ಬೆಂಗಳೂರಿನಲ್ಲಿ ಗಣೇಶ ಚತುರ್ಥಿ ಆಚರಣೆ:  ಏಕಗವಾಕ್ಷಿ ಪದ್ದತಿಯಲ್ಲಿ ಅನುಮತಿಗೆ ಅವಕಾಶ.

ಬೆಂಗಳೂರು,ಆಗಸ್ಟ್,23,2022(www.justkannada.in):  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಆಚರಣೆಯ ಅಂಗವಾಗಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ಕಾರ್ಯಕ್ರಮ ಆಯೋಜಿಸುವ ಸಂಬಂಧ, ಬಿಬಿಎಂಪಿ, ಬೆಸ್ಕಾಂ, ಪೊಲೀಸ್ ಹಾಗೂ ಆಗ್ನಿಶಾಮಕ ಇಲಾಖೆಗಳನ್ನು ಒಳಗೊಂಡಂತೆ 63 ಉಪ ವಿಭಾಗಗಳಲ್ಲಿ ಏಕಗವಾಕ್ಷಿ ಕೇಂದ್ರಗಳ ಮೂಲಕ ಪೂರ್ವಾನುಮತಿ ಪಡೆಯಲು ಅವಕಾಶ  ಕಲ್ಪಿಸಲಾಗಿದೆ.

ಈ ಕುರಿತು  ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿರುವ ಬಿಬಿಎಂಪಿ ಮುಖ್ಯ ಆಯುಕ್ತರು,  ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕೋರಿ ಬರುವ ಅರ್ಜಿಗಳನ್ನು ಪರಿಶೀಲಿಸಿ ಶೀಘ್ರವಾಗಿ ಅನುಮತಿ ನೀಡುವ ಸಲುವಾಗಿ ಏಕಗವಾಕ್ಷಿ ಪದ್ದತಿ ಜಾರಿಗೊಳಿಸಲಾಗಿದೆ. ಸದರಿ ಏಕಗವಾಕ್ಷಿ ಕೇಂದ್ರಗಳಲ್ಲಿ ಆಯಾ ಇಲಾಖೆಗೆ ಸಂಬಂಧಿಸಿದ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಗಣೇಶ ಮೂರ್ತಿ ಪ್ರತಿಷ್ಠಾಪಿಸುವವರು ಅಗತ್ಯ ದಾಖಲೆಗಳನ್ನು ಅರ್ಜಿಯೊಂದಿಗೆ ಒದಗಿಸಿ ಮುಚ್ಚಳಿಕೆ ಪತ್ರಕ್ಕೆ ಸಹಿ ಹಾಕಿ ನಿರಾಕ್ಷೇಪಣಾ ಪತ್ರ ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದಿದ್ದಾರೆ.

ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಸ್ಥಳವನ್ನು ಸಂಬಂಧಿಸಿದ ಅಧಿಕಾರಿಗಳು ಖುದ್ದಾಗಿ ಪರಿಶೀಲಿಸಿ, ಗಣೇಶ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಅನುಮತಿ ನೀಡುವ ಕುರಿತಂತೆ ಯಾವುದೇ  ರೀತಿಯ ನ್ಯೂನ್ಯತೆಗಳಾಗದಂತೆ ಮೇಲುಸ್ತುವಾರಿ ವಹಿಸಲು ನೋಡಲ್ ಅಧಿಕಾರಿಗಳಿಗೆ ಸೂಚಿಸಿದೆ. ಮುಂದುವರಿದು, ಗಣೇಶ ಮೂರ್ತಿ ಪ್ರತಿಷ್ಠಾಪಿಸುವವರು ಪಾಲಿಕೆ ವ್ಯಾಪ್ತಿಯಲ್ಲಿ ಸ್ಥಾಪಿಸಿರುವ ಏಕಗವಾಕ್ಷಿ ಕೇಂದ್ರಗಳಲ್ಲಿ ಅನುಮತಿ ಪಡೆಯಲು ಕೋರಿದೆ ಎಂದು ತಿಳಿಸಿದ್ದಾರೆ.

ಹಾಗೆಯೇ ಹೆಚ್ಚಿನ ಮಾಹಿತಿಗಾಗಿ ಪತ್ರಿಕಾ ಪ್ರಕಟಣೆ, ಕಛೇರಿ ಆದೇಶ,  ಏಕಗವಾಕ್ಷಿ ಕೇಂದ್ರಗಳ ಮಾಹಿತಿ ಹಾಗೂ ಇಲಾಖಾವಾರು ನೋಡಲ್ ಅಧಿಕಾರಿಗಳ ವಿವರಗಳು ಮತ್ತು ದೂರವಾಣಿ ಸಂಖ್ಯೆಯನ್ನು ಲಗತ್ತಿಸಿದೆ.

Key words: Ganesh Chaturthi -celebration –Bengaluru-bbmp