ಪಾಕಿಸ್ತಾನ ಪರ ಘೋಷಣೆ ಪ್ರಕರಣ: ಎಸ್ಐಟಿ ತನಿಖೆಗೆ ಗೃಹ ಇಲಾಖೆ ಸೂಚನೆ

ಬೆಂಗಳೂರು, ಫೆಬ್ರವರಿ 22, 2020 (www.justkannada.in): ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

ಇದರ ತನಿಖೆ ನಡೆಸಲು ವಿಶೇಷ ತನಿಖಾ ತಂಡ(ಎಸ್‍ಐಟಿ) ರಚನೆ ಮಾಡಿದೆ. ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯ ಎಸಿಪಿ ಮಹಾಂತ ರೆಡ್ಡಿ ನೇತೃತ್ವದಲ್ಲಿ ಎಸ್‍ಐಟಿ ತಂಡವನ್ನು ರಚಿಸಲಾಗಿದೆ.

ಚಾಮರಾಜಪೇಟೆ ಇನ್‍ಸ್ಪೆಕ್ಟರ್‍ಗಳಾದ ಸುರೇಶ್ ಮತ್ತು ಕುಮಾರಸ್ವಾಮಿ ಸೇರಿದಂತೆ ಮತ್ತಿತರರು ತನಿಖಾ ತಂಡದಲ್ಲಿ ಇರಲಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಅಮೂಲ್ಯ ಎಂಬ ವಿದ್ಯಾರ್ಥಿನಿ ಪಾಕ್ ಪರ ಘೋಷಣೆ ಕೂಗಿದ್ದಳು.

ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಅಮೂಲ್ಯ ಲಿಯೋನ ಹಿಂದೆ ಯಾರ್ಯಾರ ಕೈವಾಡವಿದೆ, ಇದಕ್ಕೆ ಕುಮ್ಮಕ್ಕು ನೀಡಿದವರು ಯಾರು, ಸಂಘಟನೆಗಳು ನಕ್ಸಲ್ ಜೊತೆ ಸಂಪರ್ಕ ಹೊಂದಿದ್ದಾರಾ? ಸೇರಿದಂತೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲಿದೆ. ಪ್ರಕರಣ ಕುರಿತಂತೆ ವಿಸ್ತೃತ ತನಿಖೆ ನಡೆಸಿ ವರದಿ ನೀಡಬೇಕೆಂದು ಗೃಹ ಇಲಾಖೆ ಸೂಚನೆ ಕೊಟ್ಟಿದೆ.