುವುದನ್ನು ಕೂಡಲೇ ಕೈಬಿಡಬೇಕು ಎಂದು ಒತ್ತಾಯಿಸಿ  ಐಟಿಐ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ತುಮಕೂರಿನ ಮಧುಗಿರಿಯಲ್ಲಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್.ಎಸ್.ಯು.ಐ)ದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿವಿಧ ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಆನ್ ಲೈನ್ ಪರೀಕ್ಷೆ ಬರೆಯಲು ಗ್ರಾಮೀಣ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಬಹುತೇಕ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಜ್ಞಾನ ಇಲ್ಲ. ಹೀಗಾಗಿ ಮೊದಲಿನಂತೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಐಟಿಐ ಕಾಲೇಜುಗಳಿಂದ ಆಗಮಿಸಿದ ನೂರಾರು ವಿದ್ಯಾರ್ಥಿಗಳು ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಉಪವಿಭಾಗಾಧಿಕಾರಿ ಕಚೇರಿ ಮುಂದೆ ಸಮಾವೇಶಗೊಂಡು ಕೆಲ ಕಾಲ ಧರಣಿ ನಡೆಸಿದರು. ಕೂಡಲೇ ಆನ್ ಲೈನ್ ಪರೀಕ್ಷೆಯನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ಉಪವಿಭಾಗಾಧಿಕಾರಿಗಳಿಗೆ ವಿದ್ಯಾರ್ಥಿಗಳು ಮನವಿ ಪತ್ರವನ್ನು ಸಲ್ಲಿಸಿದರು.

ಆನ್ ಲೈನ್ ಪರೀಕ್ಷೆ ನಡೆಸುವುದರಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸಬೇಕಾಗುತ್ತದೆ. ವಿದ್ಯುತ್ ಪದೇ ಪದೇ ಕೈಕೊಡುತ್ತದೆ. ಸರ್ವರ್ ಸಮರ್ಪಕವಾಗಿರುವುದಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಆನ್ ಲೈನ್ ನಲ್ಲಿ ಪರೀಕ್ಷೆ ಎದುರಿಸಲು ಕಷ್ಟವಾಗುತ್ತದೆ ಎಂದು  ವಿದ್ಯಾರ್ಥಿಗಳು ತಿಳಿಸಿದರು.

Key words: tumkur- ITI students –protest- withdraw – online exam

website developers in mysore