Wednesday, October 7, 2026

BDA Apartments

immense respect BDA JK_Adv BDA Adv
Home Front Page 20 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿ: ಹೂಡಿಕೆದಾರರ ಆಕರ್ಷಿಸಲು 13,692 ಕೋಟಿ ರೂ. ನೆರವು ಘೋಷಿಸಿದ...

20 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿ: ಹೂಡಿಕೆದಾರರ ಆಕರ್ಷಿಸಲು 13,692 ಕೋಟಿ ರೂ. ನೆರವು ಘೋಷಿಸಿದ ಸಿಎಂ

ಬೆಂಗಳೂರು,ಮಾರ್ಚ್,7,2025 (www.justkannada.in): ಕೈಗಾರಿಕಾ ವಲಯದಲ್ಲಿ ಹೂಡಿಕೆ ಸ್ನೇಹಿ ವಾತಾವರಣವನ್ನು ನಿರ್ಮಿಸುವಲ್ಲಿ ಕರ್ನಾಟಕವು ನೆಚ್ಚಿನ ರಾಜ್ಯವಾಗಿದೆ. ಹೂಡಿಕೆದಾರರನ್ನು ಆಕರ್ಷಿಸಲು 13,692 ಕೋಟಿ ರೂ. ಆರ್ಥಿಕ ನೆರವು ನೀಡಲು ಸರ್ಕಾರ ಸಮ್ಮತಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.

ವಿಧಾನಸಭೆಯಲ್ಲಿ 2025-26ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ, ನಮ್ಮ ಸರ್ಕಾರವು ಹೆಚ್ಚಿನ ಉದ್ಯೋಗವನ್ನು ಸೃಜಿಸುವುದರೊಂದಿಗೆ, ಕೈಗಾರಿಕಾ ಮತ್ತು ಉತ್ಪಾದನಾ ವಲಯದ ಸಮಗ್ರ ಅಭಿವೃದ್ಧಿಗೆ ಬದ್ಧವಾಗಿದೆ. ರಾಜ್ಯ ಸರ್ಕಾರವು  ಕೈಗಾರಿಕಾ ನೀತಿ 2025-30ಕ್ಕೆ ಚಾಲನೆ ನೀಡಿದ್ದು, ಇದು 2030 ರ ವೇಳೆಗೆ ಉತ್ಪಾದನಾ ವಲಯದಲ್ಲಿ ಶೇ.12ರಷ್ಟು ವಾರ್ಷಿಕ ಬೆಳವಣಿಗೆಯನ್ನು ಸಾಧಿಸುವುದರೊಂದಿಗೆ 20 ಲಕ್ಷ ಉದ್ಯೋಗಗಳನ್ನು ಸೃಜಿಸುವ ಗುರಿ ಹೊಂದಿದೆ. 2024-25ನೇ ಸಾಲಿನಲ್ಲಿ ಕೈಗಾರಿಕಾ ವಲಯವು  ಶೇ.5.8ರಷ್ಟು ಬೆಳವಣಿಗೆ ಸಾಧಿಸಿದೆ. ರಾಜ್ಯಕ್ಕೆ ಹೆಚ್ಚಿನ ಹೂಡಿಕೆಗಳನ್ನು ಆಕರ್ಷಿಸುವ ಉದ್ದೇಶದಿಂದ ಒಟ್ಟು 13,692 ಕೋಟಿ ರೂ. ಆರ್ಥಿಕ ನೆರವು ಮತ್ತು ಸಹಾಯಧನವನ್ನು ಒದಗಿಸಲು ಸರ್ಕಾರವು ಸಮ್ಮತಿಸಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಆರ್ಥಿಕತೆಯಲ್ಲಿ ಸೇವಾ ವಲಯದ ಕೊಡುಗೆಯೂ ಪ್ರಮುಖವಾಗಿದ್ದು, ಒಟ್ಟು ಮೌಲ್ಯವರ್ಧನೆಯಲ್ಲಿ (Gross Value Added) ಸೇವಾ ವಲಯಗಳ ಪಾಲು ಶೇ.66 ರಷ್ಟಿದೆ. 2024-25ನೇ ಸಾಲಿಗೆ ರಾಜ್ಯದಲ್ಲಿ ಸೇವಾ ವಲಯವು ಗಣನೀಯವಾಗಿ ಬೆಳವಣಿಗೆಯಾಗಿದ್ದು, ಶೇ.8.9 ರಷ್ಟು ಬೆಳವಣಿಗೆ ದಾಖಲಿಸುವ ಮೂಲಕ ದೇಶದ ಆರ್ಥಿಕತೆಯಲ್ಲಿನ ಸೇವಾ ವಲಯದ ಬೆಳವಣಿಗೆ ಶೇ.7.2 ಕ್ಕಿಂತ ಹೆಚ್ಚಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಆರ್ಥಿಕ ಬೆಳವಣಿಗೆ ಮತ್ತು ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಜಿಸಲು ಸರ್ಕಾರವು ಮಾಹಿತಿ ತಂತ್ರಜ್ಞಾನ, ಪ್ರವಾಸೋದ್ಯಮ, ಜೈವಿಕ ತಂತ್ರಜ್ಞಾನ ಸೇರಿದಂತೆ ಕೈಗಾರಿಕೆ ಮತ್ತು ಸೇವಾ ವಲಯದಲ್ಲಿ ಹಲವು ನೀತಿಗಳನ್ನು ಜಾರಿಗೆ ತಂದಿದೆ. ಈ ನೀತಿಗಳು ಮಾನವ ಸಂಪನ್ಮೂಲವನ್ನು ಸಮರ್ಥವಾಗಿ ಬಳಸುವುದರ ಜೊತೆಗೆ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಹೆಚ್ಚಿನ ಹೂಡಿಕೆಗಳನ್ನು ಉತ್ತೇಜಿಸಲಿವೆ. ಸರ್ಕಾರವು ಜಾರಿಗೆ ತಂದಿರುವ ಈ ನೀತಿಗಳಿಂದ ರಾಜ್ಯದಲ್ಲಿ ಅಂದಾಜು ಒಂದು ಲಕ್ಷ ಕೋಟಿ ರೂ. ಹೂಡಿಕೆಯನ್ನು ನಿರೀಕ್ಷಿಸಲಾಗಿದೆ. ಈ ಉದ್ದೇಶಕ್ಕೆ ಸರ್ಕಾರವು 13,500 ಕೋಟಿ ರೂ. ಸಹಾಯಧನ ಮತ್ತು ಆರ್ಥಿಕ ನೆರವು ನೀಡಲು ಸಹಮತಿಸಿದೆ ಎಂದು ನುಡಿದಿದ್ದಾರೆ

ನಮ್ಮ ಸರ್ಕಾರವು ಆರ್ಥಿಕತೆಯ ಬೆಳವಣಿಗೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿದ್ದು, 2024-25ರ ಡಿಸೆಂಬರ್‌ ಅಂತ್ಯದವರೆಗೆ 4.4 ಬಿಲಿಯನ್ ಡಾಲರ್ ಮೌಲ್ಯದ ವಿದೇಶಿ ಹೂಡಿಕೆಗಳನ್ನು ಆಕರ್ಷಿಸುವ ಮೂಲಕ ದೇಶದಲ್ಲಿಯೇ ಮೂರನೇ ಸ್ಥಾನದಲ್ಲಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದರು.

Key words: Industrial sector, CM Siddaramaiah, Budget